ಜೂ.೧೨ ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

ಬಾಲ-ಕಾರ್ಮಿಕ-ಪದ್ದತಿ: ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಕ್ಷಣ ಇಲಾಖೆ, ಯೂನಿಸೆಫ್ ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ, ಕೊಪ್ಪಳ ಇವರುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ, ಕಾನೂನು ಅರಿವು ನೆರವು ಕಾರ್ಯಕ್ರಮ ಹಾಗೂ ಜಾಥಾ ಕಾರ್ಯಕ್ರಮ ಜೂ.೧೨ ರಂದು ಬೆಳಿಗ್ಗೆ ೧೦ ಕ್ಕೆ ಕೊಪ್ಪಳ ಜಿಲ್ಲಾ ನ್ಯಾಯಾಲಯ ಆವರಣದ ಸಾಕ್ಷಿದಾರರ ಮೊಗಸಾಲೆಯಲ್ಲಿ ಏರ್ಪಡಿಸಲಾಗಿದೆ.
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ವಿಜಯಲಕ್ಷ್ಮೀ ಎಸ್.ಉಪನಾಳ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷರಾದ ಎಂ.ಕನಗವಲ್ಲಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಸೀನಿಯರ್ ಸಿವಿಲ್ ಜಡ್ಜ್ ಬಿ.ದಶರಥ, ಸಿವಿಲ್ ಜಡ್ಜ್ ಹಾಗೂ ಜೆಎಂಎಫ್‌ಸಿ ವಿಜಯಕುಮಾರ ಕನ್ನೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ ತ್ಯಾಗರಾಜನ್, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ರಾಮಚಂದ್ರನ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆರ್.ಬಿ. ಪಾನಘಂಟಿ, ಜಿಲ್ಲಾ ಸರಕಾರಿ ವಕೀಲ ಅಸೀಫ್ ಅಲಿ, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಯು.ವಿ. ಮಾಳೆಕೊಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎ. ಶ್ಯಾಮಸುಂದರ, ಕಾರ್ಮಿಕ ಅಧಿಕಾರಿ ಚಂದ್ರಶೇಖರ ಎನ್.ಐಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಬಿ. ಎಸ್. ಕಲಾದಗಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಶೇಖರಗೌಡ ರಾಮತ್ನಾಳ, ಕಾರ್ಮಿಕ ನಿರೀಕ್ಷಕ ಬಸಯ್ಯ ಎನ್.ಅಂಗಡಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಯೂನಿಸೆಫ್‌ನ ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆಯ ತರಬೇತಿ ಸಂಯೋಜಕ ಹರೀಶ ಜೋಗಿ ಮಕ್ಕಳ ಹಕ್ಕು ಮತ್ತು ರಕ್ಷಣೆ ಕುರಿತು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡ್ರ ಬಾಲಕಾರ್ಮಿಕರ ಬಗ್ಗೆ ಸರಕಾರದ ಯೋಜನೆಗಳು ಹಾಗೂ ಅವುಗಳ ಉಪಯೋಗ ಕುರಿತು ವಿಷೇಶ ಉಪನ್ಯಾಸ ನೀಡುವರು. ನಂತರ ಕಲಾ ತಂಡದಿಂದ ಜಾಗೃತಿ ಗೀತೆಗಳ ಕಾರ್ಯಕ್ರಮ ಜರುಗಲಿದೆ.

Related posts

Leave a Comment