ಅಂಗನವಾಡಿಗೆ ಶೌಚಾಲಯ ಕಡ್ಡಾಯ, ಅಡ್ಡಿಗಳಿದ್ದಲ್ಲಿ ನಿವಾರಿಸಿ ಉಮಾಶ್ರೀ ಸೂಚನೆ

ಕೊಪ್ಪಳ ಏ. ೨೯ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯ ಇರುವುದು ಕಡ್ಡಾಯವಾಗಿದ್ದು, ನಗರ ಅಥವಾ ಗ್ರಾಮೀಣ ಪ್ರದೇಶಗಳಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯ ನಿರ್ಮಿಸಲು, ಯಾವುದೇ ಅಡ್ಡಿಗಳು ಬಂದಲ್ಲಿ, ಸ್ಥಳೀಯವಾಗಿ ಅದನ್ನು ನಿವಾರಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಉಮಾಶ್ರೀ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನೆಗಳ ಕುರಿತು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶುಕ್ರವಾರದಂದು ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ೧೮೦೩ ಅಂಗನವಾಡಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಈ ಪೈಕಿ ೧೧೦೫ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಇದೆ. ಇದುವರೆಗೂ ೫೯೭ ಅಂಗನವಾಡಿ ಕೇಂದ್ರಗಳಿಗೆ ಮಾತ್ರDSC_0399 ಶೌಚಾಲಯ ಸೌಲಭ್ಯ ಇದೆ. ಅಂಗನವಾಡಿ ಕೇಂದ್ರಗಳಿಗೆ ಶೌಚಾಲಯ ಇರುವುದು ಕಡ್ಡಾಯವಾಗಿದೆ ಎಂದು ಸಚಿವರಾದ ಉಮಾಶ್ರೀ ಅವರು ಪ್ರಶ್ನಿಸಿದರು. ಸಭೆಯಲ್ಲಿ ಉಪಸ್ಥಿತರಿದ್ದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಪ್ರತಿಕ್ರಿಯಿಸಿ, ಅಂಗನವಾಡಿ ಕೇಂದ್ರಗಳಿಗೆ ಶೌಚಾಲಯ ನಿರ್ಮಿಸಲು ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿಗಳ ಜನಪ್ರತಿನಿಧಿಗಳೇ ಅಡ್ಡಿಪಡಿಸುತ್ತಿದ್ದಾರೆ ಎಂದು ಸಚಿವರ ಗಮನಕ್ಕೆ ತಂದರು. ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್ ಅವರು, ಅಂಗನವಾಡಿ ಕೇಂದ್ರಗಳಿಗೆ ಶೌಚಾಲಯ ಇರುವುದು ಕಡ್ಡಾಯವಾಗಿದೆ. ಈ ಕುರಿತು ಯಾವುದೇ ಜನಪ್ರತಿನಿಧಿಗಳು, ಅಥವಾ ವ್ಯಕ್ತಿಗಳು ಅಡ್ಡಿಪಡಿಸಿದಲ್ಲಿ, ತಮ್ಮ ಗಮನಕ್ಕೆ ತರಬೇಕು. ಇಂತಹ ಸಮಸ್ಯೆಗಳು ಇರುವಂತಹ ಅಂಗನವಾಡಿ ಕೇಂದ್ರಗಳ ಪಟ್ಟಿಯನ್ನು ಒದಗಿಸುವಂತೆ ಸಿಡಿಪಿಓ ಗಳಿಗೆ ತಿಳಿಸಿದರು. ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯ ಇರುವುದು ಕಡ್ಡಾಯವಾಗಿದ್ದು, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಸ್ಥಳೀಯವಾಗಿ ಸಮಸ್ಯೆಯನ್ನು ಪರಿಹರಿಸುವಂತೆ ಸಚಿವರಾದ ಉಮಾಶ್ರೀ ಅವರು ಜಿ.ಪಂ. ಸಿಇಓ ಅವರಿಗೆ ಸೂಚನೆ ನೀಡಿದರು.
