You are here
Home > Koppal News > ಕೊಪ್ಪಳದಲ್ಲಿ ಬೃಹತ್ ಉದ್ಯೋಗಮೇಳ ಆಯೋಜಿಸಲು ಕಾರ್ಮಿಕ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಸೂಚನೆ

ಕೊಪ್ಪಳದಲ್ಲಿ ಬೃಹತ್ ಉದ್ಯೋಗಮೇಳ ಆಯೋಜಿಸಲು ಕಾರ್ಮಿಕ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಸೂಚನೆ

 ಕೊಪ್ಪಳ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬೃಹತ್ ಕಾರ್ಖಾನೆಗಳಿದ್ದು, ಇಲ್ಲಿನ ಸ್ಥಳಿಕರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಬರುವ ಜನವರಿ ತಿಂಗಳಿನಲ್ಲಿ ಆಯೋಜಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ರಾಜ್ಯ ಕಾರ್ಮಿಕ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
  ಕೊಪ್ಪಳ ಜಿಲ್ಲೆಯೂ ಸೇರಿದಂತೆ ನೆರೆಹೊರೆಯ ಜಿಲ್ಲೆಗಳಲ್ಲಿ ಬೃಹತ್ ಕೈಗಾರಿಕೆಗಳು ಕಾರ್ಯ ನಿರ್ವಹಿಸುತ್ತಿವೆ.  ಇಂತಹ ಕಾರ್ಖಾನೆಗಳಲ್ಲಿ ಸ್ಥಳಿಕರಿಗೆ ಹೆಚ್ಚಿನ ಉದ್ಯೋಗ ಅವಕಾಶ ಕಲ್ಪಿಸುವುದು ಅಗತ್ಯವಾಗಿದೆ.  ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ವಿವಿಧ ವಿಷಯಗಳಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು, ತರಬೇತಿ ಕೋರ್ಸ್‌ಗೆ ಅನುಗುಣವಾಗಿ ಕಾರ್ಖಾನೆಗಳಲ್ಲಿ ಉದ್ಯೋಗಾವಕಾಶಗಳು ಇರುತ್ತವೆ.  ಕಾರ್ಮಿಕ ಇಲಾಖೆ ಅಧಿಕಾರಿಗಳು ಇಂತಹ ಕೈಗಾರಿಕೆ ಕಂಪನಿಗಳೊಂದಿಗೆ ಸಮಾಲೋಚಿಸಿ, ಬರುವ ಜನವರಿ ತಿಂಗಳಿನಲ್ಲಿ ಕೊಪ್ಪಳದಲ್ಲಿಯೇ ಬೃಹತ್ ಉದ್ಯೋಗ ಮೇಳ ಆಯೋಜಿಸಿ, ಸ್ಥಳಿಕರಿಗೆ ಹೆಚ್ಚಿನ ಉದ್ಯೋಗ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
ಕಟ್ಟಡ ಕಾರ್ಮಿಕರ ನೋಂದಣಿ : ಜಿಲ್ಲೆಯಲ್ಲಿ ಕಟ್ಟಡ ಕಾರ್ಮಿಕರ ನೋಂದಣಿ ಸಮರ್ಪಕವಾಗಿ ನಡೆಯುತ್ತಿಲ್ಲ.  ಕಟ್ಟಡ ಕಾರ್ಮಿಕರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಅಕ್ರಮವಾಗಿ ಪಡೆಯಲು ಕಾರ್ಮಿಕರಲ್ಲದವರೂ ಸಹ ನೋಂದಣಿ ಮಾಡಿಸುತ್ತಿರುವುದಾಗಿ ದೂರುಗಳು ಕೇಳಿಬರುತ್ತಿವೆ.  ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ಕಾರ್ಮಿಕರ ನೋಂದಣಿ ಮಾಡುತ್ತಿರುವುದರಿಂದ ಇಂತಹ ಅಕ್ರಮ ನಡೆಸಲು ಸಾಧ್ಯವಾಗುತ್ತಿವೆ.  ಇದನ್ನು ತಡೆಗಟ್ಟಲು, ಅಧಿಕಾರಿಗಳು ಕಟ್ಟಡ ಕಾಮಗಾರಿ ನಡೆಯುತ್ತಿರುವ ಸ್ಥಳಗಳಿಗೆ ತೆರಳಿ, ಅರ್ಹ ಕಾರ್ಮಿಕರ ನೋಂದಣಿ ಮಾಡಿಕೊಳ್ಳಲು ಸ್ಥಳೀಯ ಜನಪ್ರತಿನಿಧಿಗಳನ್ನು ತೊಡಗಿಸಿಕೊಂಡು, ನೋಂದಣಿ ಮೇಳ ಆಯೋಜಿಸಬೇಕು.  ಅಲ್ಲದೆ ಅರ್ಹರಿಗೆ ಗುರುತಿನ ಚೀಟಿಯನ್ನು ಸಮರ್ಪಕವಾಗಿ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು.  ಇದುವರೆಗೂ ಜಿಲ್ಲೆಯಲ್ಲಿ ಕೇವಲ ೧೧೫೯೪ ಕಾರ್ಮಿಕರ ನೋಂದಣಿ ಆಗಿದ್ದು, ನಿಗದಿತ ಗುರಿ ಸಾಧನೆ ಆಗಿಲ್ಲ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.
