You are here
Home > Koppal News-1 > koppal news > ಹೈದ್ರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆಗೆ ನಿರ್ಧಾರ

ಹೈದ್ರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆಗೆ ನಿರ್ಧಾರ

 ಹೈದ್ರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆಯನ್ನು ಸೆ. ೧೭ ರಂದು ಸಡಗರ ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಕೊಪ್ಪಳ ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಅವರು ಹೇಳಿದರು.

ಹೈದ್ರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆ ಆಚರಿಸುವ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರದಂದು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ದೇಶಕ್ಕೆ ೧೯೪೭ ರ ಆಗಸ್ಟ್ ೧೫ ರಂದು ಸ್ವಾತಂತ್ರ್ಯ ದೊರೆಯಿತು. ಆದರೆ ಹೈದ್ರಾಬಾದ್ ನಿಜಾಮರ ಆಡಳಿತಕ್ಕೆ ಒಳಪಟ್ಟ ಪ್ರದೇಶಕ್ಕೆ ೧೯೪೮ ರ ಸೆ. ೧೭ ರಂದು ಅಂದರೆ ಒಂದು ವರ್ಷ ತಡವಾಗಿ ಸ್ವಾತಂತ್ರ್ಯ ದೊರೆಯಿತು. ಇದರ ಸವಿ ನೆನಪಿಗಾಗಿ ಹೈದ್ರಾಬಾದ್-ಕರ್ನಾಟಕ ಪ್ರದೇಶಗಳಲ್ಲಿ ವಿಮೋಚನಾ ದಿನವನ್ನಾಗಿ ಆಚರಿಸಲಾಗುತ್ತಿದೆ. ಇದನ್ನು ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಷ್ಟೆ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಸೆ. ೧೭ ರಂದು ಬೆಳಿಗ್ಗೆ ೮ ಗಂಟೆಗೆ ಜಿಲ್ಲಾಡಳಿತ ಭವನ ಆವರಣದಲ್ಲಿ ಜಿಲ್ಲಾಧಿಕಾರಿಗಳಿಂದ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ಬೆ. ೯ ಗಂಟೆಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಉನ್ನತ ಶಿಕ್ಷಣ ಸಚಿವರಾದ ಬಸವರಾಜ ರಾಯರಡ್ಡಿ ಅವರು ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸುವರು. ಶಾಲಾ ಮಕ್ಕಳು, ಎನ್.ಸಿ.ಸಿ., ಪೊಲೀಸ್ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಂದ ಆಕರ್ಷಕ ಪಥಸಂಚಲನ, ಅಲ್ಲದೆ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಅಂದು ಸಂಜೆ ೫-೩೦ ಗಂಟೆಗೆ ನಗರದ ಸಾರ್ವಜನಿಕ ಮೈದಾನದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.ಸಭೆಯಲ್ಲಿ ಉಪವಿಭಾಗಾಧಿಕಾರಿ ಐ.ಎಸ್. ಶಿರಹಟ್ಟಿ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಬಸವರಾಜ ಶೀಲವಂತರ್, ಶಿವಾನಂದ ಹೊದ್ಲೂರ, ಮುಂತಾದ ಗಣ್ಯರು ಭಾಗವಹಿಸಿ ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಿದರು.

Leave a Reply

Top