fbpx

ಮನೆಗೊಂದು ಶೌಚಾಲಯ ಅನಿವಾರ್ಯ- ಕೊಪ್ಪಳ ಜಿಲ್ಲೆ ಮಾದರಿ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು,  : ಮನೆಗೊಂದು ಶೌಚಾಲಯ ಇಂದಿನ ದಿನದಲ್ಲಿ ಅನಿವಾರ್ಯವಾಗಿದೆ ಎಂದು ಮುಖ್ಯಮಂತ್ರಿ   ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವಿಕಾಸಸೌಧ ಸಮ್ಮೇಳನ ಸಭಾಂಗಣದಲ್ಲಿ ಇಂದು ಏರ್ಪಡಿಸಿದ್ದ ಗ್ರಾಮೀಣಾಭಿವೃದ್ಧಿ ಪಥ- ವಿಧಾನ ಸಭಾ ಸದಸ್ಯರಿಗೆ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ, ಪ್ರತಿ ಮತ ಕ್ಷೇತ್ರಗಳ ಗ್ರಾಮೀಣಾಭಿವೃದ್ಧಿ ಯೋಜನೆಗಳ ಪೂರ್ಣ ಮಾಹಿತಿಯುಳ್ಳ ಮೂರು ಪುಸ್ತಕಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಮುಖ್ಯಮಂತ್ರಿಗಳು ಪ್ರತಿ ಗ್ರಾಮಕ್ಕೆ ಒಂದು ಶಾಲೆ, ಶೌಚಾಲಯ, ಸೊಸೈಟಿ, ಚರಂಡಿ ವ್ಯವಸ್ಥೆ, ಆಟದ ಮೈದಾನ ಇವುಗಳು ಕಡ್ಡಾಯವಾಗಿರಬೇಕು  ಗ್ರಾಮ ಸ್ವರಾಜ್ಯದ ಕನಸು ನನಸು ಮಾಡಲು, ಚುನಾಯಿತ ಪ್ರತಿನಿಧಿಗಳು ಮುಂದಾಗಬೇಕು ಎಂದರು.
ಪ್ರತಿಯೊಬ್ಬರಿಗೂ ಶೌಚಾಲಯ ಅತಿ ಅಗತ್ಯ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಈ ಬಗ್ಗೆ ಚುನಾಯಿತ ಜನ ಪ್ರತಿನಿಧಿಗಳು ಆಸಕ್ತಿ ವಹಿಸಿದರೆ ನಮ್ಮ ರಾಜ್ಯವನ್ನು ಬಹಿರ್ದೆಸೆ ಮುಕ್ತ ರಾಜ್ಯವಾಗಿ ಮಾಡಬಹುದಾಗಿದೆ.
ಗ್ರಾಮೀಣ ಭಾಗದ ಸುಧಾರಣೆಯಾಗಬೇಕಾದರೆ ಸ್ವಚ್ಛತೆಯೂ ಅಷ್ಟೇ ಮುಖ್ಯ. ಈ ಬಗ್ಗೆ ನಾವು ಗಮನ ಹರಿಸಬೇಕಾಗಿದೆ. ಸರ್ಕಾರ ಯೋಜನೆಗಳನ್ನು ಶಾಸಕರು ಸಮರ್ಥವಾಗಿ ಮೇಲ್ವಿಚಾರಣೆ ನಡೆಸಿದರೆ ಯೋಜನೆಗಳ ಅನುಷ್ಠಾನ ಯಶಸ್ವಿಯಾಗಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಈಗಿರುವ ಪಂಚಾಯತ್‌ರಾಜ್ ವ್ಯವಸ್ಥೆ ಹಲವು ಬದಲಾವಣೆಗಳನ್ನು ಕಂಡಿದೆ. ಇನ್ನೂ ಹಲವು ಬದಲಾವಣೆಗಳಾಗಬೇಕಾಗಿದೆ. ಈ ನಿಟ್ಟಿನಲ್ಲಿ ಶಾಸಕ ರಮೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಪಂಚಾಯತ್ ರಾಜ್ ವ್ಯವಸ್ಥೆ ಯಾವರೀತಿ ಇರಬೇಕೆಂದು ತಿದ್ದುಪಡಿಗೆ ಶಿಫಾರಸು ಮಾಡಿ ವರದಿ ನೀಡಿದ್ದಾರೆ. ಅದು ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ತಿಳಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ     ಎಚ್.