ಫೆ. ೧೯ ರಂದು ವಿಜೃಂಭಣೆಯಿಂದ ಶಿವಾಜಿ ಹಾಗೂ ಸರ್ವಜ್ಞ ಜಯಂತಿ ಆಚರಣೆ

 ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಹಾಗೂ ತ್ರಿಪದಿ ಕವಿ ಸರ್ವಜ್ಞ ಅವರ ಜಯಂತಿ ಆಚರಣೆಯನ್ನು  ಸರ್ಕಾರಿ ಕಾರ್ಯಕ್ರಮವನ್ನಾಗಿ ಫೆ. ೧೯ ರಂದು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ಹೇಳಿದರು.
  ಶಿವಾಜಿ ಹಾಗೂ ಕವಿ ಸರ್ವಜ್ಞರ ಜಯಂತಿ ಆಚರಣೆ ಕುರಿತು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
  ಭಾರತದಲ್ಲಿ ಸ್ವರಾಜ್ಯದ ಕಲ್ಪನೆಯನ್ನು ಹುಟ್ಟುಹಾಕಿದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಹಾಗೂ ಇದೇ ವರ್ಷದಿಂದ ಮೊದಲ ಬಾರಿಗೆ ತ್ರಿಪದಿ ಕವಿ ಸರ್ವಜ್ಞ ಅವರ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲಾಗುತ್ತಿದ್ದು, ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಫೆ. ೧೯ ರಂದು ಜಿಲ್ಲಾ ಕೇಂದ್ರದಲ್ಲಿ ಆಚರಿಸಲಾಗುವುದು.  ಶಿವಾಜಿ ಹಾಗೂ ಸರ್ವಜ್ಞರ ಜಯಂತಿಯ ಅಂಗವಾಗಿ ಅಂದು ಬೆಳಿಗ್ಗೆ ೯-೩೦ ಗಂಟೆಗೆ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಸಮಾರಂಭ ಜರುಗಲಿದ್ದು,  ಛತ್ರಪತಿ ಶಿವಾಜಿ ಮಹಾರಾಜರು ಹಾಗೂ ಕವಿ ಸರ್ವಜ್ಞರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು.  ಛತ್ರಪತಿ ಶಿವಾಜಿ ಮಹಾರಾಜರ ಕುರಿತಂತೆ ಕೊಪ್ಪಳದ ನಿವೃತ್ತ ಪ್ರಾಚಾರ್ಯ ಅಲ್ಲಮಪ್ರಭು ಬೆಟ್ಟದೂರ ಅವರನ್ನು ವಿಶೇಷ ಉಪನ್ಯಾಸ ನೀಡಲು ಆಹ್ವಾನಿಸಲಾಗುವುದು.  ಸಮಾರಂಭದ ನಂತರ ಸಾಹಿತ್ಯ ಭವನದಿಂದ ಉಭಯ ಮಹನೀಯರ ಭಾವಚಿತ್ರದೊಂದಿಗೆ ಮೆರವಣಿಗೆಯನ್ನು ಪ್ರಾರಂಭಿಸಿ, ಜವಾಹರ ರಸ್ತೆ, ಗಡಿಯಾರ ಕಂಬ ಮೂಲಕ ತುಳಜಾಭವಾನಿ ದೇವಸ್ಥಾನದವರೆಗೆ ಮೆರವಣಿಗೆ ನಡೆಸಲಾಗುವುದು.  ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಭಾಗವಹಿಸಿ, ಮೆರವಣಿಗೆಯನ್ನು ಆಕರ್ಷಕಗೊಳಿಸಲಿವೆ. ಹಲವು ಮಹನೀಯರ ಜಯಂತಿ ಕಾರ್ಯಕ್ರಮಗಳಿಗೆ ಸರ್ಕಾರಿ ರಜೆ ಇಲ್ಲದಿರುವುದರಿಂದ, ಮೆರವಣಿಗೆ ಹಾಗೂ ಸಮಾರಂಭದಲ್ಲಿ ಪಾಲ್ಗೊಂಡು, ನಂತರ ಕಚೇರಿಗೆ ಹಾಜರಾಗಲು ವಿಳಂಬವಾಗುತ್ತಿದ್ದು, ಕಚೇರಿ ಕೆಲಸ ಕಾರ್ಯಗಳಿಗೆ ತೊಂದರೆ ಉಂಟಾಗುತ್ತಿದೆ.  ಈ ಹಿನ್ನೆಲೆಯಲ್ಲಿ ಇನ್ನು ಮುಂದೆ ಜಿಲ್ಲಾ ಕೇಂದ್ರದಲ್ಲಿ ಆಚರಿಸಲಾಗುವ ಎಲ್ಲ ಜಯಂತಿ ಕಾರ್ಯಕ್ರಮಗಳಲ್ಲಿ ಬೆಳಿಗ್ಗೆ ೯-೩೦ ಗಂಟೆಗೆ ಸಾಹಿತ್ಯ ಭವನದಲ್ಲಿ ಸಮಾರಂಭ ಏರ್ಪಡಿಸಿ, ಸಮಾರಂಭದ ನಂತರ ಸಾಹಿತ್ಯ ಭವನದಿಂದ ಮೆರವಣಿಗೆ ಪ್ರಾರಂಭಿಸಲಾಗುವುದು.  ಎಲ್ಲ ಅಧಿಕಾರಿಗಳು ಸಮಾರಂಭದಲ್ಲಿ ಕಡ್ಡಾಯವಾಗಿ ಪಾಲ್ಗೊಂಡು, ನಂತರ ಕಚೇರಿ ಕರ್ತವ್ಯಕ್ಕೆ ಎಂದಿನಂತೆ ಹಾಜರಾಗಬೇಕು  ಎಂದು ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
  ಶಿವಾಜಿ ಹಾಗೂ ಸರ್ವಜ್ಞರ ಜಯಂತಿಯಂದು, ಮೆರವಣಿಗೆ ಸಾಗಿ ಬರುವ ಮಾರ್ಗದ ರಸ್ತೆಗಳನ್ನು ಸ್ವಚ್ಛಗೊಳಿಸಬೇಕು.  ಮೆರವಣಿಗೆಯಲ್ಲಿ ಪಾಲ್ಗೊಳ್ಳುವವರಿಗೆ ಹಾಗೂ ಸಾಹಿತ್ಯ ಭವನದಲ್ಲಿ ಸಾಕಷ್ಟು ಕುಡಿಯುವ ನೀರಿನ ವ್ಯವಸ್ಥೆಗೊಳಿಸಬೇಕು.   ಎಂದು ಅಪರ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
  ಕವಿ ಸರ್ವಜ್ಞರ ಕುರಿತು ವಿಶೇಷ ಉಪನ್ಯಾಸ ನೀಡಲು ಸೂಕ್ತ ಸಂಪನ್ಮೂಲ ವ್ಯಕ್ತಿಯನ್ನು ಆಯ್ಕೆಗೊಳಿಸಿ, ಆಹ್ವಾನಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಟಿ. ಕೊಟ್ರಪ್ಪ ಅವರಿಗೆ ಸೂಚನೆ ನೀಡಲಾಯಿತು.
  ಸಭೆಯಲ್ಲಿ  ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ  ವಿವಿಧ ಸಮಾಜಗಳ ಮುಖಂಡರುಗಳಾದ ಶಿವಾನಂದ ಹೊದ್ಲೂರ್, ಮಾರುತಿ ನಿಕ್ಕಂ, ನಾಗೇಶ ಬಡಿಗೇರ, ಗವಿಸಿದ್ದಪ್ಪ ಪವಾರ್, ವಿಷ್ಣು ಕಾರಟಗಿ, ಹನುಮಂತು, ನಾಗರಾಜ ಗೋಪಾಳಿ, ಮಲ್ಲಪ್ಪ ಮುರಡಿ ಮುಂತಾದ ಗಣ್ಯರು ಭಾಗವಹಿಸಿ ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಿದರು.
Please follow and like us:
error