You are here
Home > Koppal News-1 > koppal news > ದುರ್ಬಲ ವರ್ಗಗಳ ಆಶಾಕಿರಣ – ಜಿ.ಪಂ. ಅಧ್ಯಕ್ಷ ಶೇಖರಪ್ಪ ನಾಗರಳ್ಳಿ

ದುರ್ಬಲ ವರ್ಗಗಳ ಆಶಾಕಿರಣ – ಜಿ.ಪಂ. ಅಧ್ಯಕ್ಷ ಶೇಖರಪ್ಪ ನಾಗರಳ್ಳಿ

ಕೊಪ್ಪಳ –  ಹಿಂದುಳಿದ ಮತ್ತು ಶೋಷಿತ ವರ್ಗದವರ ಧ್ವನಿಯಾಗಿ ಅವರನ್ನು ಮುಖ್ಯವಾಹಿನಿಗೆ ತರಲು ದಿಟ್ಟ ನಿರ್ಧಾರ ಕೈಗೊಳ್ಳುತ್ತಿದ್ದ ದಿವಂಗತ ಡಿ. ದೇವರಾಜ ಅರಸು ಅವರು ದುರ್ಬಲ ವರ್ಗದವರ ಆಶಾಕಿರಣವಾಗಿದ್ದರು ಎಂದು ಕೊಪ್ಪಳ ಜಿಲ್ಲಾ ಪಂಚಾಯತಿ ಅಧ್ಯಕ್ಷ ಶೇಖರಪ್ಪ ನಾಗರಳ್ಳಿ ಅವರು ಹೇಳಿದರು.
ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯವರ ಸಂಯುಕ್ತ ಆಶ್ರಯದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಡಿ. ದೇವರಾಜ ಅರಸು ಅವರ 101 ನೇ ಜನ್ಮದಿನಾಚರಣೆ ಸಮಾರಂಭದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ದೇವರಾಜ ಅರಸು ಅವರು ಮೂಲತಃ ಕೃಷಿಕ ಕುಟುಂಬದಿಂದ ಬಂದವರು, ಬಹು ಸಂಖ್ಯಾತರ ವಿರೋಧವನ್ನೂ ಲೆಕ್ಕಿಸದೆ ದಿಟ್ಟ ನಿರ್ಧಾರಗಳನ್ನು ಕೈಗೊಳ್ಳುವುದರ ಮೂಲಕ “ಉಳುವವನೇ ಹೊಲದೊಡೆಯ” ಆಗುವಂತಹ ಭೂ-ಸುಧಾರಣೆ ಕಾನೂನನ್ನು ಜಾರಿಗೆ ತಂದರು. ಈ ಮೂಲಕ ಹಿಂದುಳಿದ ಹಾಗೂ ಶೋಷಿತ ಸಮುದಾಯದವರು ನೆಮ್ಮದಿಯ ಜೀವನ ನಡೆಸಲು ಕಾರಣೀಭೂತರಾಗಿದ್ದಾರೆ. ಹಿಂದುಳಿದ ವರ್ಗಗಳು, ದುರ್ಬಲರಿಗೆ ರಾಜಕೀಯ ಹಕ್ಕಿನ ನೆಲೆಯನ್ನು ಒದಗಿಸಿದಂತಹ ಮಹಾನ್ ವ್ಯಕ್ತಿ ಅರಸು ಅವರು. ಹಿಂದುಳಿದ ವರ್ಗದವರ ಕಲ್ಯಾಣಕ್ಕಾಗಿ ಹಾಗೂ ಗ್ರಾಮೀಣ ಭಾಗದಲ್ಲಿ ಬಡ ಕೂಲಿಕಾರ್ಮಿಕರ ಬದುಕನ್ನು ಹಸನಾಗಿಸಲು ಅವರು ಹಾಕಿಕೊಟ್ಟಂತಹ ಯೋಜನೆಗಳು ಇಂದಿಗೂ ಜನಮಾನಸದಲ್ಲಿ ಉಳಿಯುವಂತಹದು. ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಹಸನಾಗಿಸಲು ಹಾಸ್ಟೆಲ್‍ಗಳನ್ನು ಸ್ಥಾಪಿಸುವ ಪರಿಕಲ್ಪನೆಯನ್ನು ಅನುಷ್ಠಾನಕ್ಕೆ ತಂದರು. ಜೀತ ಪದ್ಧತಿ, ಮಲ ಹೊರುವ ಪದ್ಧತಿಯನ್ನು ನಿಷೇಧಿಸುವ ಮೂಲಕ ಶೋಷಿತರ ಧ್ವನಿಯಾದರು. ಭಾಗ್ಯಜ್ಯೋತಿ ಮುಂತಾದ ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದಂತಹ ದೇವರಾಜ ಅರಸು ಅವರು ಎಲ್ಲ ರಾಜಕಾರಣಿಗಳಿಗೂ ಆದರ್ಶಪ್ರಾಯ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಜಾರಿಗೊಳಿಸಿರುವ ಅನ್ನಭಾಗ್ಯ, ಕ್ಷೀರಭಾಗ್ಯ, ಕೃಷಿ ಭಾಗ್ಯದಂತಹ ಜನಪರ ಯೋಜನೆಗಳು ಕೂಡ ಅರಸು ಅವರ ಚಿಂತನೆಗೆ ಹತ್ತಿರವಾದಂತಹ ಯೋಜನೆಗಳೇ ಆಗಿವೆ ಎಂದು ಜಿ.ಪಂ. ಅಧ್ಯಕ್ಷ ಶೇಖರಪ್ಪ ನಾಗರಳ್ಳಿ ಅವರು ಹೇಳಿದರು. ಕೊಪ್ಪಳ ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯದ್ ಜುಲ್ಲು ಖಾದ್ರಿ, ನಗರಸಭೆ ಅಧ್ಯಕ್ಷ ಮಹೇಂದ್ರ ಚೋಪ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ತ್ಯಾಗರಾಜನ್, ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಭೀಮಣ್ಣ ಅಗಸಿ ಮುಂದಿನ, ಜಿ.ಪಂ. ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಮಾದರ್, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾ ಅಧಿಕಾರಿ ಬಿ. ಕಲ್ಲೇಶ್ ,ಗರಸಭೆ ಸದಸ್ಯ ಅಮ್ಜದ್ ಪಟೇಲ್ ಉಪಸ್ಥಿತರಿದ್ದರು.
d2 devaraj_urs_100_birthday

Leave a Reply

Top