ತೀವ್ರ ಅಪೌಷ್ಠಿಕ ಮಕ್ಕಳ ಆರೋಗ್ಯ ಸುಧಾರಣೆ : ಜಿಲ್ಲೆಯಲ್ಲಿ ೨೦೧೩-೧೪ ನೇ ಸಾಲಿನಲ್ಲಿ ೩೦೧೯ ಮಕ್ಕಳನ್ನು ತೀವ್ರ ಅಪೌಷ್ಠಿಕ ಮಕ್ಕಳೆಂದು ಗುರುತಿಸಿ, ಅಂತಹ ಮಕ್ಕಳ ಆರೋಗ್ಯ ಸುಧಾರಣೆಗಾಗಿ ವಿಶೇಷ ಪೂರಕ ಪೌಷ್ಠಿಕ ಆಹಾರ ನೀಡುವಂತಹ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಆದಾಗ್ಯೂ ತೀವ್ರ ಅಪೌಷ್ಠಿಕ ಮಕ್ಕಳ ಸಂಖ್ಯೆ ೨೦೧೪-೧೫ ರಲ್ಲಿ ೨೨೮೫, ೨೦೧೬ ರ ಮಾರ್ಚ್ ತಿಂಗಳ ಅಂಕಿ-ಅಂಶದಂತೆ ೧೭೮೮ ಇದೆ. ತೀವ್ರ ಅಪೌಷ್ಠಿಕ ಮಕ್ಕಳ ಆರೋಗ್ಯ ಸುಧಾರಣೆಗಾಗಿ ಹಲವಾರು ಕ್ರಮಗಳನ್ನು ಕೈಗೊಂಡಿದ್ದರೂ, ನಿರೀಕ್ಷಿತ ಮಟ್ಟದಲ್ಲಿ ಸುಧಾರಣೆ ಕಂಡಿಲ್ಲ. ಜಿಲ್ಲೆಯಲ್ಲಿ ಅಪೌಷ್ಠಿಕ ಮಕ್ಕಳಿಗೆ ಮೊಟ್ಟೆ ವಿತರಿಸುವ ಯೋಜನೆ ಸಮರ್ಪಕವಾಗಿ ಜರುಗುತ್ತಿಲ್ಲ ಎಂಬ ದೂರುಗಳಿವೆ. ಇದರ ಬಗ್ಗೆ ಇಲಾಖಾ ಅಧಿಕಾರಿಗಳು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ, ಎಲ್ಲ ಮಕ್ಕಳ ಆರೋಗ್ಯ ಸುಧಾರಣೆ ಆಗುವಂತೆ ನೋಡಿಕೊಳ್ಳಬೇಕು ಎಂದು ಸಚಿವರು ಸೂಚನೆ ನೀಡಿದರು.
ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಜಿಲ್ಲೆಯಲ್ಲಿ ನಿವೃತ್ತಿ ಮೂಲಕ ಅಥವಾ ಇತರೆ ಕಾರಣಗಳಿಂದ ತೆರವಾಗುವ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ, ನಿಗದಿತ ಅವಧಿಯೊಳಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭ ಮಾಡದ ಕ್ರಮಕ್ಕೆ ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿ, ನಿವೃತ್ತಿಯಿಂದ ಅಥವಾ ಇತರೆ ಕಾರಣಗಳಿಂದ ತೆರವಾಗುವ ಕನಿಷ್ಟ ಒಂದು ತಿಂಗಳ ಮುನ್ನವೇ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿ, ತೆರವಾಗುವ ಹುದ್ದೆಗಳನ್ನು ತಕ್ಷಣವೇ ನೇಮಕ ಆದೇಶ ನೀಡುವಂತೆ ನಿಯಮವಿದೆ. ಆದರೆ ಜಿಲ್ಲೆಯಲ್ಲಿ ಸಿಡಿಪಿಓ ಗಳು ಇದನ್ನು ಸರಿಯಾಗಿ ಪಾಲಿಸುತ್ತಿಲ್ಲ. ಹೀಗಾಗಿ ಜಿಲ್ಲೆಯಲ್ಲಿ ವಿವಿಧೆಡೆ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳು ಖಾಲಿ ಉಳಿದು, ತೊಂದರೆಯಾಗುತ್ತಿದೆ. ಜಿಲ್ಲೆಯ ಎಲ್ಲ ಸಿಡಿಪಿಓ ಅವರೊಂದಿಗೆ ಸಭೆ ಕರೆದು, ಅಂಗನವಾಡಿ ಕಾರ್ಯಕರ್ತೆಯರ ನಿವೃತ್ತಿ, ನೇಮಕ ಸೇರಿದಂತೆ ಇತರೆ ವಿಷಯಗಳು ಹಾಗೂ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
