ಶಾಲೆ ಕಡೆ ನನ್ನ ನಡೆ ಕಾರ್ಯಕ್ರಮ ಜನಾಂದೊಲನವಾಗಬೇಕು- ಡಾ. ಕೃಪಾ ಆಳ್ವಾ.

ಕೊಪ್ಪಳ ಮೇ. ೦೩ ರಾಜ್ಯದ ಪ್ರತಿಯೊಂದು ಮಗು ಶಾಲೆಗೆ ದಾಖಲಾಗಬೇಕು, ಶಿಕ್ಷಣವನ್ನು ಯಾವುದೇ ಅಡೆತಡೆ ಇಲ್ಲದೆ ಮುಂದುವರೆಸಬೇಕು ಎನ್ನುವ ಧ್ಯೇಯೋದ್ದೇಶವನ್ನು ಇಟ್ಟುಕೊಂಡು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಜಾರಿಗೆ ತಂದಿರುವ ಶಾಲೆ ಕಡೆ ನನ್ನ ನಡೆ ಕಾರ್ಯಕ್ರಮ ಜನಾಂದೋಲನವಾಗಿ ರೂಪಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಡಾ. ಕೃಪಾ ಅಮರ್ ಆಳ್ವಾ ಅವರು ಮನವಿ ಮಾಡಿಕೊಂಡರು. ಶಾಲೆ ಕಡೆ ನನ್ನ ನಡೆ- ಶಿಕ್ಷಣ ನನ್ನ ಮೂಲಭೂತ ಹಕ್ಕು ಆಂದೋಲನ ಕುರಿತಂತೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರದಂದು ಏರ್ಪಡಿಸಲಾಗಿದ್ದ ಪೂDSC_0656ರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರಾಜ್ಯದ ಪ್ರತಿಯೊಂದು ಮಗು ಶಾಲೆಗೆ ದಾಖಲಾಗಬೇಕು. ಅಲ್ಲದೆ ಆ ಮಗುವಿನ ಶಿಕ್ಷಣ ಯಾವುದೇ ಅಡೆ ತಡೆ ಇಲ್ಲದೆ ನಡೆಯಬೇಕು ಎನ್ನುವುದು ಆಯೋಗದ ಮತ್ತು ಸರ್ಕಾರದ ಆಶಯವಾಗಿದೆ. ಮಕ್ಕಳ ಶಿಕ್ಷಣ ಸಮರ್ಪಕವಾಗಿ ನಡೆಯಬೇಕು ಎನ್ನುವ ಉದ್ದೇಶದಿಂದ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆಯಾದರೂ, ಶಿಕ್ಷಣದಿಂದ ವಂಚಿತರಾಗುವ ಮಕ್ಕಳ ಸಂಖ್ಯೆಯೂ ಸಹ ರಾಜ್ಯದಲ್ಲಿ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಶಾಲೆ ಕಡೆ ನನ್ನ ನಡೆ ಎನ್ನುವ ಕಾರ್ಯಕ್ರಮವನ್ನು ರಾಜ್ಯದಲ್ಲಿ ಹಮ್ಮಿಕೊಳ್ಳಲಾಗಿದ್ದು, ಶೈಕ್ಷಣಿಕ ವರ್ಷ ಆರಂಭಗೊಳ್ಳುವ ಮುನ್ನವೇ, ವಿವಿಧ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿ, ಅಂತಹ ಮಕ್ಕಳನ್ನು ಶಾಲೆಗೆ ದಾಖಲಿಸುವಂತಾಗಬೇಕು. ಮಕ್ಕಳು ಶಿಕ್ಷಣದ ಮುಖ್ಯವಾಹಿನಗೆ ಬರುವಂತಾಗಬೇಕು ಎಂದು ಆಯೋಗದ ಅಧ್ಯಕ್ಷೆ ಡಾ. ಕೃಪಾ ಆಳ್ವಾ ಅವರು ಹೇಳಿದರು. ಶಿಕ್ಷಣದ ಮುಖ್ಯವಾಹಿನಿಗೆ ತನ್ನಿ : ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪುನಃ ಶಾಲೆಗೆ ಕರೆತರಲು ವಿಶೇಷ ದಾಖಲಾತಿ ಆಂದೋಲನ ಏರ್ಪಡಿಸಲಾಗುತ್ತಿದೆ, ಹೆಣ್ಣುಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡಲು ಪ್ರತಿದಿನದ ಹಾಜರಾತಿಗೆ ೨ ರೂ. ಪ್ರೋತ್ಸಾಹಧನ ನೀಡಲಾಗುತ್ತಿದೆ. ಉಚಿತ ಸಮವಸ್ತ್ರ, ಪಠ್ಯಪುಸ್ತಕ, ಬಿಸಿಯೂಟ, ಕ್ಷೀರಭಾಗ್ಯದಡಿ ಹಾಲು ವಿತರಣೆ, ಹೀಗೆ ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದೆ. ಜಿಲ್ಲೆಯಲ್ಲಿ ೩೦೫ ಮಕ್ಕಳು ಶಾಲೆಯಿಂದ ಹೊರಗುಳಿದಿರುವುದಾಗಿ ಅಂಕಿ-ಅಂಶಗಳನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ಸಭೆಯ ಗಮನಕ್ಕೆ ತಂದಾಗ, ಈ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಆಯೋಗದ ಅಧ್ಯಕ್ಷರು, ರಾಜ್ಯದಲ್ಲಿ ೧೪ ಸಾವಿರಕ್ಕೂ ಹೆಚ್ಚು ಹೆಣ್ಣು ಮಕ್ಕಳು ಶಾಲೆಯಿಂದ ಹೊರಗುಳಿದಿರುವ ಬಗ್ಗೆ ಮಾಹಿತಿ ಇದೆ. ಜಿಲ್ಲೆಯಲ್ಲಿ ಒಟ್ಟಾರೆ ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ ೩೦೫ ಎಂದು ಹೇಳುತ್ತಿರುವುದು ಒಪ್ಪಲಾರ್ಹ ಸಂಖ್ಯೆ ಅಲ್ಲ. ಜಿಲ್ಲೆಯಲ್ಲಿ ಮಕ್ಕಳು ಶಾಲೆಗೆ ಬಾರದೇ ಇದ್ದರು, ಮಕ್ಕಳಿಗೆ ಹಾಜರಾತಿ ತೋರಿಸಲಾಗುತ್ತಿದೆ. ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ ಕಡಿಮೆ ತೋರಿಸುವ ಉದ್ದೇಶದಿಂದ ಈ ರೀತಿ ಮಾಡಲಾಗುತ್ತಿದೆ ಎನ್ನುವಂತಹ ದೂರುಗಳು ಆಯೋಗಕ್ಕೆ ಬಂದಿದೆ. ಶಾಲೆಯಿಂದ ಹೊರಗುಳಿದಿರುವ ಮಕ್ಕಳ ಬಗ್ಗೆ ಸರಿಯಾಗಿ ಪರಿಶೀಲಿಸಿ, ನಂತರವೇ ಆಯೋಗಕ್ಕೆ ವರದಿ ನೀಡುವಂತೆ ಆಯೋಗದ ಅಧ್ಯಕ್ಷರು ಸೂಚನೆ ನೀಡಿದರು.
ಜನಪ್ರತಿನಿಧಿಗಳ ಪಾತ್ರ ಬಹುಮುಖ್ಯ : ಶಾಲೆಯಿಂದ ಹೊರಗುಳಿದ ಮಕ್ಕಳು, ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿಗೆ ಒಳಗಾದ ಮಕ್ಕಳ ಬಗ್ಗೆ ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಜನಪ್ರತಿನಿಧಿಗಳಿಗೆ, ಪಿಡಿಓ ಗಳಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಬೇಗ ತಿಳಿದು ಬರುತ್ತದೆ. ಇಲ್ಲದ ಉಸಾಬರಿ ನಮಗೇಕೆ ಎನ್ನುವ ಮನಸ್ಥಿತಿಯನ್ನು ಇವರು ಕೈಬಿಟ್ಟು, ಸಾಮಾಜಿಕ ಹೊಣೆಗಾರಿಕೆಯನ್ನು ಅರಿತು ಪೂರಕವಾಗಿ ಕೆಲಸ ಮಾಡಿದರೆ, ಇಂತಹ ಅನಿಷ್ಠ ಪದ್ಧತಿಗಳನ್ನು ನಿರ್ಮೂಲನೆ ಮಾಡಬಹುದು. ಗ್ರಾಮ ಪಂಚಾಯತಿಗಳ ಜನಪ್ರತಿನಿಧಿಗಳು, ಸ್ಥಳೀಯವಾಗಿ ಉತ್ತಮ ಕೆಲಸ ಮಾಡಿದರೆ, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯವಾಹಿನಿಗೆ ತರುವ ಕಾರ್ಯ ಸುಲಭ ಸಾಧ್ಯ. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯತಿಗಳ ಜನಪ್ರತಿನಿಧಿಗಳು ಸಹಕರಿಸಬೇಕು ಎಂದು ಆಯೋಗದ ಅಧ್ಯಕ್ಷರು ಮನವಿ ಮಾಡಿಕೊಂಡರು.
