fbpx

ಶಿವಾಜಿ ಜಯಂತಿ ವಿಜೃಂಭಣೆಯಿಂದ ಆಚರಣೆ : ಡಾ. ಸುರೇಶ್ ಇಟ್ನಾಳ್

  ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು  ಸರ್ಕಾರಿ ಕಾರ್ಯಕ್ರಮವನ್ನಾಗಿ ಫೆ. ೧೯ ರಂದು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ಹೇಳಿದರು.
  ಶಿವಾಜಿ ಜಯಂತಿ ಆಚರಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ  ಅವರು ಮಾತನಾಡಿದರು.
  ಭಾರತದಲ್ಲಿ ಸ್ವರಾಜ್ಯದ ಕಲ್ಪನೆಯನ್ನು ಹುಟ್ಟುಹಾಕಿದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲಾಗುತ್ತಿದ್ದು, ಶಿವಾಜಿ ಜಯಂತಿಯನ್ನು  ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಫೆ. ೧೯ ರಂದು ಜಿಲ್ಲಾ ಕೇಂದ್ರದಲ್ಲಿ ಆಚರಿಸಲಾಗುವುದು. ಕಾರ್ಯಕ್ರಮ ಆಚರಣೆಗೆ ಸರ್ಕಾರ ಈ ಬಾರಿ ಜಿಲ್ಲೆಗೆ ೧ ಲಕ್ಷ ರೂ. ಅನುದಾನ ಬಿಡುಗಡೆ ಮಾಡಿದೆ.  ಶಿವಾಜಿ ಜಯಂತಿಯ ಅಂಗವಾಗಿ ಅಂದು ಬೆಳಿಗ್ಗೆ ೯ ಗಂಟೆಗೆ ಕೊಪ್ಪಳ ನಗರದ  ಶ್ರೀ ತುಳಜಾಭವಾನಿ ದೇವಸ್ಥಾನ ಆವರಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ, ಮೆರವಣಿಗೆ ಪ್ರಾರಂಭಿಸಲಾಗುವುದು.  ಮೆರವಣಿಗೆಯು ತುಳಜಾಭವಾನಿ ದೇವಸ್ಥಾನದಿಂದ ಪ್ರಾರಂಭಗೊಂಡು, ವಾರಕಾರಗಲ್ಲಿ, ಗಡಿಯಾರಕಂಬ, ಜವಾಹರ ರಸ್ತೆ ಮೂಲಕ ಸಾಹಿತ್ಯ ಭವನ ತಲುಪಲಿದೆ.  ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಭಾಗವಹಿಸಿ, ಮೆರವಣಿಗೆಯನ್ನು ಆಕರ್ಷಕಗೊಳಿಸಲಿವೆ.  ಜಯಂತ್ಯುತ್ಸವದ ಅಂಗವಾಗಿ ಅಂದು ಮಧ್ಯಾಹ್ನ ೧ ಗಂಟೆಗೆ ಸಾಹಿತ್ಯ ಭವನದಲ್ಲಿ ಸಮಾರಂಭ ಜರುಗಲಿದ್ದು, ಛತ್ರಪತಿ ಶಿವಾಜಿ ಮಹಾರಾಜರ ಕುರಿತಂತೆ ಬೆಂಗಳೂರಿನ ರಮೇಶ್ ಸುರ್ವೆ ಅವರು ವಿಶೇಷ ಉಪನ್ಯಾಸ ನೀಡುವರು ಎಂದು ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ಹೇಳಿದರು.
  ಶಿವಾಜಿ ಜಯಂತಿಯಂದು, ಮೆರವಣಿಗೆ ಸಾಗಿ ಬರುವ ಮಾರ್ಗದ ರಸ್ತೆಗಳನ್ನು ಸ್ವಚ್ಛಗೊಳಿಸಬೇಕು.  ಮೆರವಣಿಗೆಯಲ್ಲಿ ಪಾಲ್ಗೊಳ್ಳುವವರಿಗೆ ಹಾಗೂ ಸಾಹಿತ್ಯ ಭವನದಲ್ಲಿ ಸಾಕಷ್ಟು ಕುಡಿಯುವ ನೀರಿನ ವ್ಯವಸ್ಥೆಗೊಳಿಸಬೇಕು. ಅಂದು ನಗರಸಭೆಯ ಸಾಮಾನ್ಯ ಸಭೆ ಇರುವುದರಿಂದ, ಮಧ್ಯಾಹ್ನ ೧ ಗಂಟೆಗೆ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಬಗ್ಗೆ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಮಾಹಿತಿ ನೀಡುವಂತೆ ನಗರಸಭೆಯ ಪೌರಾಯುಕ್ತರಿಗೆ ಸೂಚನೆ ನೀಡಲಾಯಿತು. ಶಿವಾಜಿ ಜಯಂತಿ ಕಾರ್ಯಕ್ರಮ ಸರ್ಕಾರಿ ಕಾರ್ಯಕ್ರಮ ಆಗಿರುವುದರಿಂದ, ಅಂದು ಎಲ್ಲ ಶಾಲೆಗಳಲ್ಲಿ, ಗ್ರಾಮ ಪಂಚಾಯತಿಗಳಲ್ಲಿ ಕಡ್ಡಾಯವಾಗಿ ಶಿವಾಜಿ ಜಯಂತಿ ಕಾರ್ಯಕ್ರಮ ಆಯೋಜಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
  ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರಪ್ಪ ಚೋರನೂರ, ಆಹಾರ ಇಲಾಖೆ ಉಪನಿರ್ದೇಶಕ ಜಯಪ್ಪ, ಜಿಲ್ಲಾ ನೋಂದಣಾಧಿಕಾರಿ ಅಶೋಕ್, ನಗರಾಭಿವೃದ್ಧಿ ಕೋಶದ ಅಧಿಕಾರಿ ಶಂಕ್ರಪ್ಪ, ತಹಸಿಲ್ದಾರ್ ಚಂದ್ರಕಾಂತ್, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶಿವಾನಂದ ಹೊದ್ಲೂರ್, ಸಮಾಜದ ಮುಖಂಡರುಗಳಾದ ಮಾರುತಿ ನಿಕ್ಕಂ, ಫಕೀರಪ್ಪ ಆರೇರ, ಹನುಮಂತಪ್ಪ ಬೂದಗುಂಪಿ, ನಾಮದೇವ ಜಕ್ಕಲಿ, ಸುಭಾಷ್ ಕಂಪ್ಲಿ, ಪ್ರಕಾಶ್ ಆರೇರ್,  ಕನಕಪ್ಪ ಜಕ್ಕಲಿ, ಈಶಪ್ಪ ಅರಕೇರಿ, ಜೀವಣ್ಣ ಆರೇರ, ಮುಂತಾದ ಗಣ್ಯರು ಭಾಗವಹಿಸಿ ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಿದರು.
Please follow and like us:
error

Leave a Reply

error: Content is protected !!