ಅಂಗನವಾಡಿ ವಿದ್ಯುತ್ ಬಿಲ್ ಸಮಸ್ಯೆ : ಜಿಲ್ಲೆಯ ಹಲವು ಅಂಗನವಾಡಿ ಕೇಂದ್ರಗಳಿಗೆ ಈಗಾಗಲೆ ನೀರಿನ ವ್ಯವಸ್ಥೆಗಾಗಿ ಸಿಂಟೆಕ್ಸ್ ಟ್ಯಾಂಕ್‌ಗಳನ್ನು ಅಳವಡಿಸಿಸಲಾಗಿದೆ. ಅಲ್ಲದೆ ೮೯೬ ಅಂಗನವಾಡಿ ಕೇಂದ್ರಗಳಿಗೆ ಫ್ಯಾನ್ ಗಳನ್ನು ಅಳವಡಿಸಲಾಗಿದೆ. ಆದರೆ ೩೮೨ ಅಂಗನವಾಡಿ ಕೇಂದ್ರಗಳಿಗೆ ಮಾತ್ರ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು, ಕೆಲವು ಅಂಗನವಾಡಿ ಕೇಂದ್ರಗಳಲ್ಲಿ, ಗ್ರಾ.ಪಂ. ನವರು ವಿದ್ಯುತ್ ಬಿಲ್ ಪಾವತಿಸಿಲ್ಲ ಎಂದು, ಜೆಸ್ಕಾಂ ನವರು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ ಎಂದು ಸಿಡಿಪಿಓ ಗಳು ಸಭೆಗೆ ಮಾಹಿತಿ ನೀಡಿದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಅಂಗನವಾಡಿ ಕೇಂದ್ರಗಳಿಗೆ ಸಂಬಂಧಿಸಿದ ವಿದ್ಯುತ್ ಬಿಲ್ ಪಾವತಿ ಮಾಡದಿರಲು ಕಾರಣಗಳೇನು, ಇದಕ್ಕೆ ಯಾರು ಹೊಣೆ ಎಂಬುದನ್ನು ಪರಿಶೀಲಿಸಿ, ಎಲ್ಲ ಅಂಗನವಾಡಿ ಕೇಂದ್ರಗಳಿಗೆ ತಪ್ಪದೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ವಿದ್ಯುತ್ ಬಿಲ್ ಅನ್ನು ಸಮರ್ಪಕವಾಗಿ ನಿಗದಿತ ಅವಧಿಯಲ್ಲಿ ಪಾವತಿಯಾಗುವಂತೆ ನೋಡಿಕೊಳ್ಳಬೇಕು. ಈ ಕುರಿತ ಪರಿಶೀಲನಾ ವರದಿಯನ್ನು ಸಲ್ಲಿಸುವಂತೆ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅನಿಷ್ಠ ಪದ್ಧತಿಗಳ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಿ : ಜಿಲ್ಲೆಯಲ್ಲಿ ಬಾಲ್ಯವಿವಾಹ, ದೇವದಾಸಿ ಪದ್ಧತಿಯಂತಹ ಅನಿಷ್ಠ ಪದ್ಧತಿಗಳ ಸಂಪೂರ್ಣ ನಿರ್ಮೂಲನೆ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು, ಇಲಾಖಾ ಅಧಿಕಾರಿಗಳು ಅಲ್ಲದೆ, ಸ್ತ್ರೀಶಕ್ತಿ ಗುಂಪುಗಳ ಮೇಲೆ ಗುರುತರವಾದ ಹೊಣೆಗಾರಿಕೆ ಇದೆ. ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಇಂತಹ ಅನಿಷ್ಠ ಪದ್ಧತಿಗಳ ದುಷ್ಪರಿಣಾಮಗಳ ಬಗ್ಗೆ ವ್ಯಾಪಕ ಅರಿವು ಮೂಡಿಸುವಲ್ಲಿ ನಿರತರಾಗಬೇಕು. ಇಂತಹ ಕೆಟ್ಟ ಪದ್ಧತಿಗಳನ್ನು ಸಮಾಜದಿಂದ ಸಂಪೂರ್ಣ ನಿರ್ಮೂಲನೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಸಚಿವರಾದ ಉಮಾಶ್ರೀ ಅವರು ಕರೆ ನೀಡಿದರು.
ಸಭೆಯಲ್ಲಿ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕ ಬಿ.ಎಂ. ವಿಜಯಶಂಕರ್, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ. ವಿಜಯಪ್ರಕಾಶ್, ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಬಿ.ಎಸ್. ಕಲಾದಗಿ, ನಿರೂಪಣಾಧಿಕಾರಿ ಮಂಜುನಾಥ್, ಸೇರಿದಂತೆ ಹಲವು ಉಪಸ್ಥಿತರಿದ್ದರು.

Please follow and like us:
error