ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ಬಹುದೊಡ್ಡ ಶಕ್ತಿ: ಎನ್.ಎಸ್. ಭೋಸರಾಜ

0

Get real time updates directly on you device, subscribe now.

ಸಂಘಟನ್ ಸೃಜನ ಅಭಿಯಾನಕ್ಕೆ ಚಾಲನೆ

ಯಲಬುರ್ಗಾ: ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ಬಹುದೊಡ್ಡ ಶಕ್ತಿಯಾಗಿದ್ದು, ಶತಮಾನದ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷವು ದೇಶದ ಪ್ರಗತಿಗೆ ಅಪಾರ ಕೊಡುಗೆ ನೀಡಿದೆ ಎಂದು ಮಾಜಿ ಸಚಿವ ಎನ್.ಎಸ್. ಭೋಸರಾಜ ಹೇಳಿದರು.

ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ‘ಸಂಘಟನ್ ಸೃಜನ ಅಭಿಯಾನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಪಕ್ಷದಲ್ಲಿ ಸಕ್ರಿಯ ಹಾಗೂ ನಿರಂತರ ಸಂಘಟನೆಗೆ ಹೆಚ್ಚಿನ ಮಹತ್ವ ನೀಡಿದ್ದಾರೆ. ಪಕ್ಷದ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಸ್ಥಳೀಯ ಕಾರ್ಯಕರ್ತರ ಅಭಿಪ್ರಾಯಕ್ಕೆ ಆದ್ಯತೆ ನೀಡಲಾಗುತ್ತಿದೆ. ಕಾರ್ಯಕರ್ತರ ಅಭಿಪ್ರಾಯ ಪಡೆದು ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡುವ ಮೂಲಕ ದೇಶಾದ್ಯಂತ ‘ಸಂಘಟನ್ ಸೃಜನ ಅಭಿಯಾನ’ ಯಶಸ್ವಿಯಾಗಿ ನಡೆಯುತ್ತಿದೆ. ಇನ್ನೂ ಏಳು ರಾಜ್ಯಗಳಲ್ಲಿ ಪ್ರಕ್ರಿಯೆ ಬಾಕಿ ಇದೆ ಎಂದು ತಿಳಿಸಿದರು.

ಪಕ್ಷದಲ್ಲಿ ನಾಯಕರು ಬರುತ್ತಾರೆ, ಹೋಗುತ್ತಾರೆ. ಆದರೆ ಪಕ್ಷವನ್ನು ಉಳಿಸಿ, ಬೆಳೆಸುವಲ್ಲಿ ಕಾರ್ಯಕರ್ತರ ಶ್ರಮ ಅತ್ಯಂತ ಮಹತ್ವದ್ದಾಗಿದೆ. ರಾಹುಲ್ ಗಾಂಧಿಯವರ ಸೂಚನೆಯಂತೆ ಪಕ್ಷದ ಕಾರ್ಯಕರ್ತರಿಗೆ ವಿಶೇಷ ಅಧಿಕಾರ ಹಾಗೂ ಜವಾಬ್ದಾರಿ ನೀಡಲಾಗಿದೆ ಎಂದರು.

ಕಾಂಗ್ರೆಸ್ ನೇತೃತ್ವದ ಸರ್ಕಾರಗಳು ದೇಶದ ಅಭಿವೃದ್ಧಿಗೆ ಸಾಕಷ್ಟು ಜನಪರವಾಗಿ ಶ್ರಮಿಸಿವೆ. ದೇಶದ ವಿವಿಧ ಕ್ಷೇತ್ರಗಳಲ್ಲಿನ ಪ್ರಗತಿಗೆ ಕಾಂಗ್ರೆಸ್ ನಾಯಕರು ಹಾಗೂ ಕಾಂಗ್ರೆಸ್ ಸರ್ಕಾರಗಳ ಜನಪರ ಯೋಜನೆಗಳು ಸಾಕ್ಷಿಯಾಗಿವೆ. ಪಕ್ಷವನ್ನು ಬೂತ್ ಮಟ್ಟದಿಂದಲೇ ಮತ್ತಷ್ಟು ಕ್ರಿಯಾಶೀಲವಾಗಿ ಸಂಘಟಿಸಲು ಎಲ್ಲರೂ ಶ್ರಮಿಸಬೇಕು. ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರವೂ ಅಭಿವೃದ್ಧಿಯ ಜೊತೆಗೆ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಿ ಉತ್ತಮ ಆಡಳಿತ ನೀಡುತ್ತಿದೆ ಎಂದು ಹೇಳಿದರು.

‘ಬೂತ್ ಮಟ್ಟದಿಂದ ಪಕ್ಷ ಸಂಘಟನೆಗೆ ಒತ್ತು’

ಉತ್ತರ ಪ್ರದೇಶದ ಮಾಜಿ ಸಚಿವ ಹಾಗೂ ಎಐಸಿಸಿ ವೀಕ್ಷಕ ವಿವೇಕ್ ಬನ್ಸಾಲ್ ಮಾತನಾಡಿ, ದೇಶದ ಪ್ರತಿ ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಜಿಲ್ಲಾಧ್ಯಕ್ಷರ ಆಯ್ಕೆ ಕುರಿತು ಸ್