: ಕೊಪ್ಪಳ ಜಿಲ್ಲೆಯ ವಿವಿಧ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳ ಆರೋಗ್ಯ ತಪಾಸಣೆಯನ್ನು ನಿಯಮಿತವಾಗಿ ಮಾಡಿಸಬೇಕು, ಅಗತ್ಯಬಿದ್ದಲ್ಲಿ, ಸೂಕ್ತ ವೈದ್ಯಕೀಯ ಚಿಕಿತ್ಸೆ ಕೊಡಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರದಂದು ಏರ್ಪಡಿಸಲಾಗಿದ್ದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ವಿವಿಧ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳಿಗೆ ಗುರುತಿನ ಚೀಟಿಯನ್ನು ನೀಡಬೇಕು. ನಿಯಮಿತವಾಗಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಆರೋಗ್ಯಾಧಿಕಾರಿಗಳಿಂದ ಆರೋಗ್ಯ ತಪಾಸಣೆಯನ್ನು ಮಾಡಿಸಬೇಕು. ಅಲ್ಲದೆ ಅಗತ್ಯವಿದ್ದಲ್ಲಿ, ಸೂಕ್ತ ವೈದ್ಯಕೀಯ ಚಿಕಿತ್ಸೆಯನ್ನು ಸಕಾಲದಲ್ಲಿ ಕೊಡಿಸಬೇಕು. ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಮಾಸ್ಕ್, ಹ್ಯಾಂಡ್ಗ್ಲೋಸ್, ಸಲಿಕೆ ಇತ್ಯಾದಿ ಸಾಮಗ್ರಿಗಳನ್ನು ಆಯಾ ಸ್ಥಳೀಯ ಸಂಸ್ಥೆಗಳಲ್ಲಿ ಲಭ್ಯವಿರುವ ಅನುದಾನದಲ್ಲಿ ಪೂರೈಸಬೇಕು. ಸೂಕ್ತ ಸಾಮಗ್ರಿಗಳಿಲ್ಲದೆ, ಪೌರಕಾರ್ಮಿಕರು ಕರ್ತವ್ಯ ನಿರ್ವಹಿಸುವುದು ಕಂಡುಬಂದಲ್ಲಿ, ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಲಾಗುವುದು. ಸಫಾಯಿ ಕರ್ಮಚಾರಿಗಳಿಗೆ ಕನಿಷ್ಟ ವೇತನ ಕಾಯ್ದೆಯಡಿ ವೇತನ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಅಲ್ಲದೆ ಪ್ರತಿಯೊಬ್ಬ ಪೌರಕಾರ್ಮಿಕರಿಗೆ ಕಡ್ಡಾಯವಾಗಿ ಪಿ.ಎಫ್. ಮತ್ತು ಇಎಸ್ಐ ಖಾತೆ ತೆಗೆಯಲು ಹಾಗೂ ಅದಕ್ಕೆ ಸಂಬಂಧಪಟ್ಟ ಮೊತ್ತ ಜಮಾ ಆಗುವಂತೆ ಕ್ರಮ ವಹಿಸಬೇಕು. ಈ ಕುರಿತು ಕಾಲಕಾಲಕ್ಕೆ ಪರಿಶೀಲನೆ ಮಾಡಬೇಕು. ಇದರಲ್ಲಿ ಯಾವುದೇ ಲೋಪದೋಷಗಳು ಕಂಡುಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಪೌರಕಾರ್ಮಿಕರಿಗೆ ಪುನರ್ವಸತಿ ಕಲ್ಪಿಸಲು ಹಾಗೂ ಪೌರ ಕಾರ್ಮಿಕ ಮಕ್ಕಳ ಬಗ್ಗೆ ಸಮೀಕ್ಷೆ ಮಾಡಿ ಅವರಿಗೆ ವಿದ್ಯಾರ್ಥಿವೇತನ ಮಂಜೂರು ಮಾಡಿಸಲು ಕ್ರಮ ವಹಿಸಬೇಕು. ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರು ಕರ್ತವ್ಯದ ಅವಧಿಯಲ್ಲಿ ಮರಣ ಹೊಂದಿದರೆ, ನಿಯಮಾನುಸಾರ ಅವರಿಗೆ ಪರಿಹಾರ ಧನ ನೀಡಲು ಕ್ರಮ ಕೈಗೊಳ್ಳಬೇಕು. ಮ್ಯಾನ್ಯುವಲ್ ಸ್ಕಾವೆಂಜರ್ಸ್ ಕೆಲಸ ನಿರ್ವಹಿಸುತ್ತಿದ್ದ ಇಬ್ಬರು ಪೌರಕಾರ್ಮಿಕರಿಗೆ ವ್ಯವಸ್ಥಾಪಕರು, ಡಾ||ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಕೊಪ್ಪಳ ರವರು ಸಹಾಯಧನ ಮಂಜೂರು ಮಾಡಲು ಕೂಡಲೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಿ. ಕಲ್ಲೇಶ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ಸೇರಿದಂತೆ ಆರೋಗ್ಯ ಇಲಾಖೆ, ಲೀಡ್ ಬ್ಯಾಂಕ್ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು.
ಸಫಾಯಿ ಕರ್ಮಚಾರಿಗಳಿಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿ- ಡಿಸಿ ಕನಗವಲ್ಲಿ ಸೂಚನೆ
Leave a Reply
You must be logged in to post a comment.