ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿ : ಅಗತ್ಯ ವ್ಯವಸ್ಥೆ ಕೈಗೊಳ್ಳಲು ಡಿಸಿ ಸೂಚನೆ

 ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಗಾಗಿ ಕೊಪ್ಪಳ ಜಿಲ್ಲೆಯಲ್ಲಿ ಶೀಘ್ರದಲ್ಲೇ ಖರೀದಿ ಕೇಂದ್ರ ಪ್ರಾರಂಭಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆರ್.ಆರ್. ಜನ್ನು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. 
  ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
  ಮೆಕ್ಕೆಜೋಳ ಬೆಳೆಗೆ ಪ್ರತಿ ಕ್ವಿಂಟಾಲ್‌ಗೆ ರೂ. ೧೩೧೦ ಗಳಂತೆ  ಬೆಂಬಲ ಬೆಲೆಯನ್ನು ಸರ್ಕಾರ ನಿಗದಿಪಡಿಸಿದ್ದು, ಈಗಾಗಲೆ ಕೊಪ್ಪಳ ಜಿಲ್ಲೆಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ಇವರನ್ನು ಖರೀದಿ ಏಜೆನ್ಸಿಯಾಗಿ ನೇಮಕ ಮಾಡಲಾಗಿದೆ. ಖರೀದಿ ಕೇಂದ್ರ ಪ್ರಾರಂಭಕ್ಕೆ ಸರ್ಕಾರದಿಂದ ಸೂಚನೆ ಬಂದ ಕೂಡಲೆ ವಿಳಂಬಕ್ಕೆ ಆಸ್ಪದ ಇಲ್ಲದಂತೆ ಖರೀದಿ ಕೇಂದ್ರ ಪ್ರಾರಂಭಕ್ಕೆ ವ್ಯವಸ್ಥೆ ಮಾಡಿಕೊಳ್ಳಬೇಕು.  ಬೆಂಬಲ ಬೆಲೆ ಯೋಜನೆಯಡಿ ಸಣ್ಣ ಮತ್ತು ಮಧ್ಯಮ ವರ್ಗದ ರೈತರಿಂದ ಮೆಕ್ಕೆಜೋಳ ಖರೀದಿಗೆ ಅಗತ್ಯ ವ್ಯವಸ್ಥೆ ಕೈಗೊಳ್ಳುವಂತೆ ಸರ್ಕಾರ ಸೂಚಿಸಿದೆ. ರೈತರಿಂದ ಖರೀದಿಸಿದ ಮೆಕ್ಕೆಜೋಳವನ್ನು ದಾಸ್ತಾನು ಮಾಡಲು ಜಿಲ್ಲೆಯಲ್ಲಿ ಲಭ್ಯವಿರುವ ಗೋದಾಮುಗಳನ್ನು ವ್ಯವಸ್ಥೆ ಮಾಡಿಟ್ಟುಕೊಳ್ಳಬೇಕು.  ಸರ್ಕಾರಿ ಗೋದಾಮುಗಳನ್ನು ಬಳಸಿಕೊಂಡು, ಇನ್ನೂ ಅಗತ್ಯ ಬಿದ್ದಲ್ಲಿ ಖಾಸಗಿ ಗೋದಾಮುಗಳನ್ನು ತೆಗೆದುಕೊಳ್ಳಬೇಕು.  ಪ್ರಾರಂಭಿಕ ಹಂತದಲ್ಲಿ ಜಿಲ್ಲೆಯಲ್ಲಿ ಕೊಪ್ಪಳ, ಕುಷ್ಟಗಿ ಮತ್ತು ಕುಕನೂರಿನಲ್ಲಿ ಖರೀದಿ ಕೇಂದ್ರ ಪ್ರಾರಂಭಿಸಲಾಗುವುದು.  ಪ್ರತಿ ಖರೀದಿ ಕೇಂದ್ರದಲ್ಲಿ ಕನಿಷ್ಟ ಇಬ್ಬರು ಗ್ರೇಡರ್‌ಗಳನ್ನು ನೇಮಿಸಬೇಕು ಅಲ್ಲದೆ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಬೇಕು.  ಪ್ರತಿ ಕೇಂದ್ರಕ್ಕೆ ಕನಿಷ್ಟ ೩ ಎಲೆಕ್ಟ್ರಾನಿಕ್ ತೂಕದ ಯಂತ್ರ ಇರುವಂತೆ ನೋಡಿಕೊಳ್ಳಬೇಕು.  ಖರೀದಿ ಪ್ರಕ್ರಿಯೆಗೆ ರೈತರ ಅನುಕೂಲಕ್ಕಾಗಿ ಸಹಾಯವಾಣಿ ಪ್ರಾರಂಭಿಸಬೇಕು.  ಖರೀದಿ ಕೇಂದ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳುವ ಹಿನ್ನೆಲೆಯಲ್ಲಿ ಅಗತ್ಯ ಪೊಲೀಸ್ ಬಂದೋಬಸ್ತ್ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ಆರ್. ಜನ್ನು ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
