ಬರ ಪರಿಸ್ಥಿತಿಯಲ್ಲಿ ಎಲ್ಲ ರೈತರನ್ನು ಬೆಳೆ ವಿಮೆ ವ್ಯಾಪ್ತಿಗೆ ತನ್ನಿ- ಸಿಇಓ ಆರ್. ರಾಮಚಂದ್ರನ್

sala-manna_ceo_koppal; ಕೊಪ್ಪಳ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳೆಂದು ಸರ್ಕಾರ ಘೋಷಿಸಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಹಿಂಗಾರು ಹಾಗೂ ಬೇಸಿಗೆ ಹಂಗಾಮಿಗೆ ಎಲ್ಲ ರೈತರನ್ನು ಬೆಳೆ ವಿಮೆ ವ್ಯಾಪ್ತಿಗೆ ತರುವುದು ಸೂಕ್ತವಾಗಿದೆ. ಈ ನಿಟ್ಟಿನಲ್ಲಿ ಕೃಷಿ, ತೋಟಗಾರಿಕೆ ಹಾಗೂ ಲೀಡ್ ಬ್ಯಾಂಕ್ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯಲ್ಲಿ ಮಂಗಳವಾರದಂದು ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನ ಪ್ರಧಾನಮಂತ್ರಿ ಫಸಲ ಬೀಮಾ ಯೋಜನೆ ಹಾಗೂ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ಕುರಿತಂತೆ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೊಪ್ಪಳ ಜಿಲ್ಲೆಯಲ್ಲಿ ಸದ್ಯ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಹಂಗಾಮಿನಲ್ಲಿ ಸಾಕಷ್ಟು ಪ್ರಮಾಣದಲ್ಲಿ ರೈತರು ಬೆಳೆ ಹಾನಿ ಅನುಭವಿಸಿದ್ದಾರೆ. ಆದರೆ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಮಾಡಿಸಿದ ರೈತರ ಸಂಖ್ಯೆ ಬಹಳಷ್ಟು ಕಡಿಮೆ ಇದ್ದು, ಹೆಚ್ಚಿನ ಸಂಖ್ಯೆಯಲ್ಲಿ ರೈತರು ಬೆಳೆ ವಿಮೆಗೆ ನೋಂದಾಯಿಸಿದ್ದರೆ, ಮುಂಗಾರು ಹಂಗಾಮಿನ ವಿಮೆ ಪಡೆಯಲು ಅನುಕೂಲವಾಗುತ್ತಿತ್ತು. ಇದೀಗ ಹಿಂಗಾರು ಹಂಗಾಮು ಪ್ರಾರಂಭವಾಗಿದ್ದು, ಬೆಳೆ ಸಾಲ ಪಡೆಯುವ ರೈತರಷ್ಟೇ ಅಲ್ಲದೆ ಸಾಲ ಪಡೆಯದ ರೈತರೂ ಸಹ ಪ್ರಧಾನಮಂತ್ರಿ ಫಸಲ ಬೀಮಾ ಯೋಜನೆಗೆ ನೋಂದಾಯಿಸುವಂತಾಗಬೇಕು. ಹಿಂಗಾರು ಹಂಗಾಮಿಗೆ ನೋಂದಾಯಿಸಲು ಡಿ. ೩೧ ಕೊನೆಯ ದಿನಾಂಕವಾಗಿದೆ. ಬರ ಪರಿಸ್ಥಿತಿಯಿಂದ ಕಂಗೆಟ್ಟಿರುವ ರೈತ ಸಮುದಾಯಕ್ಕೆ ಇದರಿಂದ ಸಹಕಾರಿಯಾಗಲಿದೆ. ಗ್ರಾಮೀಣ ಮಟ್ಟದಲ್ಲಿ ಬೆಳೆ ವಿಮೆ ಬಗ್ಗೆ ಹೆಚ್ಚಿನ ರೀತಿಯಲ್ಲಿ ಪ್ರಚಾರ ಕಾರ್ಯ ಆಗಬೇಕು. ಪ್ರತಿಯೊಂದು ಹೋಬಳಿ ಮಟ್ಟದಲ್ಲೂ ಪ್ರಚಾರ ತೀವ್ರಗೊಳ್ಳಬೇಕು. ಎಲ್ಲ ರೈತರು ಬೆಳೆ ವಿಮೆಗೆ ನೋಂದಾವಣೆ ಆಗಬೇಕು. ಯೋಜನೆಯ ಲಾಭದ ಬಗ್ಗೆ ಬ್ಯಾಂಕ್‌ಗಳು, ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳು ರೈತರಲ್ಲಿ ಅರಿವು ಮೂಡಿಸಬೇಕು. ಈ ದಿಸೆಯಲ್ಲಿ ಕೃಷಿ, ತೋಟಗಾರಿಕೆ ಮತ್ತು ಲೀಡ್ ಬ್ಯಾಂಕ್ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಂಟಿಕೃಷಿ ನಿರ್ದೇಶಕ ಡಾ. ರಾಮದಾಸ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣಾ ಉಕ್ಕುಂದ, ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಬಾಬುರಾವ್ ಉಪಸ್ಥಿತರಿದ್ದರು.

Please follow and like us:
error