ಹೋಬಳಿಗೆರಡು ಗೋಶಾಲೆ ತೆರೆಯಲು ಮುಖ್ಯಮಂತ್ರಿ ಸೂಚನೆ

 : ಬರ ಪರಿಸ್ಥಿತಿ ಎದುರಿಸುತ್ತಿರುವ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಕುಡಿಯುವ ನೀರು, ಮೇವಿನ ಕೊರತೆಯಾಗದಂತೆ ಪ್ರತಿ ಹೋಬಳಿಗೆ ಎರಡು ಗೋಶಾಲೆಗಳನ್ನು ಪ್ರಾರಂಭಿಸುವಂತೆ ಜೊತೆಗೆ ಸಬ್ಸಿಡಿ ದರದಲ್ಲಿ ಮೇವು ಬ್ಯಾಂಕ್‌ಗಳ ಮೂಲಕ ರೈತರಿಗೆ ಮೇವು ಒದಗಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
  ಗಂಗಾವತಿಯ ಸರ್ಕ್ಯೂಟ್ ಹೌಸ್‌ನಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಜಿಲ್ಲೆಯ ಬರಪರಿಹಾರ ಕಾಮಗಾರಿಗಳ ಪರಿಶೀಲನೆ ಕುರಿತಂತೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
  ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಸರ್ಕಾರ ಕಟಿಬದ್ಧವಾಗಿದೆ.  ಬರ ಪರಿಹಾರ ಕಾಮಗಾರಿಗಳಿಗೆ ಸರ್ಕಾರ ಪ್ರಥಮ ಆದ್ಯತೆ ನೀಡಿ ಅನುದಾನ ಬಿಡುಗಡೆ ಮಾಡಲಿದೆ.  ಕೊಪ್ಪಳ ಜಿಲ್ಲೆಯಲ್ಲಿ ಮುಂಗಾರು ಹಾಗೂ ಹಿಂಗಾರು ಮಳೆಯ ವಿಫಲತೆಯಿಂದಾಗಿ ಬರ ಪರಿಸ್ಥಿತಿ ತಲೆದೋರಿದೆ.  ಈಗಾಗಲೆ ಬೇಸಿಗೆಯ ದಿನಗಳು ಹತ್ತಿರವಾಗುತ್ತಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಉದ್ಭವಾಗದಂತೆ ಈಗಿನಿಂದಲೇ ಮುಂಜಾಗ್ರತಾ ಕ್ರಮಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳಬೇಕು.  ಜಿಲ್ಲೆಯಲ್ಲಿ ಪ್ರತಿ ಸದ್ಯ ಪ್ರತಿ ತಾಲೂಕಿಗೆ ಒಂದರಂತೆ ಗೋಶಾಲೆ ತೆರೆಯಲಾಗಿದ್ದು, ಪ್ರತಿ ಹೋಬಳಿಗೆ ಎರಡು ಗೋಶಾಲೆಗಳನ್ನು ಪ್ರಾರಂಭಿಸಲು ಕೂಡಲೆ ಸ್ಥಳ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು.  ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಗಳಿಗೆ ಸರ್ಕಾರ ಈಗಾಗಲೆ ೧. ೬೭ ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಿದೆ.  ಜಿಲ್ಲೆಯಲ್ಲಿ ಈಗಾಗಲೆ ಗುರುತಿಸಲಾಗಿರುವ ೨೫೬ ಸಮಸ್ಯಾತ್ಮಕ ಜನವಸತಿ ಪ್ರದೇಶಗಳಲ್ಲಿ ತುರ್ತು ಕುಡಿಯುವ ನೀರು ಸರಬರಾಜಿಗಾಗಿ ಕ್ರಮ ಕೈಗೊಳ್ಳಬೇಕು.  ಜಿಲ್ಲೆಯಲ್ಲಿ ಜಾರಿಯಲ್ಲಿರುವ ಶಾಶ್ವತ ಕುಡಿಯುವ ನೀರಿನ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು.  ಅಂತರ್ಜಲ ಮಟ್ಟ ಕುಸಿದಿರುವುದರಿಂದ, ಹೊಸ ಬೋರ್‌ವೆಲ್ ಗಳು ಅಗತ್ಯವಿದ್ದಲ್ಲಿ ಕೊರೆಯಿಸಬೇಕು.  ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಕುಡಿಯುವ ನೀರು ಸಮಸ್ಯೆ ತಲೆದೋರುವ ಗ್ರಾಮಗಳ ಪಟ್ಟಿಯನ್ನು ಸಿದ್ಧಪಡಿಸಿ, ನೀರು ಸರಬರಾಜಿಗೆ ಅಗತ್ಯ ಕ್ರಿಯಾ ಯೋಜನೆ ರೂಪಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದಲ್ಲಿ, ಅಗತ್ಯ ಅನುದಾನ ಬಿಡುಗಡೆ ಮಾಡಲು ಸರ್ಕಾರ ಸಿದ್ಧವಿದೆ.  ಕುಡಿಯುವ ನೀರು ಯೋಜನೆಗಳಿಗೆ ಸರ್ಕಾರ ಪ್ರಥಮಾದ್ಯತೆಯಲ್ಲಿ ಅನುದಾನ ಒದಗಿಸಲಿದ್ದು, ಹಣದ ಯಾವುದೇ ಕೊರತೆಯಿಲ್ಲ.  ಪ್ರತಿ ತಾಲೂಕು ಕೇಂದ್ರಗಳಲ್ಲಿ ಸಹಾಯವಾಣಿಯನ್ನು ಪ್ರಾರಂಭಿಸಿ, ಕುಡಿಯುವ ನೀರಿನ ಸಮಸ್ಯೆಗಳ ಕರೆ ಬಂದಲ್ಲಿ, ಸಂಚಾರಿ ಕೊಳವೆಬಾವಿ ದುರಸ್ತಿ ಘಟಕಗಳನ್ನು ಬಳಸಿಕೊಂಡು, ತಕ್ಷಣ ದುರಸ್ತಿಗೊಳಿಸಿ, ನೀರಿನ ಸಮಸ್ಯೆ ನಿವಾರಿಸಲು ಕ್ರಮ ಕೈಗೊಳ್ಳಬೇಕು.  ಪ್ರತಿ ತಾಲೂಕಿಗೆ ಒಬ್ಬರು ನೋಡಲ್ ಅಧಿಕಾರಿಗಳನ್ನು ನೇಮಿಸಿ, ಕುಡಿಯುವ ನೀರಿನ ಸಮಸ್ಯೆಯ ಯಾವುದೇ ದೂರು ಸರ್ಕಾರಕ್ಕೆ ಬಾರದಂತೆ ಎಚ್ಚರಿಕೆ ವಹಿಸಬೇಕು.  ಜಿಲ್ಲೆಯಲ್ಲಿ ಸದ್ಯ ಲಭ್ಯವಿರುವ ೮೨೨೫೩ ಟನ್ ಮೇವು ಕೇವಲ ೬ ವಾರಗಳಿಗೆ ಮಾತ್ರ ಸಾಕಾಗುವಷ್ಟಿದ್ದು, ಯಾವುದೇ ಕಾರಣಕ್ಕೂ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು.  ಜಿಲ್ಲಾ ಮತ್ತು ತಾಲೂಕು ಮಟ್ಟದ ಟಾಸ್ಕ್‌ಫೋರ್ಸ್ ಸಮಿತಿ ಸಭೆಗಳು ಪ್ರತಿ ತಿಂಗಳು ಕಡ್ಡಾಯವಾಗಿ ನಡೆಸಬೇಕು.  ಜಿಲ್ಲೆಯಲ್ಲಿನ ಬರ ಪರಿಹಾರ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಈ ಸಮಿತಿ ಸಭೆಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲು ಮುಕ್ತ ಅಧಿಕಾರ ನೀಡಲಾಗಿದೆ.  ಬರಪರಿಹಾರಕ್ಕೆ ಸಂಬಂಧಿಸಿದ ಯಾವುದೇ ತುರ್ತು ಕಾಮಗಾರಿಗಳಿಗಾಗಿ ಅನುದಾನದ ಬೇಡಿಕೆ ಅಥವಾ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿದಲ್ಲಿ, ತಕ್ಷಣವೇ ಸರ್ಕಾರ ಅನುದಾನವನ್ನು ಬಿಡುಗಡೆ ಮಾಡಲಿದೆ.  ಬರಪರಿಹಾರ ಕಾಮಗಾರಿಗಳಿಗೆ ಸರ್ಕಾರ ಪ್ರಥಮ ಆದ್ಯತೆ ನೀಡಲಿದ್ದು, ಯಾವುದೇ ಹಣದ ಕೊರತೆ ಇಲ್ಲ.  ಜಿಲ್ಲೆಯ ಕೃಷಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಪಶುಸಂಗೋಪನೆ, ಕಂದಾಯ ಸೇರಿದಂತೆ ಪ್ರಮುಖ ಇಲಾಖೆಗಳ ಅಧಿಕಾರಿಗಳು ಜನರಿಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು, ಕೂಲಿ ಕಾರ್ಮಿಕರಿಗೆ ಕೆಲಸ ಈ ವಿಷಯಗಳಿಗೆ ಸಂಬಂಧಿಸಿದಂತೆ ಯಾವುದೇ ದೂರುಗಳು ಬರದಂತೆ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು.  ಬರ ಪರಿಸ್ಥಿತಿಯನ್ನು ನಿಭಾಯಿಸುವುದಕ್ಕೆ ಸಂಬಂಧಿಸಿದಂತೆ ಸೂಕ್ತವಾಗಿ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಸರ್ಕಾರ ಹಿಂಜರಿಯುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರು ಅಧಿಕಾರಿಗಳಿಗೆ ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.
