ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ ಯೋಜನೆ : ನ್ಯಾಯಬೆಲೆ ಅಂಗಡಿಗಳಲ್ಲಿ ನೋಂದಣಿ

 ಬಿಪಿಎಲ್ ಕುಟುಂಬಗಳಿಗೆ ವೈದ್ಯಕೀಯ ವೆಚ್ಚ ಭರಿಸುವ ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ ಯೋಜನೆಗಾಗಿ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರು ಆಯಾ ನ್ಯಾಯಬೆಲೆ ಅಂಗಡಿಗಳಲ್ಲಿ ೩೦ ರೂ. ಶುಲ್ಕ ಪಾವತಿಸಿ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ ಎಂದು ಕೊಪ್ಪಳ ನಗರಸಭೆ ಉಪಾಧ್ಯಕ್ಷ ಬಾಳಪ್ಪ ಬಾರಕೇರ ಅವರು ಹೇಳಿದರು.
  ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಹತ್ವಕಾಂಕ್ಷಿ ಯೋಜನೆಯಾಗಿರುವ ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ ಯೋಜನೆಯಡಿ ಕೊಪ್ಪಳ ನಗರಸಭೆ ಸಭಾ ಭವನದಲ್ಲಿ ಆಯೋಜಿಸಲಾಗಿದ್ದ ಬಿಪಿಎಲ್ ಕಾರ್ಡುದಾರರ ನೋಂದಣಿ ಪ್ರಕ್ರಿಯೆ ಚಾಲನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
  ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿದಾರರಿಗೆ ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ ಯೋಜನೆಯಡಿ ವರ್ಷಕ್ಕೆ ೩೦ ಸಾವಿರ ವರೆಗಿನ ವೈದ್ಯಕೀಯ ವೆಚ್ಚವನ್ನು ಯೋಜನೆಯಿಂದ ಭರಿಸುವ ಸೌಲಭ್ಯವಿದೆ.  ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಫಲಾನುಭವಿಗಳು ಯೋಜನೆಯ ಸೌಲಭ್ಯ ಪಡೆಯಬೇಕು ಎಂದರು.
  ನಗರಸಭೆ ಪೌರಾಯುಕ್ತ ರಮೇಶ್ ಪಟ್ಟೇದಾರ್ ಅವರು, ಪ್ರತಿ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡುದಾರರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ೩೦ ರೂ. ಶುಲ್ಕ ಪಾವತಿಸಿ, ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ ಯೋಜನೆಯ ಸದಸ್ಯರಾಗಿ ಸ್ಮಾರ್ಟ್ ಕಾರ್ಡ್ ಪಡೆದುಕೊಳ್ಳಬಹುದಾಗಿದೆ.  ಈ ಸ್ಮಾರ್ಟ್ ಕಾರ್ಡ್ ವ್ಯವಸ್ಥೆಯಿಂದ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಹೊಂದಿದ ಕುಟುಂಬಕ್ಕೆ ವಾರ್ಷಿಕ ೩೦ ಸಾವಿರ ವರೆಗಿನ ವೈದ್ಯಕೀಯ ವೆಚ್ಚ ಭರಿಸುವ ಸೌಲಭ್ಯವಿದೆ.  ಕೊಪ್ಪಳದ ಎಲ್ಲ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡುದಾರರು ಆಯಾ ನ್ಯಾಯಬೆಲೆ ಅಂಗಡಿಗಳಲ್ಲಿ ಸೌಲಭ್ಯ ಪಡೆದುಕೊಳ್ಳಬೇಕು ಎಂದರು.
  ನಗರಸಭೆ ಅಧ್ಯಕ್ಷೆ ಬಸಮ್ಮ ಹಳ್ಳುಗಿಡಿ ಸೇರಿದಂತೆ ಹಲವು ಸದಸ್ಯರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply