ಪೊಲೀಸ್ ಕುಟುಂಬದ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

Get real time updates directly on you device, subscribe now.

: ಪೊಲೀಸ್ ಸಿಬ್ಬಂದಿಯ ಕುಟುಂಬದವರ ಆರ್ಥಿಕ ಸಬಲೀಕರಣ ಹಾಗೂ ಸ್ವಾವಲಂಬನೆಗೆ ನೆರವಾಗುವ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲಾ ಪೊಲೀಸ್ ಹಾಗೂ ಸರ್ವೋದಯ ಸಮಗ್ರ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಲಾಗಿದ ಉಚಿತ ಹೊಲಿಗೆ ಯಂತ್ರ ತರಬೇತಿ ಕಾರ್ಯಕ್ರಮಕ್ಕೆ ಬಳ್ಳಾರಿ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ ಡಾ. ಪಿ.ಎಸ್. ಹರ್ಷ ಅವರು ಪೊಲೀಸ್ ಭವನದಲ್ಲಿ ಸೋಮವಾರ (ಜು. 20ರಂದು) ಚಾಲನೆ ನೀಡಿದರು.
ಬಳಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸದಾ ಸಾರ್ವಜನಿಕ ಸೇವೆಯಲ್ಲಿ ನಿರತರಾಗಿರುತ್ತಾರೆ. ಇಂತಹ ಸಂದರ್ಭದಲ್ಲಿ ಅವರ ಕುಟುಂಬದ ಸದಸ್ಯರು ಸ್ವಾವಲಂಬಿ ಜೀವನ ನಡೆಸಲು ಮತ್ತು ಹೆಚ್ಚುವರಿ ಆದಾಯ ಕಂಡುಕೊಳ್ಳಲು ಈ ರೀತಿಯ ಕೌಶಲ್ಯಾಭಿವೃದ್ಧಿ ತರಬೇತಿಗಳು ಅತ್ಯಂತ ಸಹಕಾರಿಯಾಗಲಿವೆ ಎಂದು ಅಭಿಪ್ರಾಯಪಟ್ಟರು.
ಪೊಲೀಸ್ ಕುಟುಂಬದ ಮಹಿಳೆಯರು ಕೌಶಲ್ಯಗಳನ್ನು ಕಲಿತು ಆರ್ಥಿಕವಾಗಿ ಸದೃಢರಾಗಲು ಈ ತರಬೇತಿ ಉತ್ತಮ ಅವಕಾಶವಾಗಿದೆ. ತರಬೇತಿಯನ್ನು ಯಶಸ್ವಿಯಾಗಿ ಮುಗಿಸುವ ಮೂಲಕ ಮಹಿಳೆಯರು ಸ್ವಂತ ಉದ್ಯೋಗ ಪ್ರಾರಂಭಿಸಲು ಅಥವಾ ಇತರೆ ಉದ್ಯೋಗಾವಕಾಶಗಳನ್ನು ಪಡೆದುಕೊಳ್ಳಲು ನೆರವಾಗಲಿದೆ. ಪೊಲೀಸ್ ಸಿಬ್ಬಂದಿಯ ಕಲ್ಯಾಣ ಮತ್ತು ಅವರ ಕುಟುಂಬದವರ ಅಭಿವೃದ್ಧಿಗೆ ಇಲಾಖೆಯು ಸದಾ ಬದ್ಧವಾಗಿದೆ. ಈ ತರಬೇತಿಯನ್ನು ಪ್ರತಿಯೊಬ್ಬರೂ ಸದುಪಯೋಗ ಪಡಿಸಿಕೊಂಡು ಸ್ವಾವಲಂಬಿಗಳಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ. ರಾಮ್ ಎಲ್. ಅರಸಿದ್ದಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಆರ್.ಹೇಮಂತ್ ಕುಮಾರ್, ಸರ್ವೋದಯ ಸಮಗ್ರ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಾಗರಾಜ ಹಾಗೂ ದೀಪಾ, ಕೊಪ್ಪಳ ಡಿವೈಎಸ್ಪಿ ಮುತ್ತಣ್ಣ ಸವರಗೋಳ, ಗಂಗಾವತಿ ಡಿವೈಎಸ್ಪಿ ಜೆ‌.ನ್ಯಾಮನಗೌಡರ, ಸೈಬರ್ ವಿಭಾಗದ ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ, ಡಿಎಆರ್ ಡಿವೈಎಸ್ಪಿ ಶಶಿಧರಯ್ಯ ಹಿರೇಮಠ ಸೇರಿದಂತೆ ಜಿಲ್ಲೆಯ ಇತರೆ ಪೊಲೀಸ್ ಇಲಾಖೆಯ ಅಧಿಕಾರಿಗಳು, ವಿವಿಧ ಪೊಲೀಸ್ ಠಾಣೆಗಳ ಅಧಿಕಾರಿಗಳು, ಸಿಬ್ಬಂದಿ, ಪೊಲೀಸ್ ಕುಟುಂಬಸ್ಥರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!