ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ವಿದ್ಯಾರ್ಥಿಗಳಿಗೆ ವಿಶೇಷ ಕಲಿಕಾ ಕೇಂದ್ರ ಪ್ರಾರಂಭ

ಇದೇ ಜೂ. ೨೦ ರಿಂದ ೨೭ ರವರೆಗೆ ಜರುಗುವ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿ ಮುಂದಿನ ವಿದ್ಯಾಭ್ಯಾಸಕ್ಕೆ ಪೂರಕವಾಗಲು ಆಯಾ ಪ್ರೌಢಶಾಲೆಗಳಲ್ಲಿ ವಿಶೇಷ ಕಲಿಕಾ ಕೇಂದ್ರವನ್ನು ಪ್ರಾರಂಭಿಸಲಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು, ಉತ್ತೀರ್ಣರಾಗುವಂತೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್ ಅವರು ಮನವಿ ಮಾಡಿದ್ದಾರೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ವಿದ್ಯಾರ್ಥಿ ಜೀವನದ ನಿರ್ಣಾಯಕ ಘಟ್ಟವಾಗಿದ್ದು, ಜಿಲ್ಲೆಯಲ್ಲಿ ಕೆಲವು ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಲು ಸಾಧ್ಯವಾಗಿಲ್ಲ. ಇಂತಹ ವಿದ್ಯಾರ್ಥಿಗಳಿಗೆ ಇದೇ ಜೂ. ೨೦ ರಿಂದ ೨೭ ರವರೆಗೆ ಪೂರಕ ಪರೀಕ್ಷೆಗಳು ನಡೆಯಲಿವೆ. ಈಗಾಗಲೆ ವಿದ್ಯಾರ್ಥಿಗಳು ಇದಕ್ಕಾಗಿ ನೋಂದಣಿ ಮಾಡಿಸಿಕೊಂಡಿದ್ದಾರೆ. ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ವಿಷಯವಾರು ಸಾಮರ್ಥ್ಯ ತುಂಬಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯು ಆಯಾ ಪ್ರೌಢಶಾಲೆಗಳಲ್ಲಿ ವಿಶೇಷ ಕಲಿಕಾ ಕೇಂದ್ರಗಳನ್ನು ತೆರೆದಿದೆ. ಪೂರಕ ಪರೀಕ್ಷೆಗೆ ನೋಂದಾಯಿಸಿದ ವಿದ್ಯಾರ್ಥಿಗಳು ಆಯಾ ಪ್ರೌಢಶಾಲೆಗಳಿಗೆ ತೆರಳಿ, ಕಲಿಕಾ ಕೇಂದ್ರದಲ್ಲಿ ಹಾಜರಾಗಬೇಕು. ಪೂರಕ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿ ಮುಂದಿನ ವಿದ್ಯಾಭ್ಯಾಸಕ್ಕೆ ಪೂರಕವಾಗಲು ವಿದ್ಯಾರ್ಥಿಗಳಿಗೆ ಈ ವ್ಯವಸ್ಥೆ ಕಲ್ಪಿಸಲಾಗಿದೆ. ಆಯಾ ಶಾಲೆಗಳ ಮುಖ್ಯೋಪಾಧ್ಯಾಯರು ಹಾಗೂ ವಿಷಯ ಶಿಕ್ಷಕರು, ನೊಂದಾಯಿತ ವಿದ್ಯಾರ್ಥಿಗಳಿಗೆ ಪರೀಕ್ಷೆ ಮುಗಿಯುವವರೆಗೆ ಕಲಿಕಾ ಕೇಂದ್ರದಲ್ಲೇ ಮಾಹಿತಿಯನ್ನು ನೀಡುವರು. ಪೂರಕ ಪರೀಕ್ಷೆ ತೆಗೆದುಕೊಂಡಿರುವ ವಿದ್ಯಾರ್ಥಿಗಳು ವಿಶೇಷ ಕಲಿಕಾ ಕೇಂದ್ರದ ಸದುಪಯೋಗ ಪಡೆದುಕೊಂಡು ಉತ್ತೀರ್ಣರಾಗಬೇಕು. ಎಲ್ಲ ಶಿಕ್ಷಕರು ಜಿಲ್ಲೆಯ ಪೂರಕ ಪರೀಕ್ಷೆಯ ಫಲಿತಾಂಶ ಸುಧಾರಣೆಗಾಗಿ ವಿವಿಧ ಕಾರ್ಯತಂತ್ರಗಳನ್ನು ಅಳವಡಿಸಿಕೊಂಡು, ನಿಯಮಿತವಾಗಿ ವರದಿ ಸಲ್ಲಿಸಲು ಸಹ ಸೂಚನೆ ನೀಡಲಾಗಿದ್ದು, ಈ ಕುರಿತ ಕ್ರಿಯಾ ಯೋಜನೆಯನ್ನು ಜೂ. ೦೧ ರೊಳಗೆ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ಜಿಲ್ಲೆಯ ಎಲ್ಲ ಶಿಕ್ಷಕರಿಗೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್  ತಿಳಿಸಿದ್ದಾರೆ.

Please follow and like us:

Leave a Reply