fbpx

ಸಡಗರದ ಗಣರಾಜ್ಯೋತ್ಸವ ಆಚರಣೆಗೆ ಸಿದ್ಧತೆ

ಪ್ರತಿ ವರ್ಷದಂತೆ ಈ ಬಾರಿಯೂ ಗಣರಾಜ್ಯೋತ್ಸವವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ಹೇಳಿದರು.

  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಗಣರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
  ಜನವರಿ ೨೬ ರಂದು ಗಣರಾಜ್ಯೋತ್ಸವವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುವುದು.  ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಕ್ರಮಗಳನ್ನು ಬಿಂಬಿಸುವ ಸ್ತಬ್ಧ ಚಿತ್ರಗಳ ಮೆರವಣಿಗೆ ಅಂದು ಬೆಳಿಗ್ಗೆ ೦೮ ಗಂಟೆಗೆ ಕೊಪ್ಪಳ ತಹಸಿಲ್ದಾರ್ ಕಚೇರಿ ಆವರಣದಿಂದ  ಹೊರಟು ಜಿಲ್ಲಾ ಕ್ರೀಡಾಂಗಣ ತಲುಪುವುದು.   ಬೆಳಿಗ್ಗೆ ೦೯ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ, ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಸಣ್ಣ ನೀರಾವರಿ ಸಚಿವ ಶಿವರಾಜ್ ತಂಗಡಗಿ ಅವರು ಧ್ವಜಾರೋಹಣ ನೆರವೇರಿಸುವರು.  ಧ್ವಜಾರೋಹಣ ಸಮಾರಂಭದಲ್ಲಿ ಪೊಲೀಸ್, ಎನ್.ಸಿ.ಸಿ., ಗೃಹರಕ್ಷಕ ದಳ, ಸ್ಕೌಟ್ಸ್, ಗೈಡ್ಸ್, ರಾಷ್ಟ್ರೀಯ ಸೇವಾದಳ ತಂಡಗಳು ಕವಾಯತು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.  ಧ್ವಜವಂದನೆ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಮಹನೀಯರುಗಳಿಗೆ ಸನ್ಮಾನ ಅಲ್ಲದೆ ಅತ್ಯುತ್ತಮ ನಾಗರಿಕ ಸೇವೆಗಾಗಿ ಸರ್ಕಾರಿ ಅಧಿಕಾರಿ, ಸಿಬ್ಬಂದಿಗಳಿಗೆ ಕೊಡಮಾಡುವ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಗುವುದು.  ಶಾಲಾ ಮಕ್ಕಳಿಗೆ ಅಂದು ಬೆಳಿಗ್ಗೆ ೮-೩೦ ಗಂಟೆಯ ಒಳಗಾಗಿ ಶಾಲೆಗಳಲ್ಲಿ ಬೆಳಗಿನ ಉಪಹಾರ ಹಾಗೂ ಹಾಲು ಪೂರೈಸಬೇಕು.  ದಿನಾಚರಣೆ ಅಂಗವಾಗಿ ನಗರದ ಪ್ರಮುಖ ಬೀದಿ, ಸರ್ಕಾರದ ಕಚೇರಿ ಕಟ್ಟಡಗಳಿಗೆ ವಿದ್ಯುತ್ ದೀಪಾಲಂಕಾರ ಕೈಗೊಂಡು ಹಬ್ಬದ ವಾತಾವರಣ ನಿರ್ಮಿಸುವಂತಾಗಬೇಕು.  ಗಣರಾಜ್ಯೋತ್ಸವ ದಿನಾಚರಣೆಯ ಯಶಸ್ವಿಗಾಗಿ ಮೂರು ಉಪಸಮಿತಿಗಳನ್ನು ರಚಿಸಲಾಗಿದ್ದು, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ ಅವರ ಅಧ್ಯಕ್ಷತೆಯಲ್ಲಿ ಸ್ತಬ್ಧ ಚಿತ್ರಗಳ ಪ್ರದರ್ಶನ ಸಮಿತಿ ನೇಮಿಸಲಾಗಿದೆ.  ಅದೇ ರೀತಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ಯಾಮಸುಂದರ್ ಅಧ್ಯಕ್ಷತೆಯಲ್ಲಿ ಸಾಂಸ್ಕೃತಿಕ ಸಮಿತಿ ಹಾಗೂ  ಜಿ.ಪಂ. ಉಪಕಾರ್ಯದರ್ಶಿ ಅವರ ನೇತೃತ್ವದಲ್ಲಿ ಸನ್ಮಾನ ಸಮಿತಿ ರಚಿಸಲಾಗಿದೆ.  ಅಂದು ಸಂಜೆ ೦೬ ಗಂಟೆಗೆ ಸಾರ್ವಜನಿಕ ಮೈದಾನದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಲಿದೆ.  ಗಣರಾಜ್ಯೋತ್ಸವ ಕಾರ್ಯಕ್ರಮ ಯಶಸ್ವಿಗೊಳಿಸಲು ಆಯಾ ಉಪಸಮಿತಿ ಅಧ್ಯಕ್ಷರು ಕೂಡಲೆ ಸಭೆ ಕರೆದು ನಗರದ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು.  ಆಯಾ ಇಲಾಖೆಗಳಿಗೆ ವಹಿಸಿಕೊಟ್ಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
  ಸಭೆಯಲ್ಲಿ ಡಿವೈಎಸ್‌ಪಿ ಎಂ. ರಾಜೀವ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ವೈ.ಹೆಚ್. ಲಂಬು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀಕಾಂತ್ ಬಾಸೂರ ಅಲ್ಲದೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಗಣ್ಯರಾದ ಶಿವಾನಂದ ಹೊದ್ಲೂರ್, ಮಂಜುನಾಥ ಗೊಂಡಬಾಳ, ಡಾ. ಜ್ಞಾನಸುಂದರ್, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿ ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಿದರು.
Please follow and like us:
error

Leave a Reply

error: Content is protected !!