ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಹಾಗೂ ಕಾಮಗಾರಿಗಳ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಿ – ಜಿಲ್ಲಾಧಿಕಾರಿ ನಲಿನ್ ಅತುಲ್

Get real time updates directly on you device, subscribe now.

ಪ್ರವಾಸಿ ತಾಣಗಳಲ್ಲಿನ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆ
ಕೊಪ್ಪಳ ಮೇ : ಕೊಪ್ಪಳ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಲು ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಪ್ರವಾಸಿ ತಾಣಗಳ ಬಳಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಕರೆದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಕೊಪ್ಪಳ ಜಿಲ್ಲೆಯು ಐತಿಹಾಸಿಕ ಪ್ರವಾಸಿ ತಾಣಗಳನ್ನು ಹೊಂದಿದ್ದು, ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸಬೇಕು.  ಬ್ರ್ಯಾಂಡ್ ಕೊಪ್ಪಳ ಕಾರ್ಯಕ್ರಮದಡಿಯಲ್ಲಿ  ಜಿಲ್ಲೆಗೆ ದೇಶಿಯ ಮತ್ತು ವಿದೇಶಿಯ ಪ್ರವಾಸಿಗರನ್ನು ಸೆಳೆಯುವ ಕೆಲಸವಾಗಬೇಕು. ಈ ಬಗ್ಗೆ ಜಿಲ್ಲೆಯ ಐತಿಹಾಸಿಕ ತಾಣಗಳನ್ನು ವೆಬ್ ಸೈಟ್ ಅಥವಾ ಆನ್‌ಲೈನ್ ಮೂಲಕ ಹೆಚ್ಚಿನ ಪ್ರಚಾರಪಡಿಸಿ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಜಿಲ್ಲೆಯ ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಸಮಗ್ರ ಅಭಿವೃದ್ಧಿ, ಸುಪ್ರಸಿದ್ಧ ಧಾರ್ಮಿಕ ಮತ್ತು ಐತಿಹಾಸಿಕ ಕ್ಷೇತ್ರಗಳಾದ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಸಮಗ್ರ ಅಭಿವೃದ್ಧಿ, ಕನಕಗಿರಿಯ ಶ್ರೀ ಕನಕಾಚಲಪತಿ ದೇವಸ್ಥಾನದ ಅಭಿವೃದ್ಧಿ, ಹಿರೇಬೇಣಕಲ್ ಗ್ರಾಮದ ಮೋರೆರ್ ಬೆಟ್ಟದ ಅಭಿವೃದ್ಧಿ, ಇಟಗಿಯ ಮಹಾದೇವ ಕೊಪ್ಪಳ ಕೋಟೆ, ಹುಲಿಕೆರೆ ಅಭಿವೃದ್ಧಿ ಕಾಮಗಾರಿಗಳು ಸೇರಿದಂತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಪ್ರವಾಸಿ ತಾಣಗಳ ಬಳಿ ಕೈಗೊಂಡಿರುವ ಎಲ್ಲಾ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಿ ಎಂದರು.
ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಗುರುತಿಸಬೇಕು ಹಾಗೂ ಅವುಗಳ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ರೂ. 100 ಕೋಟಿ ಅನುದಾನದಲ್ಲಿ ಅಂಜನಾದ್ರಿಯಲ್ಲಿ ಪ್ರವಾಸಿ ಮಂದಿರ ನಿರ್ಮಾಣ, ಶಾಪಿಂಗ್ ಕಾಂಪ್ಲೆಕ್ಸ್ ಶೌಚಾಲಯ ನಿರ್ಮಾಣ, ಪ್ರದಕ್ಷಿಣಾ ಪಥ ಹಾಗೂ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ಈ ಎಲ್ಲಾ ಕಾಮಗಾರಿಗಳ ಪ್ರಗತಿಗೆ ವೇಗ ನೀಡಬೇಕು. ಇದರ ಜೊತೆಗೆ ಇತರೆ ಕಾಮಗಾರಿಗಳಿಗೆ ಸರ್ಕಾರವು ಮತ್ತೆ ರೂ. 100 ಕೋಟಿ ಅನುದಾನ ನೀಡಿದ್ದು, ಯೋಜನಾ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಿ, ಅನುಮೋದನೆ ಬಳಿಕ ಹೊಸ ಕಾಮಗಾರಿಗಳ ಅನುಷ್ಠಾನಕ್ಕಾಗಿ ಕ್ರಮ ವಹಿಸಬೇಕು. ಇದಲ್ಲದೆ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನ ಹಾಗೂ ಕನಕಗಿರಿಯ ಕನಕಾಚಲಪತಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಮತ್ತು ಒಂದು ಜಿಲ್ಲೆ-ಒಂದು ತಾಣ ಯೋಜನೆ ಅಡಿಯಲ್ಲಿ ಶ್ರೀ ಇಟಗಿ ಮಹಾದೇವ ದೇವಾಲಯವನ್ನು ಸಾರ್ವಜನಿಕ ಸಹಭಾಗಿತ್ವ ಮಾದರಿಯಲ್ಲಿ(ಪಿಪಿಪಿ) ಸಮಗ್ರ ಅಭಿವೃದ್ಧಿ ಮಾಡಬೇಕು. ಹಿರೇಬೆಣಕಲ್ ಗ್ರಾಮದ ಮೋರೆರ ಬೆಟ್ಟದ ಸುತ್ತಮುತ್ತಲಿನ ಪ್ರದೇಶವು ಭಾರತೀಯ ಸರ್ವೇಕ್ಷಣ ಇಲಾಖೆ ಹಂಪಿ ವೃತ್ತ, ಅರಣ್ಯ ಇಲಾಖೆಗೆ ಒಳಪಟ್ಟಿದ್ದು, ಈ ಬೆಟ್ಟದ ಅಭಿವೃದ್ಧಿ ದೃಷ್ಠಿಯಿಂದ ಈ ಬೆಟ್ಟಕ್ಕೆ ತೆರಳಲು ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವುದು. ಬೆಟ್ಟಕ್ಕೆ ತೆರಳುವ ಮಾರ್ಗದಲ್ಲಿ ಸೈನೇಜ್ ಮತ್ತು ಹೋರ್ಡಿಂಗ್ ಅಳವಡಿಕೆ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ನಿರ್ಮಾಣ ಹಾಗೂ ಮುಂತಾದ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಯೋಜನಾ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ, ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾವ್ಯ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಕೊಪ್ಪಳ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಡಿ.ನಾಗರಾಜ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ತಹಶಿಲ್ದಾರರು ಹಾಗೂ ಕಾಮಗಾರಿಗಳ ಅನುಷ್ಠಾನ ಏಜೆನ್ಸಿಯವರು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!