  ಸಭೆಯಲ್ಲಿ ಉಪಸ್ಥಿತರಿದ್ದ ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ಮಾತನಾಡಿ, ಸಣ್ಣ ಮತ್ತು ಮಧ್ಯಮ ವರ್ಗದ ರೈತರಿಂದ ಮಾತ್ರ ಬೆಂಬಲ ಬೆಲೆಯಲ್ಲಿ ಮೆಕ್ಕೆ ಜೋಳ ಖರೀದಿಗೆ ಸರ್ಕಾರ ಸೂಚನೆ ನೀಡಿದೆ.  ಈ ಹಿನ್ನೆಲೆಯಲ್ಲಿ ರೈತರಿಗೆ ಬೆಳೆ ದೃಢೀಕರಣ ಪತ್ರ ಹಾಗೂ ಪಹಣಿ ಪತ್ರಿಕೆ ಸಕಾಲದಲ್ಲಿ ದೊರೆಯುವಂತೆ ಮಾಡಲು ಆಯಾ ತಹಸಿಲ್ದಾರರು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
  ಸಭೆಯಲ್ಲಿ ಭಾಗವಹಿಸಿದ್ದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಆರ್. ಲಂಬೂ ಅವರು ಮಾತನಾಡಿ,  ಸರ್ಕಾರ ಎಫ್.ಎ.ಕ್ಯೂ. ಗುಣಮಟ್ಟದ ಮೆಕ್ಕೆಜೋಳಕ್ಕೆ ಪ್ರತಿ ಕ್ವಿಂಟಾಲ್‌ಗೆ ರೂ. ೧೩೧೦ ರಂತೆ ಕನಿಷ್ಟ ಬೆಂಬಲ ಬೆಲೆ ಘೋಷಿಸಿದೆ.  ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ಜಿಲ್ಲೆಯ ೫೩೦೧೩ ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆ ಬಿತ್ತನೆಯಾಗಿದೆ.  ಈ ಬಾರಿ ಜಿಲ್ಲೆಯಲ್ಲಿ ೧೩೪೨೦೦ ಮೆಟ್ರಿಕ್ ಟನ್ ನಷ್ಟು ಮೆಕ್ಕೆಜೋಳ ಉತ್ಪಾದನೆಯಾಗುವ ನಿರೀಕ್ಷೆ ಇದ್ದು, ಇದರಲ್ಲಿ ಶೇ. ೬೦ ರಷ್ಟು ಅಂದರೆ ಸುಮಾರು ೮೦ ಸಾವಿರ ಮೆಟ್ರಿಕ್ ಟನ್‌ನಷ್ಟು ಮೆಕ್ಕೆ ಜೋಳ ಬೆಂಬಲ ಬೆಲೆ ಯೋಜನೆಯಲ್ಲಿ   ಆವಕವಾಗುವ ಸಾಧ್ಯತೆ ಇದೆ. ರೈತರು ತರುವಂತಹ ಮೆಕ್ಕೆಜೋಳ ಎಫ್.ಎ.ಕ್ಯೂ ಗುಣಮಟ್ಟದ್ದಾಗಿರಬೇಕು.  ಅಂದರೆ ಚೆನ್ನಾಗಿ ಒಣಗಿರಬೇಕು, ಗಾತ್ರ, ಬಣ್ಣ ಹಾಗೂ ಆಕಾರ ಹೊಂದಿದ್ದು, ಗಟ್ಟಿ ಮತ್ತು ಸ್ವಚ್ಛವಾಗಿರಬೇಕು.  ಇತರೆ ಕಲ್ಮಶಗಳಿಂದ ಮುಕ್ತವಾಗಿರಬೇಕು.  ಇಂತಹ ಬೆಳೆಗೆ ಮಾತ್ರ ನಿಗದಿತ ಬೆಲೆ ದೊರೆಯುತ್ತದೆ.  ರೈತರು ತಮ್ಮ ಜಮೀನಿನಲ್ಲಿ ಮೆಕ್ಕೆಜೋಳ ಬೆಳೆದ ಬಗ್ಗೆ ಆಯಾ ಕಂದಾಯ ಅಧಿಕಾರಿಗಳಿಂದ ಬೆಳೆ ದೃಢೀಕರಣ ಪತ್ರ ಮತ್ತು ಪಹಣೆಯನ್ನು ಕಡ್ಡಾಯವಾಗಿ ಪಡೆದು, ಹಾಜರುಪಡಿಸಬೇಕಾಗುತ್ತದೆ ಎಂಬುದಾಗಿ ಸಭೆಗೆ ವಿವರಿಸಿದರು.
  ಸಭೆಯಲ್ಲಿ ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ, ತೋಟಗಾರಿಕೆ, ಕೃಷಿ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಸಹಕಾರ ಸಂಘಗಳ ಉಪನಿಬಂಧಕರು, ಕೃಷಿ ಮಾರಾಟ ಇಲಾಖೆ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧಿಕಾರಿಗಳು, ತಹಸಿಲ್ದಾರರು ಉಪಸ್ಥಿತರಿದ್ದರು.

Leave a Reply