You are here
Home > Koppal News > ಲೈಂಗಿಕ ದೌರ್ಜನ್ಯ ಪ್ರಕರಣಗಳ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯ : ಡಾ: ಟಿ.ಡಿ.ಪವಾರ್

ಲೈಂಗಿಕ ದೌರ್ಜನ್ಯ ಪ್ರಕರಣಗಳ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯ : ಡಾ: ಟಿ.ಡಿ.ಪವಾರ್

  ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ ಎಂದು ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ: ಟಿ.ಡಿ. ಪವಾರ್ ಅವರು ಹೇಳಿದರು.
ನಗರದ ಸಾರ್ವಜನಿಕ ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಸೋಮವಾರದಂದು ಏರ್ಪಡಿಸಲಾಗಿದ್ದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮಹಿಳೆಯರು ಮತ್ತು ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳ ಬಗ್ಗೆ ಇತ್ತೀಚೆಗೆ ಮಾಧ್ಯಮಗಳಲ್ಲಿ ಹೆಚ್ಚಾಗಿ ವರದಿಯಾಗುತ್ತಿದ್ದು, ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಜರುಗದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು ವ್ಯಾಪಕ ಕ್ರಮ ಕೈಗೊಳ್ಳುತ್ತಿದ್ದಾರೆ.  ಶಾಲೆಗಳಲ್ಲಿ ಇಂತಹ ಪ್ರಕರಣಗಳು ಜರುಗದಂತೆ ಹಲವು ಮಾರ್ಗಸೂಚಿಗಳನ್ನು ಸರ್ಕಾರ ಹೊರಡಿಸಿದ್ದು, ಇಂತಹ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.  ಪ್ರಕರಣಗಳನ್ನು ತಡೆಗಟ್ಟಲು ಶಾಲಾ ಶಿಕ್ಷಕರ ಪಾತ್ರವೂ ಅತ್ಯಂತ ಮಹತ್ವದ್ದಾಗಿದೆ.  ಕಳ್ಳತನ, ದರೋಡೆ, ಕೊಲೆ, ಮಹಿಳೆಯರ ಮೇಲಿನ ದೌರ್ಜನ್ಯ ಇತ್ಯಾದಿ ಅಪರಾಧಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಪೊಲೀಸ್ ಠಾಣೆಗೆ ಸೂಕ್ತ ಮಾಹಿತಿ ನೀಡಿದರೆ ಅಪರಾಧ ಪ್ರಕರಣಗಳನ್ನು ತಡೆಗಟ್ಟಬಹುದಾಗಿದೆ.  ಜನರಲ್ಲಿ ಈ ಕುರಿತು ಜಾಗೃತಿ ಮೂಡಿಸಲು ಜಿಲ್ಲೆಯಲ್ಲಿ ಡಿ.೦೧ ರಿಂದ ೩೧ ರವರೆಗೆ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ: ಟಿ.ಡಿ.ಪವಾರ್ ಹೇಳಿದರು. 
  ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ಹಸಿರು ನಿಶಾನೆ ತೋರಿಸುವುದು ಮೂಲಕ ಸಾರ್ವಜನಿಕ ಮೈದಾನದಲ್ಲಿ ಅಪರಾಧ ತಡೆ ಮಾಸಾಚರಣೆ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು. ಅಪರಾಧ ತಡೆಯುವ ಕುರಿತು ಸಾರ್ವಜನಿಕರಿಗೆ ಹಾಗೂ ಶಾಲಾ, ಕಾಲೇಜು ಮಕ್ಕಳಿಗೆ, ವೃದ್ದರಿಗೆ ಸಲಹೆ ಸೂಚನೆ ನೀಡುವ ಜಾಗೃತಿ ಫಲಕಗಳನ್ನು ಹಿಡಿದುಕೊಂಡು ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ನಗರದ ಅಶೋಕ ಸರ್ಕಲ್, ಜವಾಹರ ರಸ್ತೆ, ಗಡಿಯಾರ ಕಂಬ, ಗವಿಮಠ, ಬಸವೇಶ್ವರ ಸರ್ಕಲ್ ಮಾರ್ಗವಾಗಿ ಸಾರ್ವಜನಿಕ ಮೈದಾನದವರೆಗೆ ಜಾಗೃತಿ ಜಾಥಾ ನಡೆಸಿದರು. ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ಡಾ|| ವಿ.ಬಿ.ರಡ್ಡೇರ್, ಎಸ್.ಬಿ.ರಾಜೂರು, ಡಿವೈಎಸ್‌ಪಿಗಳಾದ ರಾಜೀವ್, ವಿಶ್ವನಾಥ ಹಿರೇಗೌಡರ ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.

Leave a Reply

Top