ಜನಪರ ಬಜೆಟ್‌ಗೆ ಸಿದ್ಧತೆ : ಈ ಬಾರಿ ಜನಪರ ಬಜೆಟ್ ಮಂಡಿಸಲು ಸರ್ಕಾರ ಸಿದ್ಧತೆ ನಡೆಸಿದ್ದು, ಹಿಂದುಳಿದ ವರ್ಗಗಳ ಅಭಿವೃದ್ಧಿ, ನೀರಾವರಿ, ಆಹಾರ ಭದ್ರತೆ ಸೇರಿದಂತೆ ಪ್ರಮುಖ ವಿಷಯಗಳಿಗೆ ಹೆಚ್ಚಿನ ಆದ್ಯತೆ ನೀಡಲು ಕ್ರಮ ಕೈಗೊಳ್ಳಲಾಗಿದೆ.  ಬಜೆಟ್ ನಲ್ಲಿ ಸೇರಿಸಬಹುದಾಗಿರುವ ಕೊಪ್ಪಳ ಜಿಲ್ಲೆಗೆ ಅಗತ್ಯವಿರುವ ಹೊಸ ಯೋಜನೆಗಳು, ಪ್ರಮುಖ ಕಾರ್ಯಕ್ರಮಗಳ ಕುರಿತು ಯಾವುದೇ ಪ್ರಸ್ತಾವನೆಗಳಿದ್ದಲ್ಲಿ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ, ಶೀಘ್ರ ಸರ್ಕಾರಕ್ಕೆ ಸಲ್ಲಿಸುವಂತೆ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
  ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಲಕ್ಷ್ಮಣ ಸವದಿ ಅವರು ಮಾತನಾಡಿ, ಬರ ಪರಿಸ್ಥಿತಿ ನಿರ್ವಹಣೆ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉತ್ತಮ ಕೆಲಸ ಮಾಡುತ್ತಿದ್ದಾರೆ.  ಸದ್ಯ ನಡೆಯುತ್ತಿರುವ ಅಧಿವೇಶನ ಮುಗಿದ ಬಳಿಕ ಜಿಲ್ಲೆಯ ಬರ ಪರಿಸ್ಥಿತಿಯ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪರಿಸ್ಥಿತಿಯ ಪರಾಮರ್ಶೆ ನಡೆಸಲಾಗುವುದು.  ಬೆಂಬಲ ಬೆಲೆಯಲ್ಲಿ ಈರುಳ್ಳಿ ಮಾರಾಟ ಮಾಡಿದ ರೈತರಿಗೆ ಪಾವತಿಸಬೇಕಾದ ಮೊತ್ತವನ್ನು ಎರಡು ದಿನಗಳ ಒಳಗಾಗಿ ಇಲಾಖೆ ಬಿಡುಗಡೆ ಮಾಡಲಿದ್ದು, ಇನ್ನೊಂದು ವಾರದ ಒಳಗಾಗಿ ರೈತರಿಗೆ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
  ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಾಜ್ಯ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎನ್. ಮಂಜುನಾಥ ಪ್ರಸಾದ್, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಜಿಲ್ಲೆಯ ಬರಪರಿಸ್ಥಿತಿ ಹಾಗೂ ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು.  ಸಭೆಯಲ್ಲಿ ಶಾಸಕರುಗಳಾದ ಪರಣ್ಣ ಮುನವಳ್ಳಿ, ಸಂಗಣ್ಣ ಕರಡಿ, ಶಿವರಾಜ ಎಸ್ ತಂಗಡಗಿ, ವಿಧಾನಪರಿಷತ್ ಸದಸ್ಯ ಹಾಲಪ್ಪ ಆಚಾರ್, ಸಂಸದ ಶಿವರಾಮಗೌಡ, ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಅಮರನಾಥ ಪಾಟೀಲ, ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಕಾಡಾ ಅಧ್ಯಕ್ಷ ಬಸನಗೌಡ ಬ್ಯಾಗವಾಟ, ಗಣ್ಯರಾದ ನವೀನ್ ಗುಳಗಣ್ಣವರ್, ಜಿ.ಪಂ. ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
Please follow and like us:
error