ಮಕ್ಕಳನ್ನು ದುಡಿಮೆಗಾಗಿ ಬಳಸುವವರಿಗೆ ಕಠಿಣ ಶಿಕ್ಷೆ – ವನಿತಾ ತೊರವಿ

koppal-district-bar-association : ಹದಿನಾಲ್ಕು ವರ್ಷದೊಳಗಿನ ಮಕ್ಕಳನ್ನು ದುಡಿಮೆಗೆ ಬಳಸುವವರಿಗೆ ಕಾನೂನಿನಲ್ಲಿ ಇದೀಗ ಕಟ್ಟುನಿಟ್ಟಿನ ಕಾಯ್ದೆ ಜಾರಿಗೆ ಬಂದಿದ್ದು, ನಿಯಮವನ್ನು ಉಲ್ಲಂಘಿಸುವವರಿಗೆ ಕಠಿಣ ಶಿಕ್ಷೆ ಕಾದಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ವನಿತಾ ಎನ್. ತೊರವಿ ಅವರು ಎಚ್ಚರಿಕೆ ನೀಡಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ-೧೦೯೮, ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಕೋಳಿಫಾರಂ, ಹೋಟೆಲ್, ಗ್ಯಾರೇಜ್, ಸೀಡ್ಸ್ ಕಂಪನಿಗಳ ಮಾಲೀಕರುಗಳಿಗೆ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಏರ್ಪಡಿಸಲಾಗಿದ್ದ ಬಾಲಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದಾಗ ಬಾಲಕಾರ್ಮಿಕ ಪದ್ಧತಿ ಹಾಗೂ ಬಾಲ್ಯ ವಿವಾಹ ಇವರೆಡೂ, ಉತ್ತರ ಕರ್ನಾಟಕದಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. ಶಾಲೆ ಬಿಟ್ಟ ಮಕ್ಕಳನ್ನು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಪುನಃ ಶಾಲೆಗೆ ಸೇರಿಸುವ ಕಾರ್ಯದಲ್ಲಿ ನಿರತವಾಗಿರುವುದರ ಜೊತೆಗೆ, ಮಕ್ಕಳನ್ನು ದುಡಿಮೆಗೆ ಬಳಸುವವರನ್ನು ಹಾಗೂ ಬಾಲ್ಯವಿವಾಹ ಪ್ರೋತ್ಸಾಹಿಸುವವರನ್ನು ಶಿಕ್ಷೆಗೆ ಗುರಿಪಡಿಸಲು ಮುಂದಾಗುತ್ತಿದೆ. ೧೪ ವರ್ಷದೊಳಗಿನ ಮಕ್ಕಳನ್ನು ಮನೆಗೆಲಸವೂ ಸೇರಿದಂತೆ ಯಾವುದೇ ಕೆಲಸಗಳಿಗೆ ಬಳಸುವಂತಿಲ್ಲ. ಇದನ್ನು ಉಲ್ಲಂಘಿಸುವವರಿಗೆ ಕಠಿಣ ಶಿಕ್ಷೆ ಕಾದಿದೆ. ಬಾಲಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆಯಲ್ಲಿ ಕಠಿಣ ಶಿಕ್ಷೆಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ಬಹಳಷ್ಟು ಜನರಿಗೆ ಕಾಯ್ದೆ, ಕಾನೂನಿನ ಅರಿವಿಲ್ಲ. ಕಾನೂನಿನ ಅರಿವಿಲ್ಲ ಎಂದು ಕಾಯ್ದೆ ಉಲ್ಲಂಘಿಸಿದಲ್ಲಿ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಇದಕ್ಕಾಗಿಯೇ ಎಲ್ಲೆಡೆ ಕಾನೂನಿನ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಬಡತನ, ನಿರುದ್ಯೋಗ, ಅನಕ್ಷರತೆ, ವಲಸೆ ಮುಂತಾದ ಕುಂಟು ನೆಪವೊಡ್ಡಿ, ಹಣ ಹಾಗೂ ದುಡಿಮೆಯ ತಾತ್ಕಾಲಿಕ ಆಸೆಗಾಗಿ ಮಕ್ಕಳನ್ನು ಮನೆಗೆಲಸಕ್ಕೆ, ಹೋಟೆಲ್, ಗ್ಯಾರೇಜ್, ಕೋಳಿ ಫಾರಂ, ಸೀಡ್ಸ್ ಕಂಪನಿ ಮುಂತಾದ ಕಡೆ ದುಡಿಮೆಗೆ ಕಳುಹಿಸುವ ಮೂಲಕ ಪಾಲಕರೇ ತಮ್ಮ ಮಕ್ಕಳ ಭವಿಷ್ಯವನ್ನು ಹಾಳು ಮಾಡುತ್ತಿರುವುದು ದುರಾದೃಷ್ಟಕರ ಸಂಗತಿಯಾಗಿದೆ. ಶಾಲೆಯಿಂದ ಹೊರಗುಳಿಯುವ ಮಕ್ಕಳು ಕುಟುಂಬಕ್ಕೆ ಮತ್ತು ಸಮಾಜಕ್ಕೆ ಯಾವುದೇ ಕೊಡುಗೆ ನೀಡಲು ಸಾಧ್ಯವಿಲ್ಲ. ಮಕ್ಕಳು ಶಿಕ್ಷಣ ಪಡೆದು ವಿದ್ಯಾವಂತರಾದರೆ, ದೇಶ ಅಭಿವೃದ್ಧಿಯಾದಂತೆ. ಈ ನಿಟ್ಟಿನಲ್ಲಿ ೨೦೨೦ ರೊಳಗಾಗಿ ರಾಜ್ಯವನ್ನು ಬಾಲಕಾರ್ಮಿಕ ಮುಕ್ತ ರಾಜ್ಯವನ್ನಾಗಿಸಲು ಆಯೋಗವು ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ವನಿತಾ ಎನ್. ತೊರವಿ ಅವರು ಹೇಳಿದರು.
ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಹಿರಿಯಶ್ರೇಣಿ ಸಿವಿಲ್ ನ್ಯಾಯಾಧೀಶ ಬಿ. ದಶರಥ ಅವರು ಮಾತನಾಡಿ, ಬಾಲಕಾರ್ಮಿಕ ಪದ್ಧತಿಯಿಂದ ಶೋಷಣೆಗೆ ಒಳಗಾದವರಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ನೆರವು ದೊರೆಯಲಿದೆ. ಅಲ್ಲದೆ ಬಾಲಕಾರ್ಮಿಕ ಪದ್ಧತಿಯನ್ನು ನಿಷೇಧಿಸಿರುವ ಕುರಿತು ಗ್ರಾಮೀಣ ಮಟ್ಟದಲ್ಲೂ ಸಹ ಅರಿವು ಮೂಡಿಸಲಾಗುತ್ತಿದೆ. ಬಾಲಕಾರ್ಮಿಕ ಪದ್ಧತಿ ಅಥವಾ ಬಾಲ್ಯವಿವಾಹ ಪ್ರಕರಣಗಳು ಕಂಡುಬಂದಲ್ಲಿ, ಮಾಹಿತಿ ನೀಡುವ ವ್ಯವಸ್ಥೆಯನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಸಿವಿಲ್ ನ್ಯಾಯಾಧೀಶ ವಿಜಯಕುಮಾರ ಕನ್ನೂರ ಅವರು ಮಾತನಾಡಿ, ದೇಶದ ಪ್ರತಿಯೊಬ್ಬ ಪ್ರಜೆ ಸಮಾನತೆಯಿಂದ, ನೆಮ್ಮದಿಯಿಂದ ಜೀವನ ಸಾಗಿಸಬೇಕು ಎನ್ನುವುದು ಸಂವಿಧಾನದ ಆಶಯವಾಗಿದೆ. ಬಾಲಕಾರ್ಮಿಕ ಪದ್ಧತಿಯು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಮಕ್ಕಳು ದೇಶದ ಭವಿಷ್ಯ ಹಾಗೂ ಸಂಪತ್ತು. ಶಿಕ್ಷಣ ಇಂದು ಎಲ್ಲ ಮಕ್ಕಳ ಮೂಲಭೂತ ಹಕ್ಕಾಗಿದ್ದು, ಸರ್ಕಾರದ ಬಿಸಿಯೂಟ, ಕ್ಷೀರಭಾಗ್ಯ, ಉಚಿತ ಸೈಕಲ್, ಸಮವಸ್ತ್ರ, ಪುಸ್ತಕ ಮುಂತಾದ ಯೋಜನೆಗಳು ಜಾರಿಯಲ್ಲಿದ್ದರೂ, ಶೇ. ೧೦೦ ರಷ್ಟು ಮಕ್ಕಳು ಶಿಕ್ಷಣ ಪಡೆಯುತ್ತಿಲ್ಲ. ಮಕ್ಕಳನ್ನು ದುಡಿಮೆಗೆ ಹಚ್ಚಿ, ವಯಸ್ಕರು, ಪಾಲಕರು ಆರಾಮ ಜೀವನ ನಡೆಸುವುದು ಅತ್ಯಂತ ಕೆಟ್ಟ ಸಂಸ್ಕೃತಿಯಾಗಿದೆ. ಕೇವಲ ರಸ್ತೆ, ಸೇತುವೆ ಕಟ್ಟಡಗಳ ನಿರ್ಮಾಣವಷ್ಟೇ ಅಭಿವೃದ್ಧಿಯಲ್ಲ. ಎಲ್ಲ ಮಕ್ಕಳು ಶಿಕ್ಷಣ ಪಡೆದು ವಿದ್ಯಾವಂತರಾದರೆ ಅದೇ ನಿಜವಾದ ಅಭಿವೃದ್ಧಿ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ತ್ಯಾಗರಾಜನ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಪಾನಘಂಟಿ, ಜಿಲ್ಲಾ ಸರ್ಕಾರಿ ವಕೀಲ ಆಸೀಫ್ ಅಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಬಿ.ಎಸ್. ಕಲಾದಗಿ, ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ., ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಶೇಖರಗೌಡ ರಾಮತ್ನಾಳ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಯುನಿಸೆಫ್ ಜಿಲ್ಲಾ ಸಂಯೋಜಕ ಹರೀಶ್ ಜೋಗಿ ಹಾಗೂ ಬಾಲ ನ್ಯಾಯ ಮಂಡಳಿ ಸದಸ್ಯ ಶಶಿಕಾಂತ ಕಲಾಲ್ ಕಾರ್ಯಕ್ರಮ ಅಂಗವಾಗಿ ವಿಶೇಷ ಉಪನ್ಯಾಸ ನೀಡಿದರು. ರೋಹಿಣಿ ಕೋಟಗಾರ್ ಸ್ವಾಗತಿಸಿದರು, ಬಸವರಾಜ ಹಿರೇಗೌಡ್ರ ನಿರೂಪಿಸಿದರು, ವೀರಣ್ಣ ಕುಂಬಾರ ವಂದಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲೆಯ ಕೋಳಿ ಫಾರಂ, ಸೀಡ್ಸ್ ಕಂಪನಿ, ಗ್ಯಾರೇಜ್, ಹೋಟೆಲ್‌ಗಳ ಮಾಲೀಕರು ಪಾಲ್ಗೊಂಡಿದ್ದರು.

Leave a Reply