9 ವಿ ಶ್ವ ವಿದ್ಯಾಲಯಗಳನ್ನು ಮುಚ್ಚಲು ತೀರ್ಮಾನ ಖಂಡನೀಯ ಎಐಡಿಎಸ್ಓ

Get real time updates directly on you device, subscribe now.

ಕೊಪ್ಪಳ ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯದ 9 ವಿಶ್ವ ವಿದ್ಯಾಲಯಗಳನ್ನು ಮುಚ್ಚಲು ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ತೀರ್ಮಾನಿಸಿದ್ದು, ಸರ್ಕಾರದ ಈ ನಡೆಯನ್ನು ಖಂಡಿಸುವುದಾಗಿ ಎಐಡಿಎಸ್ಓ ಜಿಲ್ಲಾ ಸಂಚಾಲಕ ಗಂಗರಾಜ ಅಳ್ಳಳ್ಳಿ ತಿಳಿಸಿದ್ದಾರೆ.
ವಿಶ್ವವಿದ್ಯಾಲಯಗಳು ಜ್ಞಾನವೃದ್ದಿಯ ಪೀಠಗಳು ಎಂಬ ಮೂಲ ಪರಿಕಲ್ಪನೆಯನ್ನೇ ಗಾಳಿಗೆ ತೂರಿ ಹಿಂದಿನ ಬಿಜೆಪಿ ಸರ್ಕಾರವು ಜಿಲ್ಲೆಗೊಂದು ವಿಶ್ವವಿದ್ಯಾಲಯಗಳನ್ನು ಪ್ರಾರಂಭಿಸಿತು. ಯಾವುದೇ ಶಿಕ್ಷಣ ತಜ್ಞರ ಅಭಿಪ್ರಾಯಗಳನ್ನು ಕೇಳದೆ, ಅಪ್ರಜಾತಾಂತ್ರಿಕವಾಗಿ ಈ ವಿಶ್ವವಿದ್ಯಾಲಯಗಳನ್ನು ಪ್ರಾರಂಭಿಸಲಾಯಿತು. ನೃಪತುಂಗ, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ ಎಂಬ ಪಟ್ಟ ಕಟ್ಟಿ, ಇವುಗಳನ್ನು ಸ್ವ ಹಣಕಾಸು ಸಂಸ್ಥೆಗಳನ್ನಾಗಿ ಮಾಡಿ ಮೂರು ಪಟ್ಟು ಶುಲ್ಕವನ್ನು ಹೆಚ್ಚಿಸಲಾಗಿತ್ತು. ಈ ಕುರಿತಾಗಿಯೂ ಎ.ಐ.ಡಿ.ಎಸ್.ಓ ಅನೇಕ ಬಾರಿ ಪ್ರತಿರೋಧ ವ್ಯಕ್ತಪಡಿಸಿತ್ತು. ಒಂದು ವಿಶ್ವವಿದ್ಯಾಲಯಕ್ಕೆ ತಲಾ 2 ಕೋಟಿ ಅನುದಾನವನ್ನು ಮಾತ್ರ ನಿಗದಿಪಡಿಸಲಾಯಿತು.
ಸರ್ಕಾರದ ಈ ಅವೈಜ್ಞಾನಿಕ ನಡೆಯನ್ನು ಎಐಡಿಎಸ್ಓ ಪ್ರಶ್ನಿಸಿತ್ತು. ಹಿಂದಿನ ಬಿಜೆಪಿ ಸರ್ಕಾರದ ರೀತಿಯಲ್ಲೇ ಕಾಂಗ್ರೆಸ್ ಸರ್ಕಾರವು ಎಲ್ಲ ಪ್ರಜಾತಾಂತ್ರಿಕ ಪ್ರಕ್ರಿಯೆಗಳನ್ನು ಗಾಳಿಗೆ ತೂರಿ ಕೇವಲ ತನ್ನ ಸಂಪುಟ ಸಭೆಯ ಉಪಸಮಿತಿಯ ಮೂಲಕ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರವನ್ನು ಕೈಗೊಂಡಿದೆ. ಸರ್ಕಾರದ ಈ ನಡೆಯನ್ನು ಎಐಡಿಎಸ್‌ಓ ಉಗ್ರವಾಗಿ ಖಂಡಿಸುತ್ತದೆ. ಮುಚ್ಚಲ್ಪಡುತ್ತಿರುವ 9 ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು, ಬೋಧಕರು ಹಾಗೂ ಇತರೆ ಸಿಬ್ಬಂದಿಗಳ ಹೊಣೆ ಯಾರದ್ದು ಎಂಬ ಪ್ರಶ್ನೆಯನ್ನು ಸರ್ಕಾರದ ಮುಂದಿಡುತ್ತಿದೆ. ಶಿಕ್ಷಣ ಕ್ಷೇತ್ರದ ಯಾವುದೇ ನಿರ್ಧಾರವನ್ನು ಏಕಪಕ್ಷೀಯವಾಗಿ ಕೈಗೊಳ್ಳದೆ, ಬೋಧಕರು, ಪಾಲಕರು, ವಿದ್ಯಾರ್ಥಿಗಳು, ಶಿಕ್ಷಣ ತಜ್ಞರನ್ನೊಳಗೊಂಡ ಪ್ರಜಾತಾಂತ್ರಿಕ ಪ್ರಕ್ರಿಯೆಯನ್ನು ಅನುಸರಿಸುವಂತೆ ಸರ್ಕಾರವನ್ನು ಆಗ್ರಹಿಸುತ್ತದೆ ಎಐಡಿಎಸ್ಓ ಜಿಲ್ಲಾ ಸಂಚಾಲಕ ಗಂಗರಾಜ ಅಳ್ಳಳ್ಳಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!