ಗ್ಯಾರಂಟಿ ಯೋಜನೆಗಳು ಸಮಾಜದ ಕಟ್ಟಕಡೆ ವ್ಯಕ್ತಿಗಳಿಗೂ ತಲುಪಬೇಕು: ಹೆಚ್.ಎಂ.ರೇವಣ್ಣ

0

Get real time updates directly on you device, subscribe now.

ಕೊಪ್ಪಳ   ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಕಾರ್ಯಕ್ರಮಗಳಾದ ಪಂಚ ಗ್ಯಾರಂಟಿ ಯೋಜನೆಗಳು ಸಮಾಜದ ಕಟ್ಟಕಡೆ ವ್ಯಕ್ತಿಗಳಿಗೂ ತಲುಪಬೇಕು ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಹೇಳಿದರು.
ಅವರು ಶನಿವಾರ ಕೊಪ್ಪಳ ಜಿಲ್ಲಾ ಪಂಚಾಯತ್ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಕೊಪ್ಪಳ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.
ಜನ ಸಾಮಾನ್ಯರ ಏಳಿಗೆಗಾಗಿ ರಾಜ್ಯ ಸರ್ಕಾರವು ಜಾರಿಗೆ ತಂದ ಗೃಹಲಕ್ಷ್ಮಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆ ಒಳಗೊಂಡ ಪಂಚ ಗ್ಯಾರಂಟಿ ಯೋಜನೆಗಳು ಜನಪರ ಕಾರ್ಯಕ್ರಮಗಳಾಗಿದ್ದು, ಬಡ ಮತ್ತು ಮಾಧ್ಯಮ ವರ್ಗದ ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ತುಂಬಾ ಸಹಕಾರಿಯಾಗಿದೆ. ಯಾವುದೇ ಮಧ್ಯವರ್ತಿಗಳಿಲ್ಲದೇ ರಾಜ್ಯ ಶೇ.98ರಷ್ಟು ಜನರಿಗೆ ನೇರವಾಗಿ ಐದು ಗ್ಯಾರಂಟಿ ಯೋಜನೆಗಳ ಲಾಭ ಸಿಗುತ್ತಿದೆ. ರಾಜ್ಯ ಸರ್ಕಾರದ ಸಾಮಾಜಿಕ ಪರಿವರ್ತನೆಯ ಕಾರ್ಯಕ್ರಮಗಳಿಂದ ಮಹಿಳೆಯರ ಸಬಲೀಕರಣಕ್ಕೆ ಅನುಕೂಲವಾಗಿದೆ ಎಂದರು.
ಗೃಹಲಕ್ಷ್ಮಿ ಯೋಜನೆ ಯೋಜನೆಯಡಿ ರಾಜ್ಯದ 1.22 ಕೋಟಿ ಕುಟುಂಬದ ಮನೆ ಯಜಮಾನಿಯರಿಗೆ ಮಾಸಿಕ ರೂ. 2 ಸಾವಿರದಂತೆ ಒಟ್ಟು 32,645 ಕೋಟಿ ರೂ.ಗಳನ್ನು ನೀಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ 1.61 ಕೋಟಿ ವಿದ್ಯುತ್ ಗ್ರಾಹಕರಿಗೆ 200 ಯುನಿಟ್ ಉಚಿತ ವಿದ್ಯುತ್ ಸೌಲಭ್ಯ ದೊರೆತಿದ್ದು, 11031 ಕೋಟಿ ರೂ.ಗಳನ್ನು ಈ ಯೋಜನೆಗೆ ವ್ಯಯ ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಹೆಚ್ಚುವರಿ ಅಕ್ಕಿಗಾಗಿ 55.47 ಕೋಟಿ ಜನರಿಗೆ 9040 ಕೋಟಿ ರೂ.ಗಳನ್ನು ನೀಡಲಾಗಿದೆ. ಶಕ್ತಿಯೋಜನೆಯಡಿ ಇಲ್ಲಿಯವರೆಗೆ 336.55 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದು, ಇದಕ್ಕಾಗಿ 8142 ಕೋಟಿ ರೂ.ಗಳ ವೆಚ್ಚವಾಗಿದೆ. ಯುವನಿಧಿ ಯೋಜನೆಯಡಿ 1.81 ಕೋಟಿ ವಿದ್ಯಾವಂತ ನಿರುದ್ಯೋಗಿಗಳಿಗೆ 141 ಕೋಟಿ ರೂ.ಗಳ ಫಲಾನುಭವಿಗಳಿಗೆ ನಿರುದ್ಯೋಗ ಭತ್ಯೆ ನೀಡಲಾಗಿದ್ದು, ಈ ಗ್ಯಾರಂಟಿ ಯೋಜನೆಗಳು ರಾಜ್ಯದ ಜನರ ಮನಗಳನ್ನು ಗೆದ್ದಿವೆ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿ ಸದಸ್ಯರು ಜನರ ಮನೆ-ಮನೆಗೆ ಭೇಟಿ ನೀಡಿ ಅವರಿಗೆ ಯೋಜನೆಗಳ ಲಾಭ ಸಿಗುತ್ತಿದೆಯೋ ಅಥವಾ ಇಲ್ಲ ಎಂಬುವುದ ಬಗ್ಗೆ ಪರಿಶೀಲಿಸಬೇಕು. ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಉಂಟಾಗುತ್ತಿರುವ ಸಣ್ಣ-ಪುಟ್ಟ ತಾಂತ್ರಿಕ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸುವ ನಿಟ್ಟಿನಲ್ಲಿ ಸಮಿತಿಯ ಪದಾಧಿಕಾರಿಗಳು ಇಲಾಖಾ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಎಲ್ಲಾ ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಲಾಭ ದೊರಕಿಸಿ, ಐದು ಗ್ಯಾರಂಟಿ ಯೋಜನೆಗಳಡಿ ಶೇ.100ರಷ್ಟು ಪ್ರಗತಿ ಸಾಧಿಸಲು ಶ್ರಮಿಸಬೇಕು ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಉತ್ತಮ ಪ್ರಗತಿಯಾಗಿದೆ. ಇಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಗಳು ಹೆಚ್ಚಾಗಿ ನಡೆಯುತ್ತಿವೆ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು, ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು. ಶಾಲಾ-ಕಾಲೇಜು ಮಕ್ಕಳಿಗೆ ಯಾವುದೇ ರೀತಿಯ ಬಸ್ ವ್ಯವಸ್ಥೆಗೆ ತೊಂದರೆಯಾಗದಂತೆ ಕ.ಕ.ರ.ಸಾ.ನಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಲು ಕಾರ್ಯಕ್ರಮ ರೂಪಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕೆಂದು ಸೂಚನೆ ನೀಡಿದರು.
ಸಭೆಯಲ್ಲಿ ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ, ಉಪಾಧ್ಯಕ್ಷರಾದ ಎಸ್.ಬಿ ಖಾದ್ರಿ, ಅಮರೇಶಪ್ಪ ಎಸ್.ಜಿ., ನಾಗರಜ ಅರಳಿ ಹಾಗೂ ಮರ್ದಾನ ಸಾಬ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರು ಹಾಗೂ ತಾಲ್ಲೂಕಾ ಅಧ್ಯಕ್ಷರು, ಸದಸ್ಯರು ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Leave A Reply

Your email address will not be published.

error: Content is protected !!