You are here
Home > Koppal News > ಮತದಾರರ ಜಾಗೃತಿಗೆ ಏ. ೧೦ ರಂದು ಜಿಲ್ಲೆಯಾದ್ಯಂತ ವಿಶೇಷ ಕಾರ್ಯಕ್ರಮ

ಮತದಾರರ ಜಾಗೃತಿಗೆ ಏ. ೧೦ ರಂದು ಜಿಲ್ಲೆಯಾದ್ಯಂತ ವಿಶೇಷ ಕಾರ್ಯಕ್ರಮ

 ಮತದಾರರ ಜಾಗೃತಿಗಾಗಿ ಹಾಗೂ ಕಡ್ಡಾಯ ಮತದಾನಕ್ಕೆ ಪ್ರೇರೇಪಿಸುವ ನಿಟ್ಟಿನಲ್ಲಿ ಏ. ೧೦ ರಂದು ಕೊಪ್ಪಳ ಜಿಲ್ಲೆಯಾದ್ಯಂತ ಎರಡನೆ ಹಂತದಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಿ.ಕೆ. ರವಿ ಅವರು ಹೇಳಿದರು.
     ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಸ್ವೀಪ್ ಕಮಿಟಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
     ಮತದಾರರ ನೋಂದಣಿ ಹಾಗೂ ಕಡ್ಡಾಯ ಮತದಾನಕ್ಕೆ ಮೊದಲ ಹಂತದಲ್ಲಿ ಜಿಲ್ಲೆಯಾದ್ಯಂತ ಜಾಗೃತಿ ಜಾಥಾ, ಮ್ಯಾರಥಾನ್ ಓಟ ಸೇರಿದಂತೆ ಹಲವು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಿ, ಮತದಾರರನ್ನು ಸೆಳೆಯಲಾಗಿತ್ತು.  ಇದೀಗ ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಪ್ರೇರೇಪಿಸುವ ನಿಟ್ಟಿನಲ್ಲಿ ಸ್ವೀಪ್ ಕಾರ್ಯಕ್ರಮದಡಿ ಎರಡನೆ ಹಂತದಲ್ಲಿ ಜಿಲ್ಲೆಯಾದ್ಯಂತ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.  ಏ. ೧೦ ರಂದು ಜಿಲ್ಲೆಯ ಎಲ್ಲಾ ನಗರ, ಪಟ್ಟಣ ಹಾಗೂ ಗ್ರಾಮಗಳಲ್ಲಿನ ಸರ್ಕಾರಿ, ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಂದ ಮತದಾರರ ಜಾಗೃತಿಗೆ ಪ್ರಭಾತಫೇರಿ ಹಮ್ಮಿಕೊಳ್ಳಲಾಗಿದ್ದು, ಅಂದು ಆಯಾ ಶಾಲೆಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ಪ್ರಗತಿಪತ್ರ ನೀಡುವ ಸಂದರ್ಭದಲ್ಲಿ ಎಲ್ಲ ವಿದ್ಯಾರ್ಥಿಗಳ ಪೋಷಕರು, ಪಾಲಕರು ಮತದಾನದ ಪ್ರತಿಜ್ಞಾ ವಿಧಿಯನ್ನು ಕಡ್ಡಾಯವಾಗಿ ಸ್ವೀಕರಿಸುವಂತಾಗಬೇಕು.  ಅದೇ ದಿನದಂದು ಬೆಳಿಗ್ಗೆ ೮ ಗಂಟೆಗೆ ಎಲ್ಲ ಮಕ್ಕಳು ಕಡ್ಡಾಯ ಮತದಾನದ ಬಗ್ಗೆ ಘೋಷಣೆಗಳೊಂದಿಗೆ ಆಯಾ ಗ್ರಾಮದಲ್ಲಿ ಪ್ರಭಾತಫೇರಿ ನಡೆಸಬೇಕು.  ಎಲ್ಲ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಎ.ಎನ್.ಎಂ. ಕಾರ್ಯಕರ್ತೆಯರು, ಜಾಥಾ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಇದು ರಾಷ್ಟ್ರೀಯ ಕಾರ್ಯಕ್ರಮವಾಗಿರುವುದರಿಂದ ಕಾರ್ಯಕ್ರಮ ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.  ಕಾರ್ಯಕ್ರಮದ ರೂಪುರೇಷೆಯನ್ನು ಆಯಾ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಕೈಗೊಂಡು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.  ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ತಲಾ ಇಬ್ಬರು ಅಧಿಕಾರಿಗಳನ್ನು ಈ ಕಾರ್ಯಕ್ರಮದ ವೀಕ್ಷಕರನ್ನಾಗಿ ನೇಮಿಸಲಾಗಿದ್ದು, ಈ ಅಧಿಕಾರಿಗಳು ಏ. ೧೦ ರಂದು ಗ್ರಾಮಗಳಿಗೆ ಭೇಟಿ ನೀಡಿ, ಕಾರ್ಯಕ್ರಮಗಳ ಅನುಷ್ಠಾನ ಕುರಿತಂತೆ ಮೇಲ್ವಿಚಾರಣೆ ನಡೆಸಿ, ವರದಿ ಸಲ್ಲಿಸುವಂತೆ ಸೂಚನೆ ನೀಡಿದರು.
