ಅಲ್ಪಸಂಖ್ಯಾತರ ಕಾಲೋನಿಗಳಲ್ಲಿ ಅಂಗನವಾಡಿ ಕಟ್ಟಡಗಳಿಗೆ ನಿವೇಶನ ಗುರುತಿಸಲು ಡಿ.ಸಿ. ಸೂಚನೆ

pm-15-point-programme-koppalಜಿಲ್ಲೆಯ ಅಲ್ಪಸಂಖ್ಯಾತರ ವರ್ಗದವರು ಹೆಚ್ಚಿರುವ ಸ್ಥಳಗಳಲ್ಲಿನ ಅಂಗನವಾಡಿಗಳನ್ನು ಬಾಡಿಗೆ ಅಥವಾ ಇತರೆ ಕಟ್ಟಡಗಳಲ್ಲಿ ನಡೆಸಲಾಗುತ್ತಿದ್ದು, ಸ್ವಂತ ಕಟ್ಟಡಗಳನ್ನು ನಿರ್ಮಿಸಲು ಅಗತ್ಯ ನಿವೇಶನವನ್ನು ಗುರುತಿಸುವಂತೆ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ನಗರಾಭಿವೃದ್ದಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ಏರ್ಪಡಿಸಲಾಗಿದ್ದ ಪ್ರಧಾನಮಂತ್ರಿಗಳ ೧೫ ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿನ ೧೭೯೨ ಅಂಗನವಾಡಿ ಕೇಂದ್ರಗಳ ಪೈಕಿ ಅಲ್ಪಸಂಖ್ಯಾತರ ಕಾಲೋನಿಗಳಲ್ಲಿ ಒಟ್ಟು ೧೦೮ ಅಂಗನವಾಡಿ ಕೇಂದ್ರಗಳು ನಡೆಯುತ್ತಿವೆ. ಈ ಪೈಕಿ ಕೇವಲ ೪೫ ಅಂಗನವಾಡಿಗಳು ಮಾತ್ರ ಸ್ವಂತ ಕಟ್ಟಡದಲ್ಲಿ ನಡೆಯುತ್ತಿವೆ. ಉಳಿದ ಅಂಗನವಾಡಿಗಳು ಬಾಡಿಗೆ ಅಥವಾ ಇತರೆ ಕಟ್ಟಡಗಳಲ್ಲಿ ನಡೆಯುತ್ತಿವೆ. ಅಲ್ಪಸಂಖ್ಯಾತರ ವರ್ಗದ ಕಾಲೋನಿಗಳು ಸಾಮಾನ್ಯವಾಗಿ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಹೆಚ್ಚು ಇರುವುದರಿಂದ, ನಿವೇಶನ ಲಭ್ಯವಾಗುವುದು ತುಸು ಕಷ್ಟಕರವಾಗಿದ್ದರೂ, ಪ್ರಯತ್ನ ನಡೆಸಿ, ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಅಂಗನವಾಡಿ ಕೇಂದ್ರ ಕಟ್ಟಡಗಳಿಗೆ ನಿವೇಶನವನ್ನು ಗುರುತಿಸಿ, ಸ್ವಂತ ಕಟ್ಟಡ ನಿರ್ಮಾಣವಾಗಬೇಕು ಎಂದು ಸೂಚನೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ಮಂಜುನಾಥ್ ಅವರು, ಜಿಲ್ಲೆಯಲ್ಲಿ ಕೊಪ್ಪಳ ೧೨, ಗಂಗಾವತಿ-೦೬, ಕನಕಗಿರಿ-೧೭, ಕುಷ್ಟಗಿ-೦೭ ಹಾಗೂ ಯಲಬುರ್ಗಾದಲ್ಲಿ ೦೩ ಸೇರಿದಂತೆ ಒಟ್ಟು ೪೫ ಅಂಗನವಾಡಿಗಳು ಮಾತ್ರ ಸ್ವಂತ ಕಟ್ಟಡದಲ್ಲಿವೆ. ಪ್ರತಿ ಅಂಗನವಾಡಿ ಕಟ್ಟಡದ ಘಟಕದ ವೆಚ್ಚ ಇದೀಗ ೮. ೫೦ ಲಕ್ಷ ರೂ. ನಿಗದಿಪಡಿಸಲಾಗಿದೆ. ಗ್ರಾಮೀಣ ಪ್ರದೇಶದ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ಬರುತ್ತಿದ್ದು, ನಗರ ಪ್ರದೇಶಗಳ ಅಂಗನವಾಡಿ ಕೇಂದ್ರಗಳಿಗೆ ಅನುದಾನ ಸಮರ್ಪಕವಾಗಿ ಲಭ್ಯವಾಗುತ್ತಿಲ್ಲ ಎಂದರು. ಇದಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆಯಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳ ಅಧಿಕಾರಿಗಳನ್ನು ಒಳಗೊಂಡಂತೆ ಸಭೆ ಕರೆದು, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹೆಚ್ಚಿನ ಪ್ರಚಾರ ಒದಗಿಸಿ : ಅಲ್ಪಸಂಖ್ಯಾತರ ಸಮುದಾಯದವರಿಗೆ ವಿದ್ಯಾರ್ಥಿ ಶಿಷ್ಯವೇತನ, ಪ್ರೋತ್ಸಾಹಧನ, ಶಾದಿಭಾಗ್ಯ, ವಸತಿ ನಿಲಯಗಳು, ಕಾನೂನು ತರಬೇತಿ ಭತ್ಯೆ, ಸ್ವಯಂ ಉದ್ಯೋಗ ಯೋಜನೆಗಳು, ಸಾಲ ಯೋಜನೆ, ಶೈಕ್ಷಣಿಕ ಸಾಲ, ಕೌಶಲಾಧಾರಿತ ತರಬೇತಿಗಳು ಹೀಗೆ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಹಲವು ಯೋಜನೆಗಳು ಜಾರಿಯಲ್ಲಿದ್ದು, ಇಂತಹ ಯೋಜನೆಗಳ ಬಗ್ಗೆ ಮಾಧ್ಯಮಗಳಲ್ಲಿ ಹೆಚ್ಚು, ಹೆಚ್ಚು ಪ್ರಚಾರ ನೀಡಬೇಕು. ಹೆಚ್ಚಿನ ಜನರಿಗೆ ಸೌಲಭ್ಯ ತಲುಪಿಸಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮದರಸಾ ಸ್ಥಿತಿಗತಿಗಳ ಬಗ್ಗೆ ವರದಿ ನೀಡಿ : ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ವರ್ಗದವರಿಗೆ ಸಂಬಂಧಿಸಿದಂತೆ ಒಟ್ಟು ೦೪ ಮದರಸಾಗಳು ಕಾರ್ಯನಿರ್ವಹಿಸುತ್ತಿದ್ದು, ಅಲ್ಲಿರುವ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಸ್ಥಿತಿ-ಗತಿಯ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಖುದ್ದು ಭೇಟಿ ನೀಡಿ ವಾರದೊಳಗೆ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಡಿಡಿಪಿಐ ಅವರಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಸಂಸದ ಕರಡಿ ಸಂಗಣ್ಣ ಅವರು, ಕರ್ನಾಟಕ ರೂರಲ್ ಇನ್‌ಫ್ರಾಸ್ಟ್ರಕ್ಚರ್ ಡೆವಲೆಪ್‌ಮೆಂಟ್ ಲಿಮಿಟೆಡ್, ಕೊಪ್ಪಳ ಇವರ ವತಿಯಿಂದ ೨೦೧೪-೧೫ ನೇ ಸಾಲಿನ ೧೨ನೇ ಪಂಚವಾರ್ಷಿಕ ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತರಿಗಾಗಿ ವಹುವಲಯವಾರು ಅಭಿವೃದ್ಧಿ ಯೋಜನೆಯಡಿ ಕೊಪ್ಪಳ ನಗರಕ್ಕೆ ೧೮ ಮತ್ತು ಗಂಗಾವತಿ ನಗರಕ್ಕೆ ೧೨ ಕಾಮಗಾರಿಗಳು ಮಂಜೂರಾಗಿದ್ದು, ಈ ಕಾಮಗಾರಿಗಳಲ್ಲಿ ವಸತಿ ಶಾಲೆಗಳು, ಉರ್ದು ಶಾಲೆಗಳ ಕಟ್ಟಡಗಳ ಕಾಮಗಾರಿಗಳು ಸೇರಿವೆ. ಅನಗತ್ಯ ವಿಳಂಬಕ್ಕೆ ಅವಕಾಶ ನೀಡದೆ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಂಸದ ಕರಡಿ ಸಂಗಣ್ಣ ಅವರು ತಿಳಿಸಿದರು.
ಸಭೆಯಲ್ಲಿ ಸಂಸದ ಕರಡಿ ಸಂಗಣ್ಣ, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಎನ್.ಕೆ. ತೊರವಿ, ಯೋಜನಾ ನಿರ್ದೇಶಕ ರವಿ ಬಸರಿಹಳ್ಳಿ, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಬಿ. ಕಲ್ಲೇಶ್, ಡಿಡಿಪಿಐ ಶ್ಯಾಮಸುಂದರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error