You are here
Home > Koppal News > ಜ. ೧೫ ರಂದು ಶಿವಯೋಗಿ ಸಿದ್ದರಾಮೇಶ್ವರ ಜಯಂತಿ : ಸರ್ಕಾರಿ ಕಾರ್ಯಕ್ರಮವಾಗಿ ಆಚರಣೆ

ಜ. ೧೫ ರಂದು ಶಿವಯೋಗಿ ಸಿದ್ದರಾಮೇಶ್ವರ ಜಯಂತಿ : ಸರ್ಕಾರಿ ಕಾರ್ಯಕ್ರಮವಾಗಿ ಆಚರಣೆ

 ಶಿವಯೋಗಿ ಸಿದ್ಧರಾಮೇಶ್ವರರ ಜಯಂತಿ ಆಚರಣೆಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲಾಗುತ್ತಿದ್ದು, ಜ. ೧೫ ರಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ಹೇಳಿದರು.  
   ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಣೆಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸುವ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. 
   ಶಿವಯೋಗಿ ಸಿದ್ಧರಾಮೇಶ್ವರರ ಜಯಂತಿ ಉತ್ಸವವನ್ನು  ಜ. ೧೫ ರಂದು   ಜಯಂತಿಯನ್ನು ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಉದ್ದೇಶಿಸಲಾಗಿದೆ.  ಅಂದು ಬೆಳಿಗ್ಗೆ ೯ ಗಂಟೆಗೆ ಶಿವಯೋಗಿ ಸಿದ್ಧರಾಮೇಶ್ವರ ಅವರ ಭಾವಚಿತ್ರದೊಂದಿಗೆ ಮೆರವಣಿಗೆಯು ನಗರದ ಗವಿಮಠದ ಬಳಿಯಿಂದ ಹೊರಟು, ಶಾರದಾ ಟಾಕೀಸ್ ರಸ್ತೆ, ಗಡಿಯಾರ ಕಂಭ ವೃತ್ತ, ಜವಾಹರ ರಸ್ತೆ, ಅಶೋಕ ಸರ್ಕಲ್ ಮೂಲಕ  ಸಾಹಿತ್ಯ ಭವನ ತಲುಪಲಿದೆ.   ಡೊಳ್ಳು ಕುಣಿತ ಸೇರಿದಂತೆ ಹಲವು ಜಾನಪದ ಕಲಾ ತಂಡಗಳು ಭಾಗವಹಿಸಿ, ಮೆರವಣಿಗೆಯನ್ನು ಆಕರ್ಷಕಗೊಳಿಸಲಿವೆ.  ಮಧ್ಯಾಹ್ನ ೧ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಸಮಾರಂಭ ಜರುಗಲಿದ್ದು, ಸಮಾರಂಭದಲ್ಲಿ ವಿಶೇಷ ಉಪನ್ಯಾಸ ನೀಡಲು ಕೊಪ್ಪಳದ ಅಲ್ಲಮಪ್ರಭು ಬೆಟ್ಟದೂರ ಅವರನ್ನು ಆಹ್ವಾನಿಸಲಾಗುವುದು.  ಜಯಂತಿ ಆಚರಣೆಯಲ್ಲಿ ಎಲ್ಲ ಸಾರ್ವಜನಿಕರು, ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳು ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು.  ಮೆರವಣಿಗೆ ಹಾಗೂ ಸಮಾರಂಭದಲ್ಲಿ ಎಲ್ಲ ಅಧಿಕಾರಿ, ಸಿಬ್ಬಂದಿಗಳು ಪಾಲ್ಗೊಳ್ಳುವುದು ಕಡ್ಡಾಯವಾಗಿದ್ದು, ಗೈರು ಹಾಜರಾಗುವವರ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗುವುದು.  ಮೆರವಣಿಗೆ ಸಂದರ್ಭದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್, ಅಗತ್ಯ ಕುಡಿಯುವ ನೀರಿನ ವ್ಯವಸ್ಥೆ, ಮೆರವಣಿಗೆ ಸಾಗಿ ಬರುವ ರಸ್ತೆಯನ್ನು ಸ್ವಚ್ಛಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ಹೇಳಿದರು.
        ಸಭೆಯಲ್ಲಿ ಡಿವೈಎಸ್‌ಪಿ ಎಂ. ರಾಜೀವ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ವೈ.ಹೆಚ್. ಲಂಬು, ಡಿಡಿಪಿಐ ಶ್ಯಾಮಸುಂದರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀಕಾಂತ್ ಬಾಸೂರ,  ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಶುಭಾ,  ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು,  ಸಮಾಜದ ಮುಖಂಡರಾದ ಬಸವರಾಜ ಬೋವಿ, ಸತ್ಯಪ್ಪ, ಸೂಚಪ್ಪ ಬೋವಿ, ನಿಂಗಪ್ಪ, ಬಸವರಾಜ ವಕೀಲರು, ಗಾಳೆಪ್ಪ, ದುರ್ಗಪ್ಪ, ರೇವಣಪ್ಪ ಮೊದಲಾದವರು, ಶಿವಾನಂದ ಹೊದ್ಲೂರು, ಮಂಜುನಾಥ ಗೊಂಡಬಾಳ, ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿ ಉಪಯುಕ್ತ ಸಲಹೆ ಸೂಚನೆ ನೀಡಿದರು.

Leave a Reply

Top