ಮಾಹಿತಿ ಹಕ್ಕು ಅಧಿನಿಯಮ ಕುರಿತು ಪರಿಪೂರ್ಣ ಅರಿವು ಹೊಂದುವುದು ಅಗತ್ಯ

 ಕೊಪ್ಪಳ ಜ. ೧೦  ಮಾಹಿತಿ ಹಕ್ಕು ಅಧಿನಿಯಮ ಕಾಯ್ದೆ ಬಗ್ಗೆ ಎಲ್ಲ ಅಧಿಕಾರಿ, ಸಿಬ್ಬಂದಿಗಳು ಪರಿಪೂರ್ಣ ಅರಿವು ಹೊಂದುವುದು ಅತ್ಯಂತ ಅಗತ್ಯವಾಗಿದೆ ಎಂದು ಕೊಪ್ಪಳ ಸಹಾಯಕ ಆಯುಕ್ತ ಪಿ.ಎಸ್. ಮಂಜುನಾಥ್ ಅವರು ಹೇಳಿದರು.
  ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಮೈಸೂರಿನ ಆಡಳಿತ ತರಬೇತಿ ಸಂಸ್ಥೆ ಹಾಗೂ ಕೊಪ್ಪಳ ಜಿಲ್ಲಾ ತರಬೇತಿ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಏರ್ಪಡಿಸಲಾದ ಎರಡು ದಿನಗಳ ತರಬೇತಿ ಕಾರ್ಯಾಗಾರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
  ಜನಸಾಮಾನ್ಯರಿಗೆ ಸರ್ಕಾರದ ಆಗು-ಹೋಗುಗಳ ಬಗ್ಗೆ ತಿಳಿದುಕೊಳ್ಳಲು ಅನುಕೂಲವಾಗುವಂತೆ ಹಾಗೂ ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆಯನ್ನು ತರುವ ಉದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾಹಿತಿ ಹಕ್ಕು ಅಧಿನಿಯಮ ಕಾಯ್ದೆಯನ್ನು ರೂಪಿಸಿ ಜಾರಿಗೊಳಿಸಿವೆ.  ಈ ಕಾಯ್ದೆಯ ಬಗ್ಗೆ ಪರಿಪೂರ್ಣ ಅರಿವನ್ನು ಅಧಿಕಾರಿ, ಸಿಬ್ಬಂದಿಗಳು ಪಡೆಯಬೇಕು.  ಇದರಿಂದಾಗಿ, ಪ್ರಕರಣಗಳಿಗೆ ದಂಡ ಹಾಗೂ ಮಾಹಿತಿ ಆಯೋಗದವರೆಗೆ ಪ್ರಕರಣ ಹೋಗುವುದನ್ನು ತಡೆಗಟ್ಟಬಹುದಾಗಿದೆ.  ಈ ನಿಟ್ಟಿನಲ್ಲಿ ಮೈಸೂರಿನ ಆಡಳಿತ ತರಬೇತಿ ಸಂಸ್ಥೆ ಹಾಗೂ ಜಿಲ್ಲಾ ತರಬೇತಿ ಸಂಸ್ಥೆಗಳು ಜಂಟಿಯಾಗಿ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ಏರ್ಪಡಿಸುತ್ತಿರುವುದು ಶ್ಲಾಘನೀಯವಾಗಿದ್ದು, ಅಧಿಕಾರಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಹಾಯಕ ಆಯುಕ್ತ ಪಿ.ಎಸ್. ಮಂಜುನಾಥ್ ಅವರು ಹೇಳಿದರು.
  ಜಿಲ್ಲಾ ತರಬೇತಿ ಸಂಸ್ಥೆಯ ಬೋಧಕರಾದ ಲಾಯಖ್ ಅಲಿ ಅವರು ಸ್ವಾಗತಿಸಿದರು.  ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ ಬೋಧಕರಾದ ಕೆ.ಎಂ. ಪ್ರಸಾದ್ ಅವರು ಮಾಹಿತಿ ಹಕ್ಕು ಅಧಿನಿಯಮ ಕುರಿತಂತೆ ಅಧಿಕಾರಿಗಳಿಗೆ ವಿಶೇಷ ತರಬೇತಿ ನೀಡಿದರು.  ಕಾರ್ಯಾಗಾರದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.  ಕಾರ್ಯಾಗಾರದ ಅಂಗವಾಗಿ ಜ. ೧೧ ರಂದು ಆಡಿಟೋರಿಯಂ ಹಾಲ್‌ನಲ್ಲಿ ಬೆಂಗಳೂರಿನ ನ್ಯಾಷನಲ್ ಕಾನೂನು ಕಾಲೇಜಿನ ಪ್ರಾಧ್ಯಾಪಕರಾದ ಡಾ. ಸಾಯಿರಾಂ ಅವರಿಂದ ಅಧಿಕಾರಿಗಳಿಗೆ ವಿಶೇಷ ತರಬೇತಿ ಕಾರ್ಯಕ್ರಮ ಜರುಗಲಿದೆ.
Please follow and like us:
error