fbpx

ದಕ್ಷತೆಯಿಂದ ಚುನಾವಣಾ ಕರ್ತವ್ಯ ನಿರ್ವಹಿಸಲು ಡಿಸಿ ಕರೆ- ಲೋಕಸಭೆ ಚುನಾವಣೆಗೆ ಜಿಲ್ಲಾಡಳಿತ ಸಜ್ಜು

 ಲೋಕಸಭಾ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಿದ್ದು, ಎಲ್ಲ ಅಧಿಕಾರಿ, ಸಿಬ್ಬಂದಿಗಳು ದಕ್ಷತೆಯಿಂದ ಹಾಗೂ ಪ್ರಾಮಾಣಿಕವಾಗಿ ಚುನಾವಣಾ ಕರ್ತವ್ಯವನ್ನು ನಿರ್ವಹಿಸಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್ ಅವರು ಕರೆ ನೀಡಿದರು.
  ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಲೋಕಸಭಾ ಚುನಾವಣೆ ಸಿದ್ಧತೆ ಕುರಿತಂತೆ ಶನಿವಾರ ಏರ್ಪಡಿಸಲಾಗಿದ್ದ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
  ಕಳೆದ ವರ್ಷ ರಾಜ್ಯದಲ್ಲಿ ಜರುಗಿದ ವಿಧಾನಸಭೆ ಸಾರ್ವತ್ರಿಕ ಚುನಾವಣೆಯನ್ನು ಅತ್ಯಂತ ಯಶಸ್ವಿಯಾಗಿ ನಡೆಸಿದ್ದು, ಈ ಸಂದರ್ಭದಲ್ಲಿ ಚುನಾವಣಾ ಆಯೋಗ ಪ್ರಾಯೋಗಿಕವಾಗಿ ಅಳವಡಿಸಿದ್ದ ವಿವಿಧ ಚುನಾವಣಾ ವಿಧಾನ ಹಾಗೂ ಕ್ರಮಗಳು ಯಶಸ್ವಿಗೊಂಡ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗ ದೇಶಾದ್ಯಂತ ಬಹುತೇಕ ಇದೇ ವಿಧಾನವನ್ನು ಅನುಸರಿಸುತ್ತಿದೆ ಎಂದರು.
ತಂಡಗಳ ರಚನೆ : ಚುನಾವಣೆಯು ಒಂದೇ ಹಂತದಲ್ಲಿ ಅಂದರೆ ರಾಜ್ಯಾದ್ಯಂತ ಏ. ೧೭ ರಂದೇ ಮತದಾನ ನಡೆಯುವುದರಿಂದ, ತ್ವರಿತವಾಗಿ ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇ

ಕಿದೆ. ಫ್ಲೈಯಿಂಗ್ ಸ್ಕ್ವಾಡ್, ಸೆಕ್ಟರ್ ಅಧಿಕಾರಿಗಳ ತಂಡ ರಚನೆ, ವಿಡಿಯೋ ಸರ್ವೆಲೆನ್ಸ್ ತಂಡ, ವಿಡಿಯೋ ವೀಕ್ಷಕ ತಂಡ, ಮಾಧ್ಯಮ ನಿರ್ವಹಣೆ ಸಮಿತಿ, ಲೆಕ್ಕ ಪರಿಶೋಧನೆ ತಂಡ, ಮತದಾರರ ಜಾಗೃತಿಗಾಗಿ ಸ್ವೀಪ್ ಅಭಿಯಾನ ಮುಂತಾದ ಕ್ರಮಗಳನ್ನೇ ಇದೀಗ ಲೋಕಸಭೆ ಚುನಾವಣೆಗೆ ಅಳವಡಿಸಲಾಗಿದೆ.  ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣೆಗಾಗಿ ಈ ಎಲ್ಲ ತಂಡಗಳ ರಚನೆಗೆ ಈಗಾಗಲೆ ಕ್ರಮ ಕೈಗೊಳ್ಳಲಾಗಿದ್ದು, ಮಾ. ೧೦ ರೊಳಗೆ ತಂಡಗಳ ರಚನೆ, ಅಧಿಕಾರಿ, ಸಿಬ್ಬಂದಿಗಳ ನೇಮಕ ಪ್ರಕ್ರಿಯೆ ಪೂರ್ಣಗೊಂಡು, ಮಾ. ೧೧ ರಿಂದಲೇ ಎಲ್ಲ ತಂಡಗಳು ಸಕ್ರಿಯವಾಗಿ ಚುನಾವಣೆ ಕರ್ತವ್ಯದಲ್ಲಿ ತೊಡಗಿಸಿಕೊಳ್ಳಬೇಕಿದೆ.

