ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಸಲು ಒತ್ತಾಯಿಸುವಂತಿಲ್ಲ.

ಕೊಪ್ಪಳ ಜು – 15 (ಕ. ವಾ) ಕೊಪ್ಪಳ ಜಿಲ್ಲೆಯಲ್ಲಿ ವಿವಿಧ ಕೋರ್ಸ್‍ಗಳಿಗೆ ದಾಖಲಾಗುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಸಂದರ್ಭದಲ್ಲಿ ಶುಲ್ಕ ಪಾವತಿಸಲು ಒತ್ತಾಯಿಸುವಂತಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಸೂಚನೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಸರ್ಕಾರಿ, ಖಾಸಗಿ ಹಾಗೂ ಅಂಗೀಕೃತ ಶಿಕ್ಷಣ ಸಂಸ್ಥೆಗಳಲ್ಲಿ ಪಿಯುಸಿ, ಪದವಿ ಹಾಗೂ ಇತರೆ ಕೋರ್ಸ್‍ಗಳಲ್ಲಿ ದಾಖಲಾಗುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ, ಪ್ರವೇಶಾತಿ ಸಂದರ್ಭದಲ್ಲಿ ಮುಂಗಡವಾಗಿ ಶುಲ್ಕವನ್ನು ಪಾವತಿಸುವಂತೆ ಒತ್ತಾಯಿಸುತ್ತಿರುವುದಾಗಿ ತಿಳಿದುಬಂದಿರುತ್ತದೆ. ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ, ವಿವಿಧ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ, ವಾರ್ಷಿಕ ಆದಾಯ ಮಿತಿಯೊಳಗಿರುವ ಪ.ಜಾತಿ/ಪ.ವರ್ಗದ ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳಿಗೆ ಸಂದಾಯ ಮಾಡಬೇಕಾಗಿರುವ ಶುಲ್ಕ, ನಿರ್ವಹಣಾ ವೆಚ್ಚ ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಆಯಾ ಶಿಕ್ಷಣ ಸಂಸ್ಥೆಗಳು, ಸಂಬಂಧಪಟ್ಟ ವಿದ್ಯಾರ್ಥಿಗಳಿಂದ ಪಡೆದು, ಆಯಾ ತಾಲೂಕುಗಳ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸಲ್ಲಿಸಬೇಕು. ವಿದ್ಯಾರ್ಥಿಗಳಿಗೆ ಪ್ರವೇಶಾತಿ ಸಂದರ್ಭದಲ್ಲಿ ಮುಂಗಡವಾಗಿ ಅಥವಾ ವಿದ್ಯಾಭ್ಯಾಸದ ಅವಧಿಯಲ್ಲಿ ಶುಲ್ಕವನ್ನು ಪಾವತಿಸುವಂತೆ ಒತ್ತಾಯಿಸಬಾರದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply