ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಸಮರ್ಥರು- ಕೆ. ನಾಗರತ್ನ.

ಕೊಪ್ಪಳ ಮಾ. ೦೮ (ಕ ವಾ) ಪ್ರಸ್ತುತ ದಿನಮಾನಗಳಲ್ಲಿ ದೇಶದ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಸಮರ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ. ನಾಗರತ್ನ ಅವರು ಹೇಳಿದರು.
     ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಜಿಲ್ಲಾ ನ್ಯಾಯಾಲಯ ಆವರಣದ ಸಾಕ್ಷಿದಾರ ಮೊಗಸಾಲೆಯಲ್ಲಿ ಮಂಗಳವಾರದಂದು ಏರ್ಪಡಿಸಲಾಗಿದ್ದ ವಿಶೇಷ ಕಾನೂನು ವಿದ್ಯಾಪ್ರಸಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
     ಮಹಿಳೆಯರು ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಿದ ಫಲವಾಗಿ ವಿಶ್ವಸಂಸ್ಥೆ ೧೯೭೫ ರಲ್ಲಿ ಮಹಿಳಾ ಹೋರಾಟಕ್ಕೆ ಮನ್ನಣೆಯನ್ನು ನೀಡಿ, ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಗುತ್ತಿದೆ.  ಮಹಿಳೆಯರ ರಕ್ಷಣೆಗಾಗಿ ಮಹಿಳಾ ಕಾನೂನುಗಳನ್ನು ಜಾರಿಗೆ ತರಲಾಗಿದ್ದು, ಇದರಿಂದ ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರು ಸಕ್ರಿಯವಾಗಿ ತೊಡಗಿಸಿಕೊಂಡು, ಯಶಸ್ಸು ಕಾಣಲು ಸಾಧ್ಯವಾಗಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ. ನಾಗರತ್ನ ಅವರು ಹೇಳಿದರು.
     ಮಹಿಳಾ ದಿನಾಚರಣೆ ನಿಮಿತ್ಯ ನಡೆದ ಕಾನೂನು ಅರಿವು ಕಾರ್ಯಕ್ರಮದ ಅಂಗವಾಗಿ ವಿಜಯಲಕ್ಷ್ಮಿ ಕೊಟಗಿ ಅವರು ಮಹಿಳಾ ದೌರ್ಜನ್ಯ ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆಯ ಕುರಿತು ಹಾಗೂ ವಕೀಲ ವಿ.ಎಂ. ಭೂಸನೂರ ಮಠ ಅವರು ಹಿಂದು ಮಹಿಳಾ ಆಸ್ತಿ ಕುರಿತು ವಿಶೇಷ ಉಪನ್ಯಾಸ ನೀಡಿದರು.  ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆರ್.ಬಿ. ಪಾನಗಂಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.  ಹಿರಿಯ ಸಿವಿಲ್ ನ್ಯಾಯಾಧೀಶ ಬಿ. ದಶರಥ, ಕಿರಿಯ ಸಿವಿಲ್ ನ್ಯಾಯಾಧೀಶ ಕವಿತಾ ಶಿವರಾಯ ಉಂಡೋಡಿ, ಸರ್ಕಾರಿ ವಕೀಲ ಆಸೀಪ್ ಅಲಿ, ರಾಜ್ಯ ವಕೀಲರ ಪರಿಷತ್ ಸದಸ್ಯೆ ಸಂಧ್ಯಾ ಮಾದಿನೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಮಂಜುನಾಥ ಉಪಸ್ಥಿತರಿದ್ದರು.

Please follow and like us:
error