ಜಿಲ್ಲೆಯಲ್ಲಿ ರೋಗಗಳ ಹರಡುವಿಕೆ ತಡೆಗೆ ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಮಳೆಗಾಲ ಆರಂಭವಾಗಿದ್ದು, ರೋಗವಾಹಕ ಆಶ್ರಿತ ರೋಗಗಳಾದ ಡೆಂಗ್ಯೂ ಮತ್ತು ಚಿಕುನ್ ಗುನ್ಯಾ ಸೇರಿದಂತೆ ವಿವಿಧ ರೋಗಗಳ ಪರಿಣಾಮಕಾರಿ ನಿಯಂತ್ರಣಕ್ಕೆ ವಿವಿಧ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಸೂಚನೆ ನೀಡಿದರು.

  ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲೆಯ ನಾಲ್ಕು ತಾಲೂಕಿನ ತಹಶೀಲ್ದಾರ್, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ, ಗ್ರಾ.ಪಂ. ಅಭಿವೃದ್ದಿ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳಿಗೆ ರೋಗಗಳ ಹರಡುವಿಕೆ ಮತ್ತು ನಿಯಂತ್ರಣ ಕುರಿತಂತೆ ಶುಕ್ರವಾರ ಏರ್ಪಡಿಸಲಾಗಿದ್ದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಅವರು ಮಾತನಾಡಿದರು.
  ಮಳೆಗಾಲ ಪ್ರಾರಂಭವಾಗಿದ್ದು ಸೊಳ್ಳೆಗಳ ಹಾವಳಿ ಹೆಚ್ಚಾಗುವ ಸಾಧ್ಯತೆ ಇರುತ್ತದೆ.  ಇದರಿಂದಾಗಿ ಡೆಂಗ್ಯು, ಚಿಕೂನ್‌ಗುನ್ಯಾ, ಮಲೇರಿಯಾ ಮುಂತಾದ ಅನೇಕ ರೋಗಗಳ ಹರಡುವ ಸಂಭವ ಹೆಚ್ಚಾಗಿರುತ್ತದೆ.  ಆದ್ದರಿಂದ ವಿವಿಧ ರೋಗಗಳು ವ್ಯಾಪಕವಾಗಿ ಹರಡಿ, ಸಾರ್ವಜನಿಕರು ತೊಂದರೆಗೆ ಸಿಲುಕುವುದನ್ನು ತಡೆಗಟ್ಟಲು, ಮುಂಜಾಗ್ರತಾ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ.  ಜಿಲ್ಲೆಯಲ್ಲಿ ರೋಗಗಳ ಪರಿಸ್ಥಿತಿಯ ಪರಾಮರ್ಷೆ, ಹರಡುವಿಕೆ ಹಾಗೂ ನಿಯಂತ್ರಣ ಕೇವಲ ಆರೋಗ್ಯ ಇಲಾಖೆಯ ಜವಾಬ್ದಾರಿ ಮಾತ್ರ ಆಗಿರುವುದಿಲ್ಲ.  ಎಲ್ಲ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರ ಸಹಕಾರದೊಂದಿಗೆ ಮಾತ್ರ ರೋಗ ಹರಡುವುದನ್ನು ತಡೆಗಟ್ಟಬಹುದಾಗಿದೆ.  ಮಳೆಯಿಂದಾಗಿ ಗುಂಡಿ, ತಗ್ಗು ಪ್ರದೇಶಗಳಲ್ಲಿ ನೀರು ನಿಂತು, ಸೊಳ್ಳೆಗಳ ಬೆಳವಣಿಗೆಗೆ ಸಹಕಾರಿಯಾಗುವುದರಿಂದ, ಗ್ರಾಮ ಪಂಚಾಯತಿ ಮಟ್ಟದಲ್ಲಿ ಅಂತಹ ಪ್ರದೇಶಗಳನ್ನು ಗುರುತಿಸಿ, ಗುಂಡಿ, ತೆಗ್ಗುಗಳನ್ನು ಮುಚ್ಚಲು ಕ್ರಮ ಕೈಗೊಳ್ಳಬೇಕು ಗ್ರಾಮಗಳಲ್ಲಿ ಸ್ವಚ್ಛತೆಯನ್ನು ಕಾಯ್ದುಕೊಳ್ಳಬೇಕು, ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು. ಪೈಪ್‌ಗಳ ಸೋರಿಕೆಯಿಂದಾಗಿ ಕುಡಿಯುವ ನೀರು ಕಲುಷಿತವಾಗುವ ಸಾಧ್ಯತೆ ಇದ್ದು, ಈ ನಿಟ್ಟಿನಲ್ಲಿ ನಿಗಾ ವಹಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು.  