ಮೀಟರ್ ಅಳವಡಿಸುವ ರೈತರಿಗೆ ನಿರಂತರ ಜ್ಯೋತಿಯಡಿ ೨೪ ತಾಸು ವಿದ್ಯುತ್- ಡಿ.ಕೆ. ಶಿವಕುಮಾರ್

ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸುವ ರೈತರಿಗೆ ನಿರಂತರ ಜ್ಯೋತಿಯಡಿ ೨೪ ತಾಸು ವಿದ್ಯುತ್ ಪೂರೈಕೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ರಾಜ್ಯ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
     ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕು ಕನಕಗಿರಿಯಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ರೈಸ್ ಟೆಕ್ನಾಲಜಿ ಪಾರ್ಕ್ ಶಂಕುಸ್ಥಾಪನೆ, ಕೆರೆಗಳಿಗೆ ತುಂಗಭದ್ರಾ ನೀರು ತುಂಬಿಸುವ ಯೋಜನೆಯೂ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
     ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸಿಕೊಳ್ಳಲು ರೈತರಿಗೆ ಸೂಚನೆ ನೀಡಲಾಗಿದೆ.  ಸರ್ಕಾರ ಪ್ರತಿ ಯುನಿಟ್ ವಿದ್ಯುತ್‌ಗೆ ೪. ೩೫ ರೂ. ವೆಚ್ಚ ಮಾಡುತ್ತಿದ್ದು, ಮೀಟರ್ ಅಳವಡಿಸಿಕೊಳ್ಳುವ ರೈತರಿಗೆ ನಿರಂತರ ಜ್ಯೋತಿ ಯೋಜನೆಯಡಿ ಸಮರ್ಪಕ ವಿದ್ಯುತ್ ಪೂರೈಸುವ ಯೋಜನೆಯನ್ನು ಎರಡು ಹಂತಗಳಲ್ಲಿ ಜಾರಿಗೊಳಿಸುತ್ತಿದ್ದು, ಈಗಾಗಲೆ ಮೊದಲ ಹಂತದ ಯೋಜನೆ ಜಾರಿಯಲ್ಲಿದೆ.  ಎರಡನೆ ಹಂತದಲ್ಲಿ ಇಡೀ ರಾಜ್ಯದ ಎಲ್ಲ ಪ್ರದೇಶಗಳಿಗೆ ನಿರಂತರ ಜ್ಯೋತಿ ಯೋಜನೆ ಜಾರಿಗೆ ಬರಲಿದೆ.  ಜಮೀನಿನಲ್ಲಿ ಸೋಲಾರ್ ಫಲಕಗಳನ್ನು ಅಳವಡಿಸಿ, ವಿದ್ಯುತ್ ಉತ್ಪಾದನೆ ಮಾಡಲು ಆಸಕ್ತಿ ಹೊಂದಿರುವವರಿಂದ ಅರ್ಜಿ ಆಹ್ವಾನಿಸಲಾಗಿತ್ತು.  ೯೦೦ ರಿಂದ ೧೦೦೦ ಅರ್ಜಿಗಳು ಮಾತ್ರ ಬರುವ ನಿರೀಕ್ಷೆಯನ್ನಿಟ್ಟುಕೊಂಡು ಇದನ್ನು ಪ್ರಾಯೋಗಿಕವಾಗಿ ಜಾರಿಗೆ ತರಲು ನಿರ್ಧರಿಸಲಾಗಿತ್ತು.  ಆದರೆ ಇದೀಗ ಸುಮಾರು ೧೦ ಸಾವಿರಕ್ಕೂ ಹೆಚ್ಚು ಜನರು ಅರ್ಜಿ ಸಲ್ಲಿಸಿದ್ದು, ೨೦ ಸಾವಿರ ಮೆಗಾವ್ಯಾಟ್ ನಷ್ಟು ವಿದ್ಯುತ್ ಉತ್ಪಾದನೆಯಾಗುವಷ್ಟು ಅರ್ಜಿ ಸಲ್ಲಿಕೆಯಾಗಿವೆ.  ಆದರೆ ಸರ್ಕಾರ ಮೊದಲು ಬಂದವರಿಗೆ ಮೊದಲ ಆದ್ಯತೆ ಮಾದರಿಯಲ್ಲಿ ಅರ್ಜಿಗಳನ್ನು ಪರಿಗಣಿಸಲು ನಿರ್ಧರಿಸಿದ್ದು, ಹಂತ ಹಂತವಾಗಿ ಈ ಯೋಜನೆಯನ್ನು ವಿಸ್ತರಿಸುವ ಕುರಿತು ಚಿಂತನೆ ನಡೆಸಲಾಗುವುದು ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
     ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು.  ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ್ ತಂಗಡಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತಿ ರಾಜ್ ಸಚಿವ ಹೆಚ್.ಕೆ. ಪಾಟೀಲ್ ಮಾತನಾಡಿದರು.  ಕಾರ್ಮಿಕ ಸಚಿವ ಪರಮೇಶ್ವರ ನಾಯಕ್, ಶಾಸಕರುಗಳಾದ ಇಕ್ಬಾಲ್ ಅನ್ಸಾರಿ, ರಾಘವೇಂದ್ರ ಹಿಟ್ನಾಳ್, ಬಸವರಾಜ ರಾಯರಡ್ಡಿ, ದೊಡ್ಡನಗೌಡ ಪಾಟೀಲ್, ಹಾಲಪ್ಪ ಆಚಾರ್, ಸಂಸದ ಸಂಗಣ್ಣ ಕರಡಿ, ಜಿ.ಪಂ. ಅಧ್ಯಕ್ಷ ಅಮರೇಶ್ ಕುಳಗಿ, ಉಪಾಧ್ಯಕ್ಷ ವಿನಯಕುಮಾರ ಮೇಲಿನಮನಿ, ಜಿಲ್ಲಾಧಿಕಾರಿ ಆರ್.ಆರ್. ಜನ್ನು, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.

Please follow and like us:
error