ಅಕ್ರಮಕ್ಕೆ ಕಡಿವಾಣ : ಚುನಾವಣೆ ಸಂದರ್ಭದಲ್ಲಿ ಅಕ್ರಮ ಹಣ, ಮದ್ಯ, ಸಾಮಗ್ರಿ ಇತ್ಯಾದಿಗಳ ಸಾಗಣೆ ನಡೆಯುವ ಸಾಧ್ಯತೆಗಳಿರುವುದರಿಂದ, ಇದನ್ನು ತಡೆಗಟ್ಟಲು, ಈಗಾಗಲೆ ಜಿಲ್ಲೆಯಲ್ಲಿ ೯ ಕಡೆಗಳಲ್ಲಿ ಚೆಕ್‌ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ.  ಪರಿಸ್ಥಿತಿಗೆ ಅನುಗುಣವಾಗಿ ಹೆಚ್ಚಿನ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಲಾಗುವುದು.  ಪ್ರತಿ ೧೦ ರಿಂದ ೧೨ ಮತಗಟ್ಟೆಗಳಿಗೆ ಒಬ್ಬರಂತೆ ಜಿಲ್ಲೆಯ ೧೧೯೨ ಮತಗಟ್ಟೆಗಳಿಗೆ ಒಟ್ಟು ೯೯ ಸೆಕ್ಟರ್ ಅಧಿಕಾರಿಗಳನ್ನು ನೇಮಿಸಲಾಗುವುದು.  
ಕಂಟ್ರೋಲ್ ರೂಂ: ಈಗಾಗಲೆ ಚುನಾವಣೆಗೆ ಸಂಬಂಧಿಸಿದಂತೆ ಕಂಟ್ರೋಲ್ ರೂಂ ಸ್ಥಾಪಿಸಲಾಗಿದ್ದು, (ದೂರವಾಣಿ ಸಂ: ೦೮೫೩೯-೨೨೫೦೦೨) ಇಲ್ಲಿ ಚುನಾವಣೆಗೆ ಸಂಬಂಧಿತ ಎಲ್ಲ ದೂರುಗಳನ್ನು ಸ್ವೀಕರಿಸಿ, ಅವುಗಳನ್ನು ರಜಿಸ್ಟರ್‌ನಲ್ಲಿ ನಮೂದಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು.  ಇದು ದಿನದ ೨೪ ಗಂಟೆಗಳೂ ಕಾರ್ಯ ನಿರ್ವಹಿಸಲಿದೆ.

ನೋಟ ಬಟನ್ :

ಚುನಾವಣೆ ಇತಿಹಾಸದಲ್ಲಿ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಮತದಾನ ಪ್ರಕ್ರಿಯೆಯಲ್ಲಿ ನೂತನ ವ್ಯವಸ್ಥೆಯನ್ನು ಆಯೋಗ ಜಾರಿಗೆ ತಂದಿದ್ದು, ಈ ಬಾರಿ ’‘NOTA’ (None of the Above) ಆಯ್ಕೆಯ ಬಟನ್ ಅನ್ನು ವಿದ್ಯುನ್ಮಾನ ಮತಯಂತ್ರದಲ್ಲಿ ಅಳವಡಿಸಲಾಗುತ್ತಿದೆ.  ಚುನಾವಣೆಯ ಪ್ರತಿಯೊಂದು ಪ್ರಕ್ರಿಯೆಗಳು ಸಹ ಭಾರತೀಯ ಚುನಾವಣಾ ಆಯೋಗದ ನಿರ್ದೇಶನಗಳಂತೆ ನಡೆಸಲಾಗುತ್ತಿದೆ ಎಂದರು.

