ಡಿ.07 & 08ರಂದು ಪಿ.ಡಿ.ಓ ನೇಮಕಾತಿ ಪರೀಕ್ಷೆ: ನಿಷೇಧಾಜ್ಞೆ ಜಾರಿ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ (ಪಿಡಿಓ) ಗ್ರೂಪ ಸಿ ವೃಂದದ 150 ಹುದ್ದೆಗಳ ನೇಮಕಾತಿ ಹುದ್ದೆಗಳ ನೇಮಕಾತಿಗಾಗಿ ಡಿಸೆಂಬರ್ 07 ಮತ್ತು 08ರಂದು ಜಿಲ್ಲೆಯ ಕೊಪ್ಪಳ ತಾಲೂಕಿನ 22 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳನ್ನು ಸುಗಮ ಮತ್ತು ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಅಂತರದ ಪ್ರದೇಶದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಪಿ.ಡಿ.ಓ ನೇಮಕಾತಿ ಪರೀಕ್ಷೆಗಳು ಡಿಸೆಂಬರ್ 07 ರಂದು ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ ಕಡ್ಡಾಯ ಕನ್ನಡ ಪರೀಕ್ಷೆ ಹಾಗೂ ಡಿ.08ರಂದು ಬೆಳಿಗ್ಗೆ 10 ರಿಂದ ಸಾಯಂಕಾಲ 4 ಗಂಟೆಯವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ. ನಿಷೇಧಾಜ್ಞೆ ಜಾರಿಯನ್ವಯ ಪರೀಕ್ಷಾ ಮೌಲ್ಯಮಾಪನ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ. ಮೊಬೈಲ್, ಪೇಜರ್, ಜರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಮೌಲ್ಯಮಾಪನ ಕೇಂದ್ರದ ಹಾಗೂ ನಿಯೋಜಿತ ಶಿಕ್ಷಕರನ್ನು ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಿದೆ. 200 ಮೀಟರ್ ಪರೀಕ್ಷಾ ಮೌಲ್ಯಮಾಪನ ಕೇಂದ್ರದ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ.
Comments are closed.