ಆರೋಗ್ಯ ಇಲಾಖೆಯವರು ಆಸ್ಪತ್ರೆಗಳಲ್ಲಿ ಸಾಕಷ್ಟು ಜೀವರಕ್ಷಕ ಔಷಧಿಗಳನ್ನು ದಾಸ್ತಾನು ಇರಿಸಿಕೊಳ್ಳಬೇಕು. ವೈದ್ಯರು ಸಕಾಲದಲ್ಲಿ ಸಾರ್ವಜನಿಕರಿಗೆ ಲಭ್ಯರಾಗುವಂತೆ ಕ್ರಮ ಜರುಗಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗುಟ್ಕಾ ನಿಷೇಧಕ್ಕೆ ಕಟ್ಟುನಿಟ್ಟಿನ ಕ್ರಮ : ರಾಜ್ಯಾದ್ಯಂತ ಗುಟ್ಕಾ ಮಾರಾಟವನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದ್ದು ಯಾವುದೇ ಅಂಗಡಿಗಳಲ್ಲಿ ಗುಟ್ಕಾ ಮಾರಾಟ ಮಾಡುವಂತಿಲ್ಲ.  ಗುಟ್ಕಾ ಮಾರಾಟ ಮಾಡಿದಲ್ಲಿ ಅಂತಹವರಿಗೆ ಕಠಿಣ ಶಿಕ್ಷೆ ಇದ್ದು, ಗ್ರಾಮೀಣ ಪ್ರದೇಶಗಳಲ್ಲಿ ಗುಟ್ಕಾ ಮಾರಾಟ ನಿಷೇಧ ಜಾರಿಯನ್ನು ಆಯಾ ಗ್ರಾ.ಪಂ. ಪಿಡಿಓ ಗಳು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು.  ಯಾವುದೇ ಗುಟ್ಕಾ ಮಾರಾಟವನ್ನು ತಡೆಗಟ್ಟಲು ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಸೂಚನೆ ನೀಡಿದರು.
  ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಕಟ್ಟಿಮನಿ ಅವರು ಮಾತನಾಡಿ, ಪ್ರಸಕ್ತ ವರ್ಷದ ಜನವರಿಯಿಂದ ಈವರೆಗೆ ಜಿಲ್ಲೆಯಲ್ಲಿ ಒಟ್ಟು ೧೬೦ ಡೆಂಗ್ಯು ಶಂಕಾಸ್ಪದ ಪ್ರಕರಣಗಳು ವರದಿಯಾಗಿದ್ದು, ಇದರಲ್ಲಿ ೧೭ ಡೆಂಗ್ಯೂ ಪ್ರಕರಣಗಳು ಖಚಿತಗೊಂಡಿವೆ.  ಕೊಪ್ಪಳ ತಾಲೂಕಿನಲ್ಲಿ ೫, ಗಂಗಾವತಿ-೫, ಕುಷ್ಟಗಿ- ೬ ಮತ್ತು ಯಲಬುರ್ಗಾ ತಾಲೂಕಿನಲ್ಲಿ ೦೧ ಪ್ರಕರಣಗಳು ಖಚಿತಗೊಂಡಿವೆ.  ಚಿಕೂನ್‌ಗುನ್ಯಾಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಈವರೆಗೆ ೧೭೪ ಶಂಕಾಸ್ಪದ ಪ್ರಕರಣಗಳು ವರದಿಯಾಗಿದ್ದು, ಇದರಲ್ಲಿ ೨೩ ಪ್ರಕರಣಗಳು ಚಿಕೂನ್‌ಗುನ್ಯಾ ಎಂದು ಖಚಿತಗೊಂಡಿವೆ.  ಈ ವರ್ಷ ಜಿಲ್ಲೆಯಲ್ಲಿ ಒಟ್ಟು ೨೦೫ ಮಲೇರಿಯಾ ಪ್ರಕರಣಗಳು ವರದಿಯಾಗಿವೆ ಎಂದು ಸಭೆಗೆ ಮಾಹಿತಿ ನೀಡಿದರು.
  ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹದೇವಸ್ವಾಮಿ, ನಗರಸಭೆ ಪೌರಾಯುಕ್ತೆ ಬಿ.ಎಂ. ಅಶ್ವಿನಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಪಿಡಿಓಗಳು ಭಾಗವಹಿಸಿದ್ದರು.
Please follow and like us:
error