ರಾಷ್ಟ್ರೀಯ ಸ್ವಾಸ್ಥ್ಯ ಬೀಮಾ ಯೋಜನೆ : ಜಿಲ್ಲೆಯಲ್ಲಿ ೨. ೫ ಲಕ್ಷ ಬಿಪಿಎಲ್ ಕುಟುಂಬಗಳಿದ್ದು, ರಾಷ್ಟ್ರೀಯ ಸ್ವಾಸ್ಥ್ಯ ಬೀಮಾ ಯೋಜನೆಯಡಿ ಇವರಿಗೆ ಸರ್ಕಾರದಿಂದ ಉಚಿತ ವೈದ್ಯಕೀಯ ಸೌಲಭ್ಯ ದೊರೆಯಲು ಅವಕಾಶವಿದೆ.  ಆದರೆ ಜಿಲ್ಲೆಯಲ್ಲಿ ಬೀಡಿ ಕಾರ್ಮಿಕರು, ಗೃಹಕೃತ್ಯ ಕಾರ್ಮಿಕರು ಸೇರಿದಂತೆ ವಿವಿಧ ಕಾರ್ಮಿಕರು ಇಲ್ಲ ಎಂಬುದಾಗಿ ಅಧಿಕಾರಿಗಳು ತಪ್ಪು ವರದಿ ನೀಡಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಚಿವರು.  ಸರ್ಕಾರ ಈ ವರ್ಷ ೨೩೦ ಕೋಟಿ ಹೆಚ್ಚುವರಿ ಅನುದಾನ ನೀಡಿ, ಬಿಪಿಎಲ್ ಕುಟುಂಬಗಳೂ ಸೇರಿದಂತೆ ಇತರೆ ಕಾರ್ಮಿಕರನ್ನೂ ಸಹ ಯೋಜನೆಯ ವ್ಯಾಪ್ತಿಗೆ ಸೇರಿಸಿದ್ದು, ಅರ್ಹ ಫಲಾನುಭವಿಗಳನ್ನು ಗುರುತಿಸುವ ಕಾರ್ಯ ಸಮರ್ಪಕವಾಗಿ ನಡೆದಿಲ್ಲ.  ಬರುವ ಜನವರಿ ಅಂತ್ಯದೊಳಗೆ ಈ ಕುರಿತು ಸಮರ್ಪಕ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರೈಸ್ ಮಿಲ್ ಕಾರ್ಮಿಕರಿಗೂ ಇಎಸ್‌ಐ ಸೌಲಭ್ಯ : ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈಸ್ ಮಿಲ್‌ಗಳಿದ್ದು, ಇಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರನ್ನು ಇದುವರೆಗೂ ಇಎಸ್‌ಐ ಸೌಲಭ್ಯದ ವ್ಯಾಪ್ತಿಗೆ ಒಳಪಡಿಸದಿರುವುದರಿಂದ, ಕಾರ್ಮಿಕರು ಸರ್ಕಾರದ ಸೌಲಭ್ಯದಿಂದ ವಂಚಿತರಾಗುವಂತಾಗಿದೆ.  ಕೂಡಲೆ ಈ ಭಾಗದ ಎಲ್ಲ ರೈಸ್ ಮಿಲ್‌ಗಳಲ್ಲಿನ ಕಾರ್ಮಿಕರ ಬಗ್ಗೆ ಸಮೀಕ್ಷೆ ನಡೆಸಿ, ಅರ್ಹರಿಗೆ ಇಎಸ್‌ಐ ಸೌಲಭ್ಯ ದೊರೆಕಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
         ಸಭೆಯಲ್ಲಿ ಭಾಗವಹಿಸಿದ್ದ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಮಾತನಾಡಿ, ಕೊಪ್ಪಳ ವಿಧಾನಸಭಾ ಕ್ಷೇತ್ರವೊಂದರಲ್ಲೇ ಸುಮಾರು ೭೫೦೦ ಕ್ಕೂ ಹೆಚ್ಚು ಕಾರ್ಮಿಕರಿದ್ದಾರೆ.  ಆದರೆ ಅವರಿಗೆ ಸರ್ಕಾರದ ಸೌಲಭ್ಯಗಳ ಬಗ್ಗೆ ಮಾಹಿತಿ ಇಲ್ಲದಿರುವುದರಿಂದ, ಕಾರ್ಮಿಕ ಇಲಾಖೆಯವರು ಈ ನಿಟ್ಟಿನಲ್ಲಿ ಸರ್ಕಾರದ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕು ಎಂದು ತಿಳಿಸಿದರು.
         ಸಭೆಯಲ್ಲಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಅಮರೇಶ್ ಕುಳಗಿ, ಜಿಲ್ಲಾಧಿಕಾರಿ ಆರ್.ಆರ್. ಜನ್ನು, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಟಿ.ಡಿ. ಪವಾರ್, ಉದ್ಯೋಗ ಮತ್ತು ತರಬೇತಿ ಇಲಾಖೆ ಅಪರ ನಿರ್ದೇಶಕ ಈಶ್ವರನಾಯ್ಕ್, ಗುಲಬರ್ಗಾ ಉಪ ಕಾರ್ಮಿಕ ಆಯುಕ್ತ ಚಿದಾನಂದ, ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆ ಉಪನಿರ್ದೇಶಕ ಶ್ರೀನಿವಾಸ, ಜಿಲ್ಲಾ ಕಾರ್ಮಿಕ ಅಧಿಕಾರಿ ಶಿವಕುಮಾರ ಸೇರಿದಂತೆ ವಿವಿಧ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Top