     ಜಿಲ್ಲೆಯಲ್ಲಿರುವ ಎಲ್ಲ ವಸತಿ ನಿಲಯಗಳ ಮುಂಭಾಗದಲ್ಲಿ ಮತದಾರರ ಜಾಗೃತಿಗೆ ಸಂಬಂಧಿಸಿದಂತೆ ಕನಿಷ್ಟ ೨ ಫ್ಲೆಕ್ಸ್ ಬೋರ್ಡ್‌ಗಳನ್ನು ಹಾಕಬೇಕು.  ಪ್ರತಿ ತಾಲೂಕು ಕೇಂದ್ರದಲ್ಲಿ ಎಲ್ಲ ವಸತಿ ನಿಲಯಗಳ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ಕಾರ್ಯಕ್ರಮ ರೂಪಿಸಬೇಕು ಎಂದು ಜಿಲ್ಲಾ ಸಮಾಜಕಲ್ಯಾಣಾಧಿಕಾರಿಗಳಿಗೆ ಜಿಲ್ಲಾ ಮಟ್ಟದ ಸ್ವೀಪ್ ಸಮಿತಿಯ ಅಧ್ಯಕ್ಷರೂ ಆಗಿರುವ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಿ.ಕೆ. ರವಿ ಅವರು ಸೂಚನೆ ನೀಡಿದರು.
ಸಭೆಗೆ ನಿರ್ಧಾರ : ಮತದಾರರ ಜಾಗೃತಿಗಾಗಿ ಸ್ವೀಪ್ ಸಮಿತಿಯಿಂದ ಕರಪತ್ರವನ್ನು ಈಗಾಗಲೆ ಮುದ್ರಿಸಲಾಗಿದ್ದು, ಈ ಕರಪತ್ರಗಳನ್ನು ಎಲ್ಲ ಬೂತ್ ಮಟ್ಟದ ಅಧಿಕಾರಿಗಳು ಚುನಾವಣಾ ಗುರುತಿನ ಚೀಟಿ ನೀಡುವ ಸಂದರ್ಭದಲ್ಲಿ ಮತದಾರರ ಪ್ರತಿಜ್ಞಾ ವಿಧಿ ಹಾಗೂ ಸೂಕ್ತ ಮಾಹಿತಿಯನ್ನೊಳಗೊಂಡ  ಕರಪತ್ರವನ್ನು ಎಲ್ಲ ಮತದಾರರಿಗೆ ಕಡ್ಡಾಯವಾಗಿ ವಿತರಿಸುವಂತೆ ಯೋಜನೆ ರೂಪಿಸಲಾಗಿದ್ದು, ಈ ನಿಟ್ಟಿನಲ್ಲಿ ಆಯಾ ಕ್ಷೇತ್ರ ಚುನಾವಣಾ ಅಧಿಕಾರಿಗಳು, ಗ್ರಾಮಲೆಕ್ಕಿಗರು, ಮತಗಟ್ಟೆ ಅಧಿಕಾರಿಗಳು, ಅಂಗನವಾಡಿ, ಆಶಾ ಕಾರ್ಯಕರ್ತರುಗಳಿಗೆ ಸಭೆಯಲ್ಲಿ ಸೂಕ್ತ ಮಾಹಿತಿ ನೀಡಲು ನಿರ್ಧರಿಸಲಾಗಿದ್ದು, ಏ. ೧೭ ರಂದು ಕೊಪ್ಪಳ, ಏ. ೧೮ ರಂದು ಕುಷ್ಟಗಿ, ಏ. ೧೯ ರಂದು ಯಲಬುರ್ಗಾ, ಏ. ೨೦ ರಂದು ಗಂಗಾವತಿ ಹಾಗೂ ಏ. ೨೧ ರಂದು  ಕನಕಗಿರಿಯಲ್ಲಿ ಸಭೆ ನಡೆಸಲಾಗುವುದು.  ಸಭೆಯ ಸ್ಥಳವನ್ನು ಆಯಾ ಕ್ಷೇತ್ರ ಚುನಾವಣಾಧಿಕಾರಿಗಳು ನಿಗದಿಪಡಿಸಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಸೂಚನೆ ನೀಡಲಾಯಿತು.  ಈ ಸಭೆಯಲ್ಲಿ ಸ್ವೀಪ್ ಕಾರ್ಯಕ್ರಮದ ತಾಲೂಕು ಮಟ್ಟದ ಸಮಿತಿಯ ಅಧಿಕಾರಿಗಳು ಸಹ ತಪ್ಪದೆ ಭಾಗವಹಿಸಬೇಕು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಿ.ಕೆ. ರವಿ ಅವರು ತಿಳಿಸಿದರು.   
     ಸಭೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿಯಾಗಿರುವ ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹಾದೇವಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿ.ಎನ್. ಘಾಡಿ, ಜಿಲ್ಲಾ ಸಮಾಜಕಲ್ಯಾಣ ಅಧಿಕಾರಿ ಮಂಜೂರ್ ಹುಸೇನ್, ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಎನ್.ಎಸ್.ಎಸ್. ಸಮನ್ವಯಾಧಿಕಾರಿಗಳು, ತಾಲೂಕು ವೈದ್ಯಾಧಿಕಾರಿಗಳು, ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Top