ರಜೆ ಇಲ್ಲ : ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಯಾವುದೇ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳಿಗೆ ಯಾವುದೇ ರಜೆ ಮಂಜೂರು ಮಾಡುವಂತಿಲ್ಲ.  ಅಲ್ಲದೆ ಅಧಿಕಾರಿ, ಸಿಬ್ಬಂದಿಗಳು ಜಿಲ್ಲಾಧಿಕಾರಿಗಳ ಅನುಮತಿ ಇಲ್ಲದೆ ಕೇಂದ್ರಸ್ಥಾನ ಬಿಡುವಂತಿಲ್ಲ.  ಚುನಾವಣಾ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು.  ಅಧಿಕಾರಿಗಳು ದಕ್ಷತೆಯಿಂದ, ಪ್ರಾಮಾಣಿಕತೆಯಿಂದ ತಮಗೆ ಒಪ್ಪಿಸಿದ ಜವಾಬ್ದಾರಿಯನ್ನು ಚಾಚೂತಪ್ಪದೆ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್ ಅವರು ಕರೆ ನೀಡಿದರು.
  ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರೋಹಿಣಿ ಸೆಪಟ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೆ ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಚೆಕ್‌ಪೋಸ್ಟ್ ಗಳಿಗೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.  ಆಯೋಗದ ನಿರ್ದೇಶನದಂತೆ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದೆ.  ಕಳೆದ ಚುನಾವಣೆ ಸಂದರ್ಭದಲ್ಲಿನ ಚಟುವಟಿಕೆಗಳು, ಮರುಮತದಾನ, ಗಲಾಟೆ, ದಾಂಧಲೆ, ಮತದಾನದ ಪ್ರಮಾಣ ಮುಂತಾದ ಅಂಶಗಳನ್ನು ಅವಲೋಕಿಸಿ, ಮತಗಟ್ಟೆಗಳನ್ನು ಗುರುತಿಸಲಾಗುವುದು.  ನಂತರ ಇದರ ಆಧಾರದ ಮೇಲೆ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ನಿರ್ಧರಿಸಲಾಗುವುದು.  ಜಿಲ್ಲೆಯಲ್ಲಿ ಗುಳೇ ಹೋಗುವ ಪ್ರಮಾಣ ಹೆಚ್ಚಾಗಿದ್ದು, ಇಂತಹ ಕುಟುಂಬಗಳ ಮತದಾರರ ಹೆಸರಿನಲ್ಲಿ ಅಕ್ರಮವಾಗಿ ಮತ ಚಲಾವಣೆ ಆಗುವ ಸಾಧ್ಯತೆ ಇರುವುದರಿಂದ, ಇದರ ಬಗ್ಗೆಯೂ ಹೆಚ್ಚಿನ ನಿಗಾ ವಹಿಸಲಾಗುವುದು.  ಪೊಲೀಸ್ ಅಧಿಕಾರಿಗಳು ಸಹ ದಕ್ಷತೆಯಿಂದ ಚುನಾವಣೆ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
  ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ಮಾದರಿ ಚುನಾವಣಾ ನೀತಿ ಸಂಹಿತೆಯ ಬಗ್ಗೆ ಅಧಿಕಾರಿಗಳಿಗೆ ಸಮಗ್ರ ವಿವರಣೆ ನೀಡಿದರು.
  ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ ಉದಪುಡಿ, ಸಹಾಯಕ ಆಯುಕ್ತ ಮಂಜುನಾಥ್ ಸೇರಿದಂತೆ ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ತಹಸಿಲ್ದಾರರು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು, ಡಿವೈಎಸ್‌ಪಿ ಗಳು, ಪೊಲೀಸ್ ಇನ್ಸ್‌ಪೆಕ್ಟರ್‌ಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
Please follow and like us:
error

Leave a Reply

error: Content is protected !!