ಕೊಪ್ಪಳ : ಆ. ೨೭ ರಂದು ವಿಚಾರಸಂಕಿರಣ

 ಕೊಪ್ಪಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಕೊಪ್ಪಳದ ಬಾಲಕರ ಸರ್ಕಾರಿ ಪ.ಪೂ. ಕಾಲೇಜು ಇವರ ಸಂಯುಕ್ತ ಆಶ್ರಯದೊಂದಿಗೆ ಮದ್ಯ ಮತ್ತು ಮಾದಕಗಳ ದುಷ್ಪರಿಣಾಮಗಳ ಕುರಿತು ಜಾಥಾ, ವಿಚಾರಸಂಕಿರಣ ಹಾಗೂ ವ್ಯಂಗ್ಯ ಚಿತ್ರ ಪ್ರದರ್ಶನ ಕಾರ್ಯಕ್ರಮ ಆ. ೨೭ ರಂದು ಬೆಳಿಗ್ಗೆ ೯ ಗಂಟೆಗೆ ನಗರದ ಬಾಲಕರ ಸರ್ಕಾರಿ ಪ.ಪೂ. ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
  ವಿಶ್ವ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಅಂಗವಾಗಿ ಈ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಆ. ೨೭ ರಂದು ಜನಜಾಗೃತಿ ಜಾಥಾ ಕಾರ್ಯಕ್ರಮ ನಗರದ ಬಾಲಕರ ಸ.ಪ.ಪೂ. ಕಾಲೇಜು ಆವರಣದಲ್ಲಿ ಉದ್ಘಾಟನೆಗೊಳ್ಳಲಿದೆ.  ಈ ಭಾಗದ ಖ್ಯಾತ ವ್ಯಂಗ್ಯ ಚಿತ್ರಕಾರರಾಗಿರುವ ಬದರಿ ಪುರೋಹಿತ್ ಅವರು ಮದ್ಯ ಮತ್ತು ಮಾದಕಗಳ ದುಷ್ಪರಿಣಾಮಗಳ ಕುರಿತು ರಚಿಸಿರುವ ವ್ಯಂಗ್ಯ ಚಿತ್ರಗಳ ಪ್ರದರ್ಶನ ಕಾರ್ಯಕ್ರಮ ಇದೇ ಕಾಲೇಜು ಆವರಣದಲ್ಲಿ ನಡೆಯಲಿದೆ.  ಬೆಳಿಗ್ಗೆ ೯-೩೦ ಗಂಟೆಗೆ ವಿಚಾರಸಂಕಿರಣದ ಉದ್ಘಾಟನೆ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ನೆರವೇರಿಸುವರು.  ಕಾಲೇಜಿನ ಪ್ರಾಂಶುಪಾಲ ಎಸ್.ಬಿ. ರಾಜೂರ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀಕಾಂತ್ ಬಾಸೂರ, ಪ.ಪೂ. ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವಾನಂದ ಕಡಪಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರಪ್ಪ ಚೋರನೂರ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.  ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿಗಳು ಹಾಗೂ ಹಿರಿಯ ವೈದ್ಯ ಡಾ. ಕೆ.ಜಿ. ಕುಲಕರ್ಣಿ ಅವರು ಇದೇ ಸಂದರ್ಭದಲ್ಲಿ ವಿಶೇಷ ಉಪನ್ಯಾಸ ನೀಡುವರು ಎಂದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಕಾರ್ಯದರ್ಶಿ ಚಂದ್ರಮೌಳೇಶ್ವರ ಸ್ವಾಮಿ ಹಾಗೂ ಕೊಪ್ಪಳ ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್  ತಿಳಿಸಿದ್ದಾರೆ.

Related posts

Leave a Comment