ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡಿದ್ರೆ ಪರವಾಗಿ ರದ್ದು- ಸಚಿವ ಶಿವರಾಜ್ ತಂಗಡಗಿ ಖಡಕ್ ಎಚ್ಚರಿಕೆ

Get real time updates directly on you device, subscribe now.

ಮಾರುಕಟ್ಟೆಯಲ್ಲಿ ಕೃತಕ ಅಭಾವ ಸೃಷ್ಟಿಸಿದ್ರೆ, ಪರಿಣಾಮ ನೆಟ್ಟಗಿರಲ್ಲ ಎಂದ ಸಚಿವ

ಜಿಲ್ಲೆಯಲ್ಲಿ ರಸಗೊಬ್ಬರದ ಕೊರತೆ ಇಲ್ಲ ಎಂದು ಸ್ಪಷ್ಟನೆ

ಕೊಪ್ಪಳ: ಜು.29

ಜಿಲ್ಲೆಯಲ್ಲಿ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡುವುದು ಕಂಡು ಬಂದರೆ ಅಂತಹ ರಸಗೊಬ್ಬರ ಅಂಗಡಿಗಳ ಪರವಾನಗಿ ರದ್ದುಪಡಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರೂ ಆದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಎಸ್. ತಂಗಡಗಿ ಅವರು ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲೆಯ ರಸಗೊಬ್ಬರ ಮಾರಾಟಗಾರರಿಗೆ ಕರೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಸಗೊಬ್ಬರ ಮಾರಾಟಗಾರರು ಅನಧಿಕೃತವಾಗಿ ರಸಗೊಬ್ಬರವನ್ನು ಸಂಗ್ರಹಿಸಿಇಟ್ಟುಕೊಂಡು ಮಾರುಕಟ್ಟೆಯಲ್ಲಿ ಕೃತಕ ಅಭಾವ ಸೃಷ್ಟಿಸುವುದು ಮತ್ತು ನಿಗದಿತ ದರಕ್ಕಿಂತ ಒಂದೇ ಒಂದು ರೂ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡು ಬಂದರೆ ಅಂತಹವರ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು. ರಸಗೊಬ್ಬರ ಅಂಗಡಿಗಳ ಮುಂದೆ ರೈತರು ಸಾಲುಗಟ್ಟಿ ನಿಲ್ಲುವಂತೆ ಮಾಡಿ ಬೇಡಿಕೆ ಹೆಚ್ಚಾಗಿದೆ ಎನ್ನುವಂತೆ ಬಿಂಬಿಸುವ ಕೆಲಸ ಮಾಡುವುದನ್ನು ಸಹಿಸುವುದಿಲ್ಲ ಎಂದು ಹೇಳಿದರು.

ಜಿಲ್ಲೆಯಲ್ಲಿ ರಸಗೊಬ್ಬರ ಸುಸೂತ್ರವಾಗಿ ವಿತರಣೆಯಾಗುವ ಸಂಬಂಧ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ನಿಗಾವಹಿಸಲಿದ್ದು ತಾಲ್ಲೂಕು ಮಟ್ಟದಲ್ಲಿ ತಹಸೀಲ್ದಾರ್ ಗಳು ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳನ್ನೊಳಗೊಂಡು ನೋಡಲ್ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗುತ್ತಿದೆ ಎಂದರು.

ರಸಗೊಬ್ಬರ ಪೂರೈಕೆ ಬಗ್ಗೆ ರೈತರು ಯಾರು ಆತಂಕ ಪಡಬೇಕಾಗಿಲ್ಲ. ರೈತರು ತಮ್ಮ ಅವಶ್ಯಕತೆ ತಕ್ಕಂತೆ ರಸಗೊಬ್ಬರ ತೆಗೆದುಕೊಳ್ಳಬೇಕು. ಯಾರು ಆತಂಕಕ್ಕೆ ಒಳಗಾಗಿ ಮೊದಲೆ ರಸಗೊಬ್ಬರ ಸಂಗ್ರಹಕ್ಕೆ ಮುಂದಾಗುವ ಅಗತ್ಯ ಇಲ್ಲ. ಈ ತಿಂಗಳ 31 ರವರೆಗೆ 800 ಮೆಟ್ರಿಕ್ ಟನ್ ಹಾಗೂ ಆಗಸ್ಟ್ 1 ಮತ್ತು 3ರವರೆಗೆ ತಲಾ 1200 ಮೇಟ್ರಿಕ್ ಟನ್ ರಸಗೊಬ್ಬರ ಜಿಲ್ಲೆಗೆ ಬರಲಿದೆ. ಹಾಗಾಗಿ ಈ ಮಾಹಿತಿಯನ್ನು ರೈತರಿಗೆ ತಿಳಿಸಬೇಕೆಂದು ರಸಗೊಬ್ಬರ ವಿತರಕರಿಗೆ ಸಚಿವರು ಹೇಳಿದರು.

ಜಿಲ್ಲೆಯಲ್ಲಿ ನಕಲಿ ಗೊಬ್ಬರ ಮಾರಾಟ ಮಾಡುವುದು ಕಂಡು ಬಂದರೆ ಸಹಿಸುವುದಿಲ್ಲ. ಈಗಾಗಲೇ ಒಂದು ನಕಲಿ ಗೊಬ್ಬರ ಮಾರಾಟ ಪ್ಯಾಕ್ಟರಿ ಬಂದ್ ಮಾಡಲಾಗಿದೆ. ರೈತರಿಗೆ ಹಾನಿಯಾದರೆ ನಾವು ಸಹಿಸಿಕೊಳ್ಳುವುದಿಲ್ಲ. ರೈತರು ಯಾರು ಜಿಲ್ಲೆಯಲ್ಲಿ ಆತಂಕ ಪಡಬೇಕಿಲ್ಲ. ಆಗಸ್ಟ್ ತಿಂಗಳಲ್ಲಿ ನಮಗೆ ಸಾಕಾಗುವಷ್ಟು ರಸಗೊಬ್ಬರ ಜಿಲ್ಲೆಗೆ ಬರಲಿದೆ. ರೈತರಿಗೆ ಸರಿಯಾಗಿ ರಸಗೊಬ್ಬರ ವಿತರಣೆಯಾಗುತ್ತಿರುವ ಮಾಹಿತಿಯನ್ನು ಕೃಷಿ ಇಲಾಖೆಯ ಅಧಿಕಾರಿಗಳು ಆಗಾಗ ನನಗೆ ನೀಡಬೇಕೆಂದು ಸೂಚನೆ ನೀಡಿದರು.

ಸಭೆಯಲ್ಲಿ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯಕಾಯನಿರ್ವಾಹಕ ಅಧಿಕಾರಿ ವರ್ಣಿತ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್., ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ, ಉಪಾಧ್ಯಕ್ಷರಾದ ಮಂಜುನಾಥ ಗೊಂಡಬಾಳ, ಕೃಷಿ ಇಲಾಖೆ ಉಪ ನಿರ್ದೇಶಕ ಎಲ್.ಸಿದ್ದೇಶ್ ಇತರೆ ಸೇರಿದಂತೆ ಇಲಾಖೆಗಳ ಅಧಿಕಾರಿಗಳು, ವಿವಿಧ ತಾಲ್ಲೂಕುಗಳ ಕೃಷಿ ಅಧಿಕಾರಿಗಳು, ರಸಗೊಬ್ಬರ ಮಾರಾಟಗಾರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!