ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಮಹೇಶ್ ಅವರಿಂದ ಚಾಲನೆ

: ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಜಿಲ್ಲೆಯ ಕುಷ್ಟಗಿ ತಾಲೂಕಿನಲ್ಲಿ ಆಯೋಜಿಸಲಾಗಿರುವ ಎರಡನೆ ಹಂತದ ಆರೋಗ್ಯ ಜಾಗೃತಿ ಅಭಿಯಾನಕ್ಕೆ ಜಿಲ್ಲಾ ಪಂಚಾಯತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಮಹೇಶ್ ಅವರು ಕುಷ್ಟಗಿಯ ತಾಲೂಕು ಆಸ್ಪತ್ರೆ ಆವರಣದಲ್ಲಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಜಿ.ಪಂ. ಸದಸ್ಯ ವಿಜಯ ನಾಯಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ, ತಾಲೂಕು ವೈದ್ಯಾಧಿಕಾರಿ ಡಾ. ಆನಂದ ಗೋಟೂರ, ತಾಲೂಕು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಮಂತ್ರಿ, ಗಣ್ಯರಾದ ಸಂಗನಗೌಡ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಜಿಲ್ಲಾ ಸಮನ್ವಯಾಧಿಕಾರಿ ಸಂಜಯ ಪಾಟೀಲ್, ಸೇರಿದಂತೆ ಆರೋಗ್ಯ ಮಿತ್ರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.k-mahesh_kustagi
ಮನುಷ್ಯನಿಗೆ ಆರೋಗ್ಯವೇ ಭಾಗ್ಯ. ಪರಿಶಿಷ್ಟ ಜನರಿಗೆ, ಬಡವರಿಗೆ ಆರೋಗ್ಯ ಸಮಸ್ಯೆಗಳು ಬಂದಾಗ ಉಚಿತವಾಗಿ ಚಿಕಿತ್ಸೆ ದೊರೆಯುವಂತಹ ಅನೇಕ ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಿದೆ. ಬಿಪಿಎಲ್ ಕುಟುಂಬಗಳಿಗೆ ಸಂಪೂರ್ಣವಾಗಿ ಉಚಿತವಾಗಿ ಚಿಕಿತ್ಸೆ ದೊರೆಯುವ ವಾಜಪೇಯಿ ಆರೋಗ್ಯಶೀ ಯೋಜನೆ, ಎಪಿಎಲ್ ಕುಟುಂಬಗಳಿಗೆ ಚಿಕಿತ್ಸೆ ಲಭ್ಯವಾಗಲು ರಾಜೀವ್ ಆರೋಗ್ಯ ಭಾಗ್ಯ ಯೋಜನೆ ಸೇರಿದಂತೆ ಹತ್ತು ಹಲವು ಯೋಜನೆಗಳನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕವಾಗಿ ಅನುಷ್ಠಾನಗೊಳ್ಳುತ್ತಿದೆ. ಆದರೆ ಸಾಮಾನ್ಯ ಜನರಿಗೆ ಅದರಲ್ಲೂ ಪ್ರಮುಖವಾಗಿ ಗ್ರಾಮೀಣ ಜನರಿಗೆ ಸರ್ಕಾರದ ಈ ಯೋಜನೆಗಳ ಬಗ್ಗೆ ಅರಿವಿನ ಕೊರತೆ ಇದೆ. ಈ ನಿಟ್ಟಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಸಹಯೋಗದಲ್ಲಿ ಗ್ರಾಮೀಣ ಜನರಿಗೆ ಆರೋಗ್ಯ ಯೋಜನೆಗಳ ಕುರಿತು ಅರಿವು ಮೂಡಿಸಲು ಜಿಲ್ಲೆಯಲ್ಲಿ ಎರಡನೆ ಹಂತದಲ್ಲಿ ಆರೋಗ್ಯ ಅಭಿಯಾನ ಹಮ್ಮಿಕೊಂಡಿದೆ. ಆರೋಗ್ಯ ಅಭಿಯಾನವನ್ನು ಮೊದಲ ಹಂತದಲ್ಲಿ ಆಗಸ್ಟ್ ತಿಂಗಳಿನಲ್ಲಿ ಕೊಪ್ಪಳ ಜಿಲ್ಲೆಯ ಕನಕಗಿರಿ ಹಾಗೂ ಕೊಪ್ಪಳ ವಿಧಾನಸಭಾ ಕ್ಷೇತ್ರದ ಗ್ರಾಮಗಳಲ್ಲಿ ಆಯೋಜಿಸಲಾಗಿತ್ತು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರು ಅಧಿಕ ಸಂಖ್ಯೆಯಲ್ಲಿರುವ ಗ್ರಾಮಗಳನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದಲೇ ಆಯ್ಕೆ ಮಾಡಲಾಗಿದೆ. ಇದಿಗ ಎರಡನೆ ಹಂತದಲ್ಲಿ ಕುಷ್ಟಗಿ ತಾಲೂಕಿನಲ್ಲಿ ಜಾಗೃತಿ ಕಾರ್ಯಕ್ರಮ, ವಿಶೇಷವಾಗಿ ಸಿದ್ಧಪಡಿಸಲಾಗಿರುವ ೦೪ ವಾಹನಗಳ ಮೂಲಕ ನಡೆಯಲಿದೆ. ಪ್ರತಿ ವಾಹನ ದಿನಕ್ಕೆ ೦೨ ಗ್ರಾಮಗಳಲ್ಲಿ ಸಂಚರಿಸಿ, ಬೀದಿನಾಟಕ, ಕಿರುಚಿತ್ರ ಪ್ರದರ್ಶನ ಮೂಲಕ ಅರಿವನ್ನು ಮೂಡಿಸಲಾಗುವುದು.

Please follow and like us:
error