You are here
Home > Koppal News > ಮತದಾರರ ಜಾಗೃತಿಯಲ್ಲಿ ಬೂತ್ ಮಟ್ಟದ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ- ಡಿ.ಕೆ. ರವಿ

ಮತದಾರರ ಜಾಗೃತಿಯಲ್ಲಿ ಬೂತ್ ಮಟ್ಟದ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ- ಡಿ.ಕೆ. ರವಿ

 ಮತದಾನದ ಮಹತ್ವದ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸುವ ಕಾರ್ಯದಲ್ಲಿ ಆಯಾ ಮತಗಟ್ಟೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ಬೂತ್ ಮಟ್ಟದ ಅಧಿಕಾರಿಗಳ ಪಾತ್ರ ಅತ್ಯಂತ ಹಿರಿದಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಿ.ಕೆ. ರವಿ ಅವರು ಹೇಳಿದರು.
  ಮತದಾರರಲ್ಲಿ ಜಾಗೃತಿ ಮೂಡಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ನಗರದ ಸಾಹಿತ್ಯ ಭವನದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಬೂತ್ ಮಟ್ಟದ ಅಧಿಕಾರಿಗಳ ತರಬೇತಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
  ಆಯಾ ಮತಗಟ್ಟೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಮತದಾರರನ್ನು ಮತದಾನಕ್ಕೆ ಪ್ರೇರೇಪಿಸುವ ಮಹತ್ವಪೂರ್ಣ ಜವಾಬ್ದಾರಿಯನ್ನು ನೀಡಲಾಗುತ್ತಿದೆ.  ಇದಕ್ಕೆ ಪೂರಕವಾಗಿ ಎಲ್ಲ ಬೂತ್ ಮಟ್ಟದ ಅಧಿಕಾರಿಗಳಿಗೆ ಈಗಾಗಲೆ ಮತದಾನದ ಪ್ರತಿಜ್ಞಾವಿಧಿಯನ್ನು ಒಳಗೊಂಡ ಕರಪತ್ರಗಳನ್ನು ಪೂರೈಸಲಾಗಿದೆ.  ಯಾವುದೇ ಮತದಾರ ತನ್ನ ಮತದಾನದ ಹಕ್ಕು ಚಲಾಯಿಸದಿದ್ದಲ್ಲಿ, ಅಂತಹ ವ್ಯಕ್ತಿ ಭಾರತೀಯ ಪ್ರಜೆ ಎನಿಸಿಕೊಳ್ಳಲು ಅರ್ಹನಾಗಲಾರ.  ಹಣ, ಹೆಂಡದಾಸೆಗೆ ಮತವನ್ನು ಮಾರಿಕೊಳ್ಳುವಂತಹದ್ದು, ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ.  ಇದೇ ಪ್ರಥಮ ಬಾರಿಗೆ ಮತದಾರರಿಗೆ ಗುರುತಿನ ಚೀಟಿಯನ್ನು ವಿತರಿಸುವ ಹೊಣೆಯನ್ನೂ ಸಹ ಬೂತ್ ಮಟ್ಟದ ಅಧಿಕಾರಿಗಳಿಗೆ ವಹಿಸಲಾಗಿದ್ದು, ಇವರು ಮತದಾರರ ಗುರುತಿನ ಚೀಟಿಯೊಂದಿಗೆ ಪ್ರತಿ ಕುಟುಂಬಕ್ಕೆ ಕನಿಷ್ಟ ಒಂದು ಕರಪತ್ರವನ್ನು ನೀಡುವ ಮೂಲಕ, ಅಂತಹ ಕುಟುಂಬದ ವ್ಯಕ್ತಿಗಳು ತಪ್ಪದೆ ಮತದಾನ ಮಾಡುವಂತೆ ಮನವೊಲಿಸಬೇಕು.  ಉತ್ತಮ ಕಾರ್ಯ ನಿರ್ವಹಿಸಿ, ಅತಿ ಹೆಚ್ಚು ಮತದಾನದ ಪ್ರಮಾಣ ದಾಖಲಾಗುವಂತೆ ಮಾಡುವ ಬೂತ್ ಮಟ್ಟದ ಅಧಿಕಾರಿಗಳನ್ನು ಗುರುತಿಸಿ, ಅಂತಹವರಿಗೆ ಬಹುಮಾನ ಹಾಗೂ ಪ್ರಶಂಸಾ ಪತ್ರ ನೀಡಲು ಯೋಜಿಸಲಾಗಿದೆ.  ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು ೧೧೩೬ ಬೂತ್ ಮಟ್ಟದ ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದು, ಇವರೆಲ್ಲರೂ ತಮ್ಮ ಪ್ರಾಮಾಣಿಕವಾಗಿ ಪ್ರಯತ್ನಪಟ್ಟಲ್ಲಿ, ಜಿಲ್ಲೆಯ ಮತದಾನದ ಪ್ರಮಾಣ ಶೇ. ೯೦ಕ್ಕಿಂತ ಹೆಚ್ಚಾಗುವುದರಲ್ಲಿ ಅನುಮಾನವಿಲ್ಲ.  ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಿ.ಕೆ. ರವಿ ಅವರು ಬೂತ್ ಮಟ್ಟದ ಅಧಿಕಾರಿಗಳಲ್ಲಿ ಮನವಿ ಮಾಡಿದರು.
  ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಮಾತನಾಡಿ, ಬೂತ್ ಮಟ್ಟದ ಅಧಿಕಾರಿಗಳು ಮತದಾರರಿಗೆ ವಿತರಿಸುವ ಭಾವಚಿತ್ರವಿರುವ ಗುರುತಿನ ಚೀಟಿ ಒಂದಿದ್ದಲ್ಲಿ, ಮತದಾನಕ್ಕೆ ಇತರೆ ಯಾವುದೇ ದಾಖಲೆಗಳ ಅಗತ್ಯವಿರುವುದಿಲ್ಲ.  ಆದ್ದರಿಂದ ಬೂತ್ ಮಟ್ಟದ ಅಧಿಕಾರಿಗಳು ಗುರುತಿನ ಚೀಟಿಯನ್ನು ತಪ್ಪದೆ ಎಲ್ಲ ಮತದಾರರ ಕುಟುಂಬಗಳಿಗೆ ತಲುಪಿಸಿ, ಸಹಿ ಪಡೆದುಕೊಳ್ಳಬೇಕು.  ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಯಾವುದೇ ಬೂತ್ ಮಟ್ಟದ ಅಧಿಕಾರಿಗಳು ಯಾವುದೇ ಕಾರಣಕ್ಕೂ ತಮ್ಮ ಮೊಬೈಲ್ ಸ್ವಿಚ್-ಆಫ್ ಮಾಡುವುದಾಗಲಿ, ಕೇಂದ್ರಸ್ಥಾನ ತೊರೆಯುವದಾಗಲಿ ಮಾಡುವಂತಿಲ್ಲ.  ಅಲ್ಲದೆ ತಮ್ಮ ವ್ಯಾಪ್ತಿಯಲ್ಲಿ ಯಾವುದೇ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ ಅಂತಹ ಮಾಹಿತಿಯನ್ನು ಕೂಡಲೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಲುಪಿಸುವ ಕಾರ್ಯ ನಿರ್ವಹಿಸಬೇಕು ಎಂದರು.
  ಕಾರ್ಯಕ್ರಮದಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ಚುನಾವಣಾ ವೀಕ್ಷಕರಾದ ಬಿಹಾರ ರಾಜ್ಯದ ಅಧಿಕಾರಿ ನೀಲಂ ಗುಪ್ತಾ, ಕೊಪ್ಪಳ ಕ್ಷೇತ್ರ ಚುನಾವಣಾಧಿಕಾರಿಯಾಗಿರುವ ಆಹಾರ ಇಲಾಖೆ ಉಪನಿರ್ದೇಶಕ ಅಶೋಕ್ ಕಲಘಟಗಿ, ಸ್ವೀಪ್ ಸಮಿತಿಯ ಜಿಲ್ಲಾ ನೋಡಲ್ ಅಧಿಕಾರಿಯಾಗಿರುವ ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್, ತಹಸಿಲ್ದಾರ್ ಬಿ.ಎಲ್. ಗೋಠೆ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಮೂರ್ತಿ ಭಾಗವಹಿಸಿದ್ದರು.  ಕೊಪ್ಪಳ ವಿಧಾನಸಭಾ ಕ್ಷೇತ್ರದ ಎಲ್ಲ ಬೂತ್ ಮಟ್ಟದ ಅಧಿಕಾರಿಗಳು, ಸೆಕ್ಟರ್ ಅಧಿಕಾರಿಗಳು ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.

Leave a Reply

Top