ವಸತಿ ನಿಲಯ, ಅಂಗನವಾಡಿ ಕಟ್ಟಡಗಳಿಗೆ ಸರ್ಕಾರಿ ಜಮೀನು ಗುರುತಿಸಲು ಸೂಚನೆ

koppal-news-dc-ceo ಕೊಪ್ಪಳ ಜಿಲ್ಲೆಯಲ್ಲಿ ಸಕಾರಿ ವಸತಿ ನಿಲಯಗಳಿಗೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ನಿವೇಶನ ನೀಡುವ ಕುರಿತು ಆಯಾ ಇಲಾಖೆ ಅಧಿಕಾರಿಗಳು ಸಂಬಂಧಿಸಿದ ತಹಸಿಲ್ದಾರರನ್ನು ಸಂಪರ್ಕಿಸಿ, ಸರ್ಕಾರಿ ಜಮೀನನ್ನು ಗುರುತಿಸಿ, ಒಂದು ವಾರದೊಳಗೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಪಿ.ಎಸ್. ವಸ್ತ್ರದ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗಿನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಸರ್ಕಾರಿ ವಸತಿ ನಿಲಯಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಕಟ್ಟಡಗಳನ್ನು ನಿರ್ಮಿಸುವ ಸಲುವಾಗಿ ನಿವೇಶನವನ್ನು ಗುರುತಿಸಲು, ಸಂಬಂಧಪಟ್ಟ ಇಲಾಖಾಧಿಕಾರಿಗಳು, ತಹಸಿಲ್ದಾರರನ್ನು ಸಂಪರ್ಕಿಸಿ, ಜಮೀನನ್ನು ಗುರುತಿಸಬೇಕು. ಒಂದು ವಾರದ ಒಳಗಾಗಿ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸೂಚನೆ ನೀಡಿದರು.
ಸಕಾಲ ಯೋಜನೆಯಡಿ ಸ್ವೀಕೃತವಾಗುವ ಅರ್ಜಿಗಳನ್ನು ಪರಿಶೀಲಿಸಿ, ನಿಗದಿತ ಕಾಲಮಿತಿಯಲ್ಲಿ ವಿಲೇವಾರಿ ಮಾಡಬೇಕು. ಬರಗಾಲಕ್ಕೆ ಸಂಬಂಧಿಸಿದಂತೆ ಹಿಂಗಾರು ಹಂಗಾಮಿನಲ್ಲಿ ಹಾನಿಯಾದ ಬೆಳೆಗಳಿಗೆ ಇನ್‌ಪುಟ್ ಸಬ್ಸಿಡಿಯನ್ನು ಆಯಾ ಫಲಾನುಭವಿಗಳಿಗೆ ಒಂದು ವಾರದೊಳಗಾಗಿ ವಿತರಿಸಲು ಕ್ರಮ ವಹಿಸಬೇಕು ಎಂದು ಉಪವಿಭಾಗಾಧಿಕಾರಿಗಳು ಹಾಗೂ ತಹಸಿಲ್ದಾರರಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಮುಂಬರುವ ದಿನಗಳಲ್ಲಿ ಭಾರೆ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಒಂದು ವಾರದ ಒಳಗಾಗಿ ನಗರ, ಸ್ಥಳೀಯ ಸಂಸ್ಥೆ ಪ್ರದೇಶಗಳಲ್ಲಿರುವ ಎಲ್ಲ ಚರಂಡಿಗಳನ್ನು ಸ್ವಚ್ಛಗೊಳಿಸಲು ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಎಸ್. ವಸ್ತ್ರದ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್, ಅಪರ ಜಿಲ್ಲಾಧಿಕಾರಿ ರುದ್ರೇಶ್ ಘಾಳಿ, ಜಿ.ಪಂ. ಉಪಕಾರ್ಯದರ್ಶಿ ಎನ್.ಕೆ. ತೊರವಿ, ಜಂಟಿಕೃಷಿ ನಿರ್ದೇಶಕ ಡಾ. ರಾಮದಾಸ್, ಉಪವಿಭಾಗಾಧಿಕಾರಿ ಇಸ್ಮಾಯಿಲ್ ಸಾಹೇಬ್ ಶಿರಹಟ್ಟಿ ಸೇರಿದಂತೆ ತಹಸಿಲ್ದಾರರು, ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

Please follow and like us:
error