ಕೆ. ಪಾಟೀಲ ಅವರು ರಾಜ್ಯದ ಅಭಿವೃದ್ಧಿಗೆ ಚುನಾಯಿತ ಪ್ರತಿನಿಧಿಗಳು ನಾಯಕತ್ವ ವಹಿಸುವ ಮೂಲಕ ಗ್ರಾಮೀಣ ಭಾಗದಲ್ಲಿ ಗುಣಾತ್ಮಕ ಬದಲಾವಣೆ ತರಬೇಕು ಎಂದರು.
ರಾಜ್ಯದಲ್ಲಿ ಇನ್ನೂ 56 ಲಕ್ಷ ಶೌಚಾಲಯಗಳ ನಿರ್ಮಾಣ ಕಾರ್ಯ ಆಗಬೇಕಾಗಿದೆ ಎಂದ ಅವರು, ಕೊಪ್ಪಳ ಜಿಲ್ಲೆಯಲ್ಲಿ ಒಂದು ವರ್ಷದಲ್ಲಿ ಒಂದು ಲಕ್ಷ ಶೌಚಾಲಯ ನಿರ್ಮಾಣವಾಗಿದ್ದು, ಇತರ ಜಿಲ್ಲೆಗಳಲ್ಲೂ ಈ ಮಾದರಿ ಅನುಸರಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.
ಶಾಸಕರ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಕುರಿತ ಪೂರ್ಣ ಮಾಹಿತಿಯುಳ್ಳ ಮೂರು ಪುಸ್ತಕಗಳನ್ನು ಒದಗಿಸಲಾಗಿದೆ. ಅದನ್ನು ಓದಿದರೆ, ನಿಮ್ಮ ಕ್ಷೇತ್ರದ ಅಭಿವೃದ್ಧಿ ಯೋಜನೆಗಳ ಪ್ರಗತಿಯ ಮಾಹಿತಿ ದೊರೆಯುವುದು. ಇದನ್ನು ಆಧರಿಸಿ ತಮ್ಮ ತಮ್ಮ ಕ್ಷೇತ್ರಗಳ ಅಭಿವೃದ್ಧಿ ಸಾಧನೆಗೆ ನೆರವಾಗಲಿದೆ ಎಂದು ತಿಳಿಸಿದರು. ಕ್ಷೇತ್ರದ ಅಭಿವೃದ್ಧಿಗಾಗಿ ಈ ಮಾಹಿತಿಯ ಸದುಪಯೋಗಪಡಿಸಿಕೊಳ್ಳುವಂತೆ ಶಾಸಕರಿಗೆ ಸಚಿವರು ಸಲಹೆ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಸಚಿವ ಆರ್. ರೋಷನ್ ಬೇಗ್ ವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶ್ರೀಮತಿ ಉಮಾಶ್ರೀ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಲೋಕೋಪಯೋಗಿ ಸಚಿವ ಡಾ. ಎಚ್.ಸಿ. ಮಹದೇವಪ್ಪ,  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  ಅಪರ ಮುಖ್ಯ  ಕಾರ್ಯದರ್ಶಿ  ಟಿ.ಎಂ. ವಿಜಯಭಾಸ್ಕರ್, ಇಲಾಖೆಯ ಕಾರ್ಯದರ್ಶಿ ಗಂಗಾರಾಮ್ ಬಡೇರಿಯಾ ಮೊದಲಾದವರು ಉಪಸ್ಥಿತರಿದ್ದರು.
Please follow and like us:
error

Leave a Reply

error: Content is protected !!