ಡೆಂಗ್ಯು ಜ್ವರ ನಿಯಂತ್ರಣ : ಕೊಪ್ಪಳ ನಗರಸಭೆಯಿಂದ ಮುಂಜಾಗ್ರತಾ ಕ್ರಮಗಳು

ಡೆಂಗ್ಯು ಜ್ವರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ನಗರಸಭೆಯಿಂದ ಸಾರ್ವಜನಿಕರಿಗೆ ವಿವಿಧ ಮುಂಜಾಗ್ರತಾ ಕ್ರಮಗಳನ್ನು ಸೂಚಿಸಲಾಗಿದೆ ಎಂದು ಕೊಪ್ಪಳ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

ಡೆಂಗ್ಯು ಜ್ವರ ಎಂದರೇನು : ಡೆಂಗ್ಯು ಜ್ವರ ವೈರಸ್‌ನಿಂದ ಉಂಟಾಗುವ ಖಾಯಿಲೆ. ಇದು ಸೋಂಕು ಹೊಂದಿದ ಈಡಿಸ್ ಇಜಿಸ್ಟೈ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಸಾಮಾನ್ಯವಾಗಿ ಸ್ವಚ್ಛ ನೀರಿನಲ್ಲಿ ಸಂತಾನಾಭಿವೃದ್ಧಿ ಮಾಡುತ್ತವೆ. ಹಾಗೂ ಹಗಲು ಹೊತ್ತಿನಲ್ಲಿ ಮನುಷ್ಯರನ್ನು ಕಚ್ಚುತ್ತವೆ.
ಈ ರೋಗದ ಮುಖ್ಯ ಲಕ್ಷಣಗಳಾವವು : ಇದ್ದಕ್ಕಿದ್ದಂತೆ ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗ, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಳ್ಳುವುದು, ಈ ರೋಗದ ಪ್ರಮುಖ ಲಕ್ಷಣಗಳು, ತೀವ್ರ ಸ್ಥಿತಿಯಲ್ಲಿ ಬಾಯಿ, ಮೂಗು ಮತ್ತು ಒಸಡುಗಳಿಂದ ರಕ್ತಸ್ರಾವ ಹಾಗೂ ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವದ ಗುರುತುಗಳು ಕಾಣಿಸಿಕೊಳ್ಳುತ್ತದೆ.
ಈ ರೋಗಕ್ಕೆ ಚಿಕಿತ್ಸೆ ಏನು : ಡೆಂಗ್ಯು ಜ್ವರಕ್ಕೆ ಯಾವುದೇ ನಿರ್ದಿಷ್ಟ ಔಷಧಿ ಅಥವಾ ಲಸಿಕೆ ಇರುವುದಿಲ್ಲ. ರೋಗದ ಲಕ್ಷಣಗಳಿಗನುಸಾರವಾಗಿ ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆಯಬಹುದು ಇಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಲ್ಲಿ ಪರೀಕ್ಷಿಸಿಕೊಂಡು ಸೂಕ್ತ ಚಿಕಿತ್ಸೆಯನ್ನು ಪಡೆಯಬೇಕು.
ಈ ರೋಗದ ನಿಯಂತ್ರಣ ಹೇಗೆ : ಸೊಳ್ಳೆಗಳ ನಿಯಂತ್ರಣ ಡೆಂಗ್ಯು ರೋಗದ ಹತೋಟಿಗೆ ಮುಖ್ಯ ವಿಧಾನ ಈ ಸೊಳ್ಳೆಗಳು ನೀರನ್ನು ಶೇಖರಿಸಿಡುವ ಸಿಮೆಂಟ್ ತೊಟ್ಟಿ, ಕಲ್ಲುಚಪ್ಪಡ್ಡಿಯಿಂದ ನಿರ್ಮಿಸಿದ ತೊಟ್ಟಿ, ಡ್ರಮ್ಮು, ಬ್ಯಾರೆಲ್, ಮಣ್ಣಿನ ಮಡಿಕೆ, ಉಪಯೋಗಿಸುವ ಒರಳುಕಲಲು, ಬಿಸಾಡಿದ ತೆಂಗಿನ ಚಿಪ್ಪುಗಳು ಮುಂತಾದ ಕಡೆ ಶೇಖರವಾಗುವ ನೀರಿನಲ್ಲಿ ಉತ್ಪತ್ತಿಯಾಗುವದರಿಂದ ಈ ರೀತಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು.
ಮುಂಜಾಗ್ರತಾ ಕ್ರಮಗಳು : ಎಲ್ಲಾ ನೀರಿನ ತಟ್ಟಿ, ಡ್ರಮ್ಮು, ಬ್ಯಾರೆಲ್, ಏರ್‌ಕೂಲರ್ ಇತ್ಯಾದಿಗಳನ್ನು ೩ ಅಥವಾ ೪ ದಿನಗಳಿಗೊಮ್ಮೆ ಖಾಲಿ ಮಾಡಿ, ಒಣಗಿಸಿ ಮತ್ತೆ ಭರ್ತಿ ಮಾಡಿಕೊಳ್ಳುವುದು, ನೀರು ಖಾಲಿ ಮಾಡಲು ಸಾಧ್ಯವಿಲ್ಲದ ತೊಟ್ಟಿ ಮುಂತಾದವುಗಳನ್ನು ಸೊಳ್ಳೆಗಳು ಒಳಗೆ ನುಸುಳದಂತೆ ಸರಿಯಾದ ಮುಚ್ಚಳದಿಂದ ಮುಚ್ಚವುದು, ಬಯಲಿನಲ್ಲಿರುವ ತ್ಯಾಜ್ಯ ವಸ್ತುಗಳಾದ ಟೈರು, ಎಳೆನೀರಿನ ಚಿಪ್ಪು, ಒಡೆದ ಬಾಟಲಿ ಮುಂತಾದವುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರವಹಿಸುವುದು ಅಥವಾ ಸೂಕ್ತ ವಿಲೇವಾರಿ ಮಾಡುವುದು, ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆ ನಿರೋಧಕಗಳನ್ನು ಹಾಗೂ ಸೊಳ್ಳೆ ಪರದೆಯನ್ನು ಬಳಸಿ, ಸೊಳ್ಳೆಗಳು ಕಚ್ಚದಂತೆ ಎಚ್ಚರಿಕೆ ವಹಿಸುವುದು, ರಾತ್ರಿ ಹೊತ್ತಿನಲ್ಲಿ ಸೊಳ್ಳೆ ಬತ್ತಿಗಳನ್ನು ಹಚ್ಚುವುದು. ಕಿಟಕಿಗಳಿಗೆ ಜಾಲರಿಗಳನ್ನು ಹೊಡೆಸುವುದು, ಸಂಜೆ ಹೊತ್ತು ಬೇವಿನ ಸೊಪ್ಪಿನ ಹಾಗೂ ಹಾಕುವುದು ಮನೆಯ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳುವುದು.
Please follow and like us:
error