You are here
Home > Koppal News > ನವೆಂಬರ್ ಅಂತ್ಯದೊಳಗೆ ಕುಡಿಯುವ ನೀರು ಕಾಮಗಾರಿಗಳನ್ನು ಪೂರ್ಣಗೊಳಿಸಿ- ಜ್ಯೋತಿ ಬಿಲ್ಗಾರ್

ನವೆಂಬರ್ ಅಂತ್ಯದೊಳಗೆ ಕುಡಿಯುವ ನೀರು ಕಾಮಗಾರಿಗಳನ್ನು ಪೂರ್ಣಗೊಳಿಸಿ- ಜ್ಯೋತಿ ಬಿಲ್ಗಾರ್


ಕೊಪ್ಪಳ ಆ.: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ಯೋಜನೆಗಳಡಿ ಕೈಗೊಂಡಿರುವ ಕುಡಿಯುವ ನೀರು ಸರಬರಾಜು ಕಾಮಗಾರಿಗಳನ್ನು ನವೆಂಬರ್ ಅಂತ್ಯದೊಳಗಾಗಿ ಪೂರ್ಣಗೊಳಿಸಲು ಕ್ರಮ ವಹಿಸುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಬಿಲ್ಗಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಜಿಲ್ಲಾ ಪಂಚಾಯತಿ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಜಿಲ್ಲೆಯಾದ್ಯಂತ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಸರಬರಾಜಿಗೆ ಸಂಬಂಧಿಸಿದಂತೆ ಒಟ್ಟು ೫೧೧ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಇವುಗಳನ್ನು ಪ್ರಥಮಾಧ್ಯತೆಯ ಮೇರೆಗೆ ಕಾಲಮಿತಿ ನಿಗದಿಪಡಿಸಿಕೊಂಡು ನವೆಂಬರ್ ಅಂತ್ಯದೊಳಗಾಗಿ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಗ್ರಾಮೀಣ ಪ್ರದೇಶದ ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸುವಂತಾಗಬೇಕು. ನಿಗದಿತ ಅವಧಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ, ಮುಂದಿನ ದಿನಗಳಲ್ಲಿ ಯಾವುದೇ ಟೆಂಡರ್‌ಗೆ ಅವಕಾಶ ನೀಡದಂತೆ ಕಠಿಣ ಕ್ರಮ ಜರುಗಿಸಲಾಗುವುದು. ತೀವ್ರ ಅಂತರ್ಜಲ ಕುಸಿತ ಹಾಗೂ ಫ್ಲೋರೈಡ್ ಅಂಶ ಇರುವ ಪ್ರದೇಶಗಳನ್ನು ಗುರುತಿಸಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ವರದಿ ಸಲ್ಲಿಸಿದ್ದು, ಇಂತಹ ಪ್ರದೇಶಗಳಲ್ಲಿ ಕೊಳವೆಬಾವಿ ಕೊರೆಯಿಸಿ ಕುಡಿಯುವ ನೀರು ಒದಗಿಸುವುದು ಸಮಂಜಸವಲ್ಲ. ಇಂತಹ ಗ್ರಾಮಗಳಿಗೆ ಬೇರೆ ಬೇರೆ ಯೋಜನೆಗಳಡಿ ಕುಡಿಯುವ ನೀರು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವುದು ಸೂಕ್ತ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಬಿಲ್ಗಾರ್ ಅವರು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ತೊಂದರೆ ಎದುರಿಸುತ್ತಿರುವ ಗ್ರಾಮಗಳ ಪಟ್ಟಿ ಹಾಗೂ ಕ್ರಿಯಾ ಯೋಜನೆ ರೂಪಿಸುವಲ್ಲಿ ತಾರತಮ್ಯ ನೀತಿ ಅನುಸರಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಸದಸ್ಯರು ನೀಡಿದ ದೂರಿಗೆ ಸ್ಪಂದಿಸಿದ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಸದ್ಯ ತಯಾರಿಸಲಾಗಿರುವ ಪಟ್ಟಿಯನ್ನು ಪರಿಷ್ಕರಿಸಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಿರ್ಮಿತಿ ಕೇಂದ್ರಕ್ಕೆ ಕಾಮಗಾರಿ ಬೇಡ: ಯಲಬುರ್ಗಾ ತಾಲೂಕಿನಲ್ಲಿ ನಿರ್ಮಿತಿ ಕೇಂದ್ರದ ವತಿಯಿಂದ ಕೈಗೊಂಡಿರುವ ಹಲವಾರು ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ಕೂಡಿದ್ದು, ಇನ್ನು ಮುಂದೆ ಜಿಲ್ಲಾ ಪಂಚಾಯತಿಗೆ ಸಂಬಂಧಿಸಿದ ಯಾವುದೇ ಕಾಮಗಾರಿಗಳನ್ನು ನಿರ್ಮಿತಿ ಕೇಂದ್ರದವರಿಗೆ ವಹಿಸುವುದು ಬೇಡ ಎಂದು ಜಿಲ್ಲಾ ಪಂಚಾಯತ್ ಸದಸ್ಯ ಈರಪ್ಪ ಕುಡಗುಂಟಿ ಅವರು ಒತ್ತಾಯಿಸಿದರು.
