fbpx

ಸಡಗರದಿಂದ ಗಣರಾಜ್ಯೋತ್ಸವ ಆಚರಣೆ – ತುಳಸಿ ಮದ್ದಿನೇನಿ

ಕೊಪ್ಪಳ ಜ.  : ಪ್ರತಿ ವರ್ಷದಂತೆ ಈ ಬಾರಿಯೂ ಗಣರಾಜ್ಯೋತ್ಸವವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಹೇಳಿದ್ದಾರೆ.
  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಗಣರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
  ಪ್ರತಿ ವರ್ಷದಂತೆ ಈ ಸಲವೂ ಗಣರಾಜ್ಯೋತ್ಸವವನ್ನು ಸಡಗರ, ಸಂಭ್ರಮದಿಂದ ಅರ್ಥಪೂರ್ಣವಾಗಿ ಆಚರಿಸಲಾಗುವುದು.  ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ ೨೬ ರಂದು ಬೆಳಿಗ್ಗೆ ೦೯ ಗಂಟೆಗೆ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ.  ಧ್ವಜಾರೋಹಣ ಸಮಾರಂಭದಲ್ಲಿ ಪೊಲೀಸ್, ಎನ್.ಸಿ.ಸಿ., ಗೃಹರಕ್ಷಕ ದಳ, ಸ್ಕೌಟ್ಸ್, ಗೈಡ್ಸ್, ರಾಷ್ಟ್ರೀಯ ಸೇವಾದಳ ತಂಡಗಳು ಪಥಸಂಚಲನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.  ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪ್ರತಿಬಿಂಬಿಸುವ ಸ್ತಬ್ಧ ಚಿತ್ರಗಳನ್ನು ಏರ್ಪಡಿಸಲಾಗುವುದು.  ಎಲ್ಲಾ ಸರ್ಕಾರಿ ಕಚೇರಿ ಕಟ್ಟಡ ಸೇರಿದಂತೆ, ಅಶೋಕ ವೃತ್ತ, ಬಸವೇಶ್ವರ ವೃತ್ತ ಮುಂತಾದ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗುವುದು.  ಕೊಪ್ಪಳ ತಹಸಿಲ್ದಾರ್ ಕಚೇರಿ ಆವರಣದಿಂದ ಸ್ತಬ್ಧ ಚಿತ್ರಗಳು ಜಿಲ್ಲಾ ಕ್ರೀಡಾಂಗಣಕ್ಕೆ ಹೊರಡಲಿವೆ.  ಧ್ವಜವಂದನೆ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಮಹನೀಯರುಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಈ ಎಲ್ಲ ಕಾರ್ಯಕ್ರಮಗಳ ಯಶಸ್ವಿಗಾಗಿ ಮೂರು ಉಪಸಮಿತಿಗಳನ್ನು ರಚಿಸಲಾಗಿದ್ದು, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ರಾಜಾರಾಂ ಅವರ ಅಧ್ಯಕ್ಷತೆಯಲ್ಲಿ ಸ್ತಬ್ಧ ಚಿತ್ರಗಳ ಪ್ರದರ್ಶನ ಸಮಿತಿ ನೇಮಿಸಲಾಗಿದೆ.  ಅದೇ ರೀತಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಹೆಚ್. ವೀರಣ್ಣ ಅಧ್ಯಕ್ಷತೆಯಲ್ಲಿ ಸಾಂಸ್ಕೃತಿಕ ಸಮಿತಿ ಹಾಗೂ ಸಹಾಯಕ ಆಯುಕ್ತ ಮಂಜುನಾಥ್ ಅವರ ನೇತೃತ್ವದಲ್ಲಿ ವೇದಿಕೆ ಸಮಿತಿ ರಚಿಸಲಾಗಿದೆ.  ಅಂದು ಸಂಜೆ ಸಾರ್ವಜನಿಕ ಮೈದಾನದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಲಿದೆ.  ಗಣರಾಜ್ಯೋತ್ಸವ ಕಾರ್ಯಕ್ರಮ ಯಶಸ್ವಿಗೊಳಿಸಲು ಆಯಾ ಉಪಸಮಿತಿ ಅಧ್ಯಕ್ಷರು ಕೂಡಲೆ ಸಭೆ ಕರೆದು ನಗರದ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಅವರ ಸಹಕಾರ ಕೋರುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
  ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ರಾಜಾರಾಂ, ಪ್ರಬಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ಮಹಾಂತೇಶ್ ಸಹಾಯಕ ಆಯುಕ್ತ ಮಂಜುನಾಥ್, ಜಿಲ್ಲಾ ಬಿ.ಸಿ.ಎಂ. ಅಧಿಕಾರಿ ಬಿ. ಕಲ್ಲೇಶ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಅಶೋಕ್ ಕಲಘಟಗಿ,  ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಹೆಚ್. ವೀರಣ್ಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ದೊರೈಸ್ವಾಮಿ, ತಹಸಿಲ್ದಾರ್ ಬಿ.ಎಲ್. ಗೋಠೆ, ಅಲ್ಲದೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ವೀರಕನ್ನಡಿಗ ಸಂಘದ ಅಧ್ಯಕ್ಷ ಶಿವಾನಂದ ಹೊದ್ಲೂರ್, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿ ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಿದರು.
Please follow and like us:
error

Leave a Reply

error: Content is protected !!