ಬಸ ಪ್ರಯಾಣ ದರ ಏರಿಕೆ ವಿದ್ಯುತ್ ಕಡಿತ ವಿರೋದಿಸಿ ಬಿಜೆಪಿಯಿಂದ ಪ್ರತಿಭಟನೆ

 ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಪ್ರಯಾಣ ದರ ಏರಿಕೆ ಮತ್ತು ವಿದ್ಯುತ್ ಲೋಡ್ ಶೆಡ್ಡಿಂಗ್ ವಿರೋಧಿಸಿ ನಗರದ ಅಶೋಕ ವೃತ್ತದಲ್ಲಿ ಬಿಜೆಪಿ ಯುವಮೋರ್ಚಾದ ಜಿಲ್ಲಾ ಘಟಕದ ಕಾರ್ಯಕರ್ತರು ಮಂಗಳವಾರ ಪ್ರತಿಭಟಿಸಿದರು.
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಜನ ವಿರೋಧಿ ಆಡಳಿತ ನಡೆಯುತ್ತಿದೆ. ಲೋಕಸಭೆ ಚುನಾವಣೆ ಮುಗಿಯುವುದನ್ನೇ ಕಾಯುತ್ತಿದ್ದ ರಾಜ್ಯ ಸರ್ಕಾರ ಶೇ.೧೦.೫ರಷ್ಟು ಪ್ರಯಾಣ ದರ ಏರಿಕೆ ಮಾಡಿದೆ. ಈ ಮೂಲಕ ರಾಜ್ಯದ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ ಎಂದು ಟೀಕಿಸಿದರು.
ಕೇಂದ್ರದ ಯುಪಿಎ ಸರ್ಕಾರದ ಆರ್ಥಿಕ ನೀತಿಯಿಂದ ದೇಶದ ಜನರು ಈಗಾಲೇ ತೊಂದರೆ ಎದುರಿಸುತ್ತಿದ್ದಾರೆ. ಡಿಸೇಲ್ ಮೇಲೆ ಸಬ್ಸಿಡಿ ನೀಡುವಂತೆ ಕೇಂದ್ರದ ಮೇಲೆ ಒತ್ತಡ ಹಾಕುವ ಬದಲು ರಾಜ್ಯ ಸರ್ಕಾರ ಬೆಲೆ ಏರಿಕೆಗ ಮುಂದಾಗಿದೆ. ಸಾರಿಗೆ ಸಂಸ್ಥೆಯಲ್ಲಿ ಆದಾಯ ಸೋರಿಕೆ, ಭ್ರಷ್ಟಾಚಾರ ತಡೆಗಟ್ಟುವ ಬದಲಾಗಿ ಜನರ ಮೇಲೆ ಹೊರೆ ಹಾಕುವುದು ಸರಿಯಲ್ಲ ಎಂದು ಪ್ರತಿಭಟನಾಕರರು ಆಕ್ರೋಶ ವ್ಯಕ್ತಪಡಿಸಿದರು.
ದೇಶದಲ್ಲಿ ಭಯೋತ್ಪಾದಕ ಕೃತ್ಯ ಹೆಚ್ಚುತ್ತಿದ್ದರೂ ಕೇಂದ್ರ ಸರ್ಕಾರ ಕೈಕಟ್ಟಿ ಕುಳಿತಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಲಕ್ಷೃದಿಂದಲೇ ಬೆಂಗಳೂರು-ಗುಹಾಟಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಸ್ಪೋಟ ಸಂಭವಿಸಿದೆ. ಉಗ್ರರು ದಕ್ಷಿಣ ಭಾರತದಲ್ಲಿಯೇ ಸಂಚು ರೂಪಿಸಿದ್ದರು ಎಂದು ಬಂಧಿತ ಉಗ್ರರು ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದಾರೆ. ಇದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿಫಲತೆಗೆ ಹಿಡಿದ ಕೈಗನ್ನಡಿ ಎಂದು ದೂರಿದರು.
ಈ ಮೊದಲು ಇಲ್ಲಿನ ಅಶೋಕ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು. ಕೆಲ ಹೊತ್ತು ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಜಿಲ್ಲಾಧ್ಯಕ್ಷ ಎನ್.ಮಂಜುನಾಥ, ಪ್ರಧಾನ ಕಾರ್ಯದರ್ಶಿ ರಮೇಶ ಜೋಶಿ, ಬಸವರಾಜ ಕಳ್ಳಿ, ಶರಣಪ್ಪ ಕನ್ನಾ, ಪೃತ್ವಿರಾಜ, ಗವಿಸಿದ್ದಪ್ಪ ಹಂಡಿ, ರಂಗನಾಥ, ಮಹೇಂದಗೌಡ ಸೇರಿ ಇತರರು ಇದ್ದರು. 

Leave a Reply