ಸಾಹಿತ್ಯ ಸಮ್ಮೇಳನಕ್ಕೆ ಅನುದಾನ: ಬರುವ ನವೆಂಬರ್ ತಿಂಗಳಿನಲ್ಲಿ ಗಂಗಾವತಿಯಲ್ಲಿ ನಡೆಯಲಿರುವ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೊಪ್ಪಳ ಜಿಲ್ಲಾ ಪಂಚಾಯತಿಯಿಂದ ೫೦೦೦೦ ರೂ.ಗಳ ಅನುದಾನ ನೀಡಲು ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆ ಅನುಮೋದನೆ ನೀಡಿದೆ ಎಂದು ಜಿ.ಪಂ. ಅಧ್ಯಕ್ಷೆ ಜ್ಯೋತಿ ಬಿಲ್ಗಾರ್ ಅವರು ತಿಳಿಸಿದರು.
ಸರ್ವಶಿಕ್ಷಣ ಅಭಿಯಾನ: ಸರ್ವಶಿಕ್ಷಣ ಅಭಿಯಾನದ ಕಳೆದ ಸಾಲಿನ ಪ್ರಚಾರ ಕಾರ್ಯಕ್ರಮಗಳಿಗೆ ಫ್ಲೆಕ್ಸ್ ಮುಂತಾದ ಕೆಲಸದಲ್ಲಿ ೧೦ ಲಕ್ಷ ರೂ.ಗಳಿಗೂ ಹೆಚ್ಚು ಮೊತ್ತದ ಅವ್ಯವಹಾರ ನಡೆಸಲಾಗಿದೆ ಎಂದು ಹಲವಾರು ಮಾಧ್ಯಮಗಳು ದಾಖಲೆಯೊಂದಿಗೆ ವರದಿ ಮಾಡಿವೆ. ಈ ಕುರಿತು ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಡಾ. ಸೀತಾ ಗೂಳಪ್ಪ ಹಲಗೇರಿ, ಜಿ.ಪಂ. ಸದಸ್ಯ ರಾಘವೇಂದ್ರ ಹಿಟ್ನಾಳ್ ಸೇರಿದಂತೆ ಮತ್ತಿತರ ಸದಸ್ಯರು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಟೇಲಿಂಗಾಚಾರ್ ಅವರನ್ನು ತರಾಟೆಗೆ ತೆಗೆದುಕೊಂಡರು. ಇದಕ್ಕೆ ಉತ್ತರಿಸಿದ ಅವರು, ಮಾಧ್ಯಮಗಳಲ್ಲಿ ವರದಿಯಾದ ವಿಷಯಕ್ಕೆ ಸಂಬಂಧಪಟ್ಟಂತೆ ಸಮಗ್ರ ದಾಖಲೆ, ಮಾಹಿತಿಯನ್ನು ಸಂಗ್ರಹಿಸಿಕೊಂಡು, ಶಿಸ್ತು ಕ್ರಮ ಜರುಗಿಸುವಂತೆ ರಾಜ್ಯ ನಿರ್ದೇಶಕರು ಹಾಗೂ ಗುಲಬರ್ಗಾ ವಿಭಾಗದ ಉನ್ನತ ಅಧಿಕಾರಿಗಳಿಗೆ ಸಮಗ್ರ ವರದಿಯನ್ನು ಕಳುಹಿಸಿಕೊಡಲಾಗಿದೆ ಎಂದು ವಿವರಣೆ ನೀಡಿದರು. ಅಲ್ಲದೆ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಹಲವು ಕಟ್ಟಡ ಕಾಮಗಾರಿಗಳು ಪೂರ್ಣಗೊಂಡಿದ್ದು, ಕೂಡಲೆ ಇಲಾಖೆಗೆ ಹಸ್ತಾಂತರ ಮಾಡಿಕೊಳ್ಳುವಂತೆ ಹಾಗೂ ಈ ಕುರಿತ ವರದಿಯನ್ನು ಸಲ್ಲಿಸುವಂತೆ ಕಳೆದ ಜು. ೧೬ ರಂದು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಪತ್ರ ಬರೆದು ಸೂಚಿಸಲಾಗಿದೆ. ಆದರೆ ಇದುವರೆಗೂ ಅವರಿಂದ ಯಾವುದೇ ಮಾಹಿತಿ ಬಂದಿಲ್ಲ. ಅಗಸ್ಟ್ ತಿಂಗಳ ಅಂತ್ಯದೊಳಗೆ ಮಾಹಿತಿ ಸಲ್ಲಿಸದ ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಕ್ರಮ ಜರುಗಿಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಟೇಲಿಂಗಾಚಾರ್ ಅವರು ಸಭೆಗೆ ತಿಳಿಸಿದರು.
ಮೋಟಾರು ವಾಹನ ನಿರೀಕ್ಷಕರ ಕ್ರಮಕ್ಕೆ ಅಸಮಾಧಾನ: ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಾರಿಗೆ ಇಲಾಖೆಯ ಮೋಟಾರು ವಾಹನ ನಿರೀಕ್ಷಕರು ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳನ್ನು ತನಿಖೆ ಮಾಡುವ ನೆಪದಲ್ಲಿ ಟ್ರಾಫಿಕ್‌ಜಾಮ್ ಆಗಲು ಕಾರಣಕರ್ತರಾಗುತ್ತಿದ್ದಾರೆ. ವಾಹನಗಳನ್ನು ತನಿಖೆ ಮಾಡುವ ಸಂದರ್ಭದಲ್ಲಿ ಟ್ರಾಫಿಕ್‌ಜಾಮ್ ಆಗದ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು. ಅಲ್ಲದೆ ಯಲಬುರ್ಗಾ ತಾಲೂಕಿನ ರಸ್ತೆಗಳಲ್ಲಿ ಲಾರಿಗಳು ಗ್ರಾನೈಟ್ ಕಲ್ಲುಗಳನ್ನು ನಿಗದಿತಗಿಂತ ಹೆಚ್ಚಿನ ಭಾರವನ್ನು ಹೊತ್ತು ಸಂಚರಿಸುತ್ತಿವೆ. ಇದರಿಂದ ಇಲ್ಲಿನ ರಸ್ತೆಗಳು ಹಾಳಾಗುತ್ತಿದೆ. ಆದರೆ ಮೋಟಾರು ವಾಹನ ನಿರೀಕ್ಷಕರು ಮಾತ್ರ ಇತ್ತ ಸುಳಿಯುತ್ತಿಲ್ಲ ಎಂದು ಜಿ.ಪಂ. ಸದಸ್ಯ ಈರಪ್ಪ ಕುಡಗುಂಟಿ ಆರೋಪಿಸಿದರು. ಇದಕ್ಕೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವರಾಜ್ ಪಾಟೀಲ್ ಅವರು ಉತ್ತರಿಸಿ, ಈ ಕುರಿತು ಮೋಟಾರು ವಾಹನ ನಿರೀಕ್ಷಕರಿಗೆ ಸೂಚನೆ ನೀಡಲಾಗುವುದು ಎಂದರು. ಅಲ್ಲದೆ ಇನ್ನೋರ್ವ ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಅವರು ಜಿಲ್ಲೆಯಲ್ಲಿ ಗೂಡ್ಸ್ ವಾಹನಕ್ಕೆ ನೋಂದಣಿ ಮಾಡಿಸಿ, ನಂತರ ಅದರಲ್ಲಿ ಸೀಟಿಂಗ್ ವ್ಯವಸ್ಥೆ ಮಾಡಿಕೊಂಡು ಅಕ್ರಮವಾಗಿ ಪ್ರಯಾಣಿಕರನ್ನು ಕರೆದುಕೊಂಡು ಸಂಚರಿಸುತ್ತಿವೆ. ಇಂತಹ ವಾಹನಗಳು ಅಪಘಾತಗೊಂಡು, ಪ್ರಯಾಣಿಕರು ಮೃತಪಟ್ಟಲ್ಲಿ, ಸರ್ಕಾರದಿಂದ ಪರಿಹಾರ ದೊರಕಿಸಲು ತೊಂದರೆ ಉಂಟಾಗಲಿದೆ. ಈಗಾಗಲೆ ಇಂತಹ ವಾಹನಗಳನ್ನು ವಶಕ್ಕೆ ತೆಗೆದುಕೊಂಡು, ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಡಾಕ್ಯುಮೆಂಟ್ಸ್ ಇಲ್ಲದ ವಾಹನಗಳ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಿದ್ದು, ಇಲಾಖೆಯಿಂದ ತನಿಖೆ ನಡೆಸಿ, ಅಂತಹವರ ವಿರುದ್ಧವೂ ಕ್ರಮ ಜರುಗಿಸಲಾಗುವುದು ಎಂದು ವಿವರಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೆಚ್. ಕಾಕನೂರ, ಜಿ.ಪಂ. ಉಪಾಧ್ಯಕ್ಷೆ ಡಾ. ಸೀತಾ ಹಲಗೇರಿ, ಜಿಲ್ಲಾ ಪಂಚಾಯತ್ ಸದಸ್ಯರುಗಳು, ಮುಖ್ಯ ಯೋಜನಾಧಿಕಾರಿ ಟಿ.ಪಿ. ದಂಡಿಗದಾಸರ, ಉಪಕಾರ್ಯದರ್ಶಿ ಎನ್.ಕೆ. ತೊರವಿ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ (ಗ್ರಾಮೀಣ ನೀರು ಸರಬರಾಜು) ಕಾರ್ಯಪಾಲಕ ಅಭಿಯಂತರ ಯಮನೂರಪ್ಪ, ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

Leave a Reply

Top