ಬಾಲಕಾರ್ಮಿಕ ಮುಕ್ತ ಜಿಲ್ಲೆಯಾಗಿಸಲು ಕಟ್ಟುನಿಟ್ಟಿನ ಕ್ರಮ

 ಕೊಪ್ಪಳ ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಹಾಗೂ ವಿವಿಧ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನಾ ಕ್ರಿಯಾ ಯೋಜನೆ ಅನುಷ್ಠಾನ ಪ್ರಗತಿ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರದಂದು ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಕಾರ್ಯಕಾರಿಣಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ಇನ್ನೂ ವ್ಯಾಪಕವಾಗಿ ಅಸ್ತಿತ್ವದಲ್ಲಿರುವ ಬಗ್ಗೆ ಕೇಳಿಬರುತ್ತಿದೆ.  ಈ ನಿಟ್ಟಿನಲ್ಲಿ ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸುವ ಉದ್ದೇಶದೊಂದಿಗೆ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಹಾಗೂ ಸಂಬಂಧಪಟ್ಟ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.  ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಕಾರ್ಮಿಕ ಅಧಿಕಾರಿ ಶಾಮರಾವ್ ಅವರು, ೧೪ ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಕ ಮಾಡಿಕೊಳ್ಳುವವರ ವಿರುದ್ಧ ಇದೀಗ ಕಾನೂನು ಇನ್ನಷ್ಟು ಕಠಿಣಗೊಂಡಿದೆ. ೧೮ ವರ್ಷದ ಮಕ್ಕಳನ್ನು ಅಪಾಯಕಾರಿ ಉದ್ದಿಮೆಯಲ್ಲಿ ನೇಮಿಸಿಕೊಂಡರೂ ಸಹ ಬಾಲಕಾರ್ಮಿಕ ಪದ್ಧತಿ ನಿಷೇಧ ಕಾನೂನು ಅನ್ವಯಿಸುತ್ತದೆ.  ಬಾಲಕಾರ್ಮಿಕರನ್ನು ಕೆಲಸಕ್ಕೆ ಇರಿಸಿಕೊಳ್ಳುವವರ ಮೇಲೆ ಇಲಾಖೆ ಅಧಿಕಾರಿಗಳು ನೇರವಾಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿ, ಎಫ್‌ಐಆರ್ ದಾಖಲಿಸಲು ಕಾನೂನು ತಿದ್ದುಪಡಿಯಾಗಿದೆ.  ಈ ಕುರಿತಂತೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ನಿಯೋಜಿತ ಅಧಿಕಾರಿಗಳಿಗೆ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ತರಬೇತಿ ನೀಡುವ ಅಗತ್ಯವಿದೆ.  ಶೀಘ್ರದಲ್ಲೇ ತರಬೇತಿ ಆಯೋಜಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.ಸಮೀಕ್ಷಾ ವರದಿ ಬಗ್ಗೆ ಪರಿಶೀಲಿಸಿ : ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಕುರಿತಂತೆ ಸಮೀಕ್ಷೆ ಈಗಾಗಲೆ ಪೂರ್ಣಗೊಂಡಿದೆ.  ವರದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿ, ಖಚಿತಪಡಿಸಿಕೊಳ್ಳುವ ಅಗತ್ಯವಿದೆ.  ಸಮೀಕ್ಷಾ ವರದಿಯಲ್ಲಿ ಶಾಲೆಯಿಂದ ಹೊರಗುಳಿಯಲು ಕಾರಣವನ್ನು ಮನೆಗೆಲಸ ಎಂದು ನಮೂದಿಸಲಾಗಿದ್ದು, ಈ ಬಗ್ಗೆಯೂ ಪರಿಶೀಲಿಸುವ ಅಗತ್ಯವಿದೆ.  ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಆಯಾ ಗ್ರಾಮ ಪಂಚಾಯತಿ, ಸ್ಥಳೀಯ ಸಂಸ್ಥೆಗಳಿಂದ ಸಮರ್ಪಕ ವರದಿಯನ್ನು ಅಕ್ಟೋಬರ್ ತಿಂಗಳಿನ ಅಂತ್ಯದೊಳಗೆ ಪಡೆಯಬೇಕು.  ವರದಿ ಬಂದ ನಂತರ ಪುನರ್ವಸತಿ ಯೋಜನೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ತಿಳಿಸಿದರು.
ಆರೋಗ್ಯ ಇಲಾಖೆ ಸಹಕಾರ : ಬಾಲಕಾರ್ಮಿಕರನ್ನು ಪತ್ತೆ ಹಚ್ಚಿದ ಸಂದರ್ಭದಲ್ಲಿ ವಯಸ್ಸಿನ ದೃಢೀಕರಣ ನೀಡಲು ಆರೋಗ್ಯ ಇಲಾಖೆ ಸಮರ್ಪ

ಕ ಸಹಕಾರ ನೀಡುತ್ತಿಲ್ಲ.  ಮಕ್ಕಳ ವಯಸ್ಸಿನ ಬಗ್ಗೆ ಆಸ್ಪತ್ರೆಗಳಲ್ಲಿರುವ ದಂತ ವೈದ್ಯರು ಅಥವಾ ಎಂ.ಬಿ.ಬಿ.ಎಸ್. ವೈದ್ಯರು ಪ್ರಮಾಣ ಪತ್ರ ನೀಡಬೇಕು ಎಂಬ ನಿಯಮವಿದೆ.  ಆದಾಗ್ಯೂ ವೈದ್ಯರು ಸಹಕಾರ ನೀಡುತ್ತಿಲ್ಲ. ಇದರಿಂದಾಗಿ ಕಾನೂನು ಉಲ್ಲಂಘಿಸುವವರ ಮೇಲೆ ದೂರು ದಾಖಲಿಸಲು ತೊಂದರೆ ಉಂಟಾಗುತ್ತಿದೆ ಎಂದು ಬಾಲಕಾರ್ಮಿಕ ಯೋಜನಾ ಸಂಘ ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದರು.  ಈ ಕುರಿತಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಸೂಕ್ತ ಸೂಚನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ಎಂ.ಕೆ. ನಿಂಗಪ್ಪ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡರ, ಜಿಲ್ಲಾ ಕಾರ್ಮಿಕ ಅಧಿಕಾರಿ ಶಾಮರಾವ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error

Related posts

Leave a Comment