ವಿದ್ಯಾರ್ಥಿನಿಯರಿಗೆ ಆತ್ಮರಕ್ಷಣೆ ತರಬೇತಿ ಅಗತ್ಯ : ಶಾಸಕ ಕೆ.ರಾಘವೇಂದ್ರ ಹಿಟ್ನಾಳ

 ವಿದ್ಯಾರ್ಥಿನಿಯರು ಯಾವುದೇ ಬಗೆಯ ಆಕ್ರಮಣವನ್ನು ಹಿಮ್ಮೆಟ್ಟಿಸುವಂತಾಗಲು, ಕರಾಟೆಯಂತಹ ಆತ್ಮರಕ್ಷಣೆ ಕಲೆಯ ಬಗ್ಗೆ ತರಬೇತಿ ಪಡೆಯುವುದು ಸೂಕ್ತ ಎಂದು ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಹೇಳಿದರು.
ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ದೈಹಿಕ ಶಿಕ್ಷಣ ಶಿಕ್ಷಣ ಸಂಘ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಕ್ರೀಡಾಕೂಟದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
     ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿದ್ದು, ಮಹಿಳೆಯರು ತಮ್ಮ ಆತ್ಮರಕ್ಷಣೆಯನ್ನು ತಾವೇ ಮಾಡಿಕೊಳ್ಳುವಂತಹ ಕಲೆಯನ್ನು ಕಲಿತುಕೊಳ್ಳುವುದು ಅಗತ್ಯವಾಗಿದ್ದು, ಇದಕ್ಕಾಗಿ ಎಲ್ಲ ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಕರಾಟೆ ಕಲೆಯ ತರಬೇತಿ ನೀಡಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದಕ್ಕಾಗಿ ಇದೇ ಸೆ. ೧೮ ರಿಂದ ೨೯ ರವರೆಗೆ ಹನ್ನೆರಡು ದಿನಗಳ ಕಾಲ ಎಲ್ಲ ಸರ್ಕಾರಿ ಪ್ರೌಢಶಾಲೆಗಳ ದೈಹಿಕ ಶಿಕ್ಷಕರಿಗೆ ಕರಾಟೆ ಕಲೆಯ ಬಗ್ಗೆ ತರಬೇತಿ ನೀಡಲು ಕ್ರಮ ಕೈಗೊಳ್ಳಲಾಗಿದೆ.  ತರಬೇತಿ ಪಡೆದ ದೈಹಿಕ ಶಿಕ್ಷಕರು ತಮ್ಮ ಶಾಲೆಗಳ ವಿದ್ಯಾರ್ಥಿನಿಯರಿಗೆ ಆತ್ಮರಕ್ಷಣೆ ಕಲೆಯ ತರಬೇತಿ ನೀಡುವಂತೆ ಯೋಜಿಸಲಾಗಿದೆ ಎಂದರು.
     ಕ್ರೀಡೆಯಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬ ಕ್ರೀಡಾಪಟುಗಳು ಸೋಲು-ಗೆಲುವನ್ನು ಸಮನಾಗಿ ಸ್ವೀಕರಿಸಬೇಕು ಅಂದಾಗ ಮಾತ್ರ ಒಬ್ಬ ಪರಿಪೂರ್ಣ ಕ್ರೀಡಾಪಟುವಾಗಲು ಸಾಧ್ಯ.  ಇಂದಿನ ಆಂತರಿಕ ಹಾಗೂ ಬಾಹ್ಯ ಒತ್ತಡದ ಜೀವನದಲ್ಲಿ ಕ್ರೀಡೆಯು ಅತಿ ಅವಶ್ಯಕವಾಗಿದ್ದು, ಕ್ರೀಡೆಯಿಂದ ಮಾನಸಿಕ ನೆಮ್ಮದಿ ಮತ್ತು ದೈಹಿಕವಾಗಿ ಸದೃಢರಾಗಲು ಕ್ರೀಡೆಗಳು ಸಹಕಾರಿಯಾಗಿವೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಕ್ರೀಡಾಪಟುಗಳಿಗೆ ಹಲವು ಯೋಜನೆಗಳನ್ನು ರೂಪಿಸಿದ್ದು, ಕ್ರೀಡಾಪಟುಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದ ಅವರು, ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ ಜಿಲ್ಲೆಯ ಕ್ರೀಡಾಪಟುಗಳು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ವಿಜೇತರಾಗಿ ಜಿಲ್ಲೆಗೆ ಕೀರ್ತಿ ತರಬೇಕು. ಅಂದಾಗ ಮಾತ್ರ ಶಿಕ್ಷಕರಿಗೆ, ತಂದೆ-ತಾಯಿಗಳಿಗೆ ಮತ್ತು ಜಿಲ್ಲೆಗೆ ಗೌರವ ತಂದಂತಾಗುತ್ತದೆ ಎಂದು ಕ್ರೀಡಾಪಟುಗಳಿಗೆ ಕರೆ ನೀಡಿದರು.
ಕ್ರೀಡಾ ಧ್ವಜಾರೋಹಣವನ್ನು ಜಿ.ಪಂ.ಅಧ್ಯಕ್ಷ ಟಿ.ಜನಾರ್ಧನ ಹುಲಗಿ ಅವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಜಿ.ಪಂ. ಉಪಾಧ್ಯಕ್ಷೆ ಅನ್ನಪೂರ್ಣಮ್ಮ ಕಂದಕೂರಪ್ಪ, ತಾ.ಪಂ.ಅಧ್ಯಕ್ಷ ದೇವಣ್ಣ ಭರಮಪ್ಪ ಮೇಕಾಳಿ, ನಗರಸಭೆ ಅಧ್ಯಕ್ಷೆ ಲತಾ ವೀರಣ್ಣ ಸಂಡೂರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಹೆಚ್.ವೀರಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜಯ್ಯ, ಪ್ರಭು ಕಿಡದಾಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Please follow and like us:
error