ಭಿಕ್ಷಾಟನೆ ತೊಲಗಿಸಿ: ಸಭೆಯಲ್ಲಿ ಭಾಗವಹಿಸಿದ್ದ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ವನಿತಾ ತೊರವಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ, ಬಾಲ್ಯ ವಿವಾಹ ಇಂತಹ ಅನಿಷ್ಠ ಪದ್ಧತಿಗಳು ಹೆಚ್ಚಾಗಿ ಅಸ್ತಿತ್ವದಲ್ಲಿದೆ. ಕೊಪ್ಪಳ ಜಿಲ್ಲೆಯಲ್ಲಿ ಬಿಕ್ಷಾಟನೆಯಲ್ಲಿ ತೊಡಗುವ ಮಕ್ಕಳ ಸಂಖ್ಯೆ ಹೆಚ್ಚಾಗಿದೆ. ಇಡೀ ರಾಜ್ಯದಲ್ಲಿ ಭಿಕ್ಷಾಟನೆಗೆ ತೊಡಗಿಕೊಳ್ಳುವ ಮಕ್ಕಳ ಸಂಖ್ಯೆಯಲ್ಲಿ ಕೊಪ್ಪಳ ಜಿಲ್ಲೆ ೦೫ ನೇ ಸ್ಥಾನದಲ್ಲಿದೆ. ಬಿಕ್ಷಾಟನೆಗೆ ತೊಡಗುವ ಮಕ್ಕಳು ಭವಿಷ್ಯದಲ್ಲಿ ಉತ್ತಮ ನಾಗರಿಕ ಪ್ರಜೆಯಾಗಿ ರೂಪುಗೊಳ್ಳಲು ಸಾಧ್ಯವಾಗದೆ, ಅಪರಾಧಿಗಳಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದೊಂದೇ ಇದಕ್ಕೆ ಸೂಕ್ತ ಪರಿಹಾರ. ಎಲ್ಲ ಮಕ್ಕಳು ಶಿಕ್ಷಣವಂತರಾದರೆ, ಇಂತಹ ಅನಿಷ್ಠ ಪದ್ಧತಿಗಳು ತಂತಾನೆ ನಿರ್ಮೂಲನೆ ಆಗುತ್ತವೆ. ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ಹೆಚ್ಚಾಗಿರುವುದಾಗಿ ದೂರುಗಳು ವ್ಯಾಪಕವಾಗಿದೆ. ಆದರೆ ಇಲ್ಲಿನ ಕಾರ್ಮಿಕ ಇಲಾಖೆ ಬಾಲಕಾರ್ಮಿಕ ಪತ್ತೆ ಕಾರ್ಯ ಸಮರ್ಪಕವಾಗಿ ಮಾಡುತ್ತಿಲ್ಲ. ಇನ್ನಾದರೂ ಕಾರ್ಮಿಕ ಇಲಾಖೆ ಬಾಲಕಾರ್ಮಿಕ ಪತ್ತೆ ದಾಳಿಯನ್ನು ಹೆಚ್ಚಿಸಬೇಕು ಎಂದು ಸೂಚನೆ ನೀಡಿದರು.
ಸಾರ್ವಜನಿಕರ ಹಿತಕ್ಕಾಗಿ ನಡೆಸಲಾಗುವ ಯಾವುದೇ ಕಾರ್ಯಕ್ರಮಗಳಿಗೆ ಸಮುದಾಯ ಸರ್ಕಾರದೊಂದಿಗೆ ಕೈಜೋಡಿಸಿದಾಗ ಮಾತ್ರ, ಕಾರ್ಯಕ್ರಮಗಳು ಯಶಸ್ಸು ಸಾಧಿಸಲು ಸಾಧ್ಯ. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಸಹಕರಿಸಬೇಕು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್ ಅವರು ಮನವಿ ಮಾಡಿಕೊಂಡರು.
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪುನಃ ಶಾಲೆಗೆ ಸೇರಿಸುವುದಾಗಲಿ, ಬಾಲ್ಯ ವಿವಾಹ ಪದ್ಧತಿ ನಿರ್ಮೂಲನೆ ಮಾಡುವುದು ಅಥವಾ ಬಾಲ ಕಾರ್ಮಿಕ ವ್ಯವಸ್ಥೆ ನಿರ್ಮೂಲನೆ ಮಾಡುವಂತಹ ಕಾರ್ಯಕ್ರಮಗಳಿಗೆ ಗ್ರಾಮ ಪಂಚಾಯತಿಗಳ ಜನಪ್ರತಿನಿಧಿಗಳು ಸರ್ಕಾರದೊಂದಿಗೆ ಕೈ ಜೋಡಿಸಲು ಸಿದ್ಧರಿದ್ದೇವೆ. ಆದರೆ ಅಧಿಕಾರಿಗಳು ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಕಾರ್ಯಕ್ರಮ ರೂಪಿಸಬೇಕು ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ವಿವಿಧ ಗ್ರಾಮ ಪಂಚಾಯತಿಗಳ ಅಧ್ಯಕ್ಷರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಕಾರ್ಯದರ್ಶಿ ಗೆಟ್ರೂಡ್ ವರ್ಗಿಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಬಿ.ಎಸ್. ಕಲಾದಗಿ, ಶಾಲೆ ಕಡೆ ನನ್ನ ನಡೆ ಕಾರ್ಯಕ್ರಮದ ಜಿಲ್ಲಾ ನೋಡಲ್ ಏಜೆನ್ಸಿಯಾಗಿರುವ ಸರ್ವೋದಯ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಾಗರಾಜ್ ದೇಸಾಯಿ, ಮಕ್ಕಳ ಸಹಾಯವಾಣಿಯ ಶರಣಪ್ಪ, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಓ ಗಳು, ಸಿಡಿಪಿಓಗಳು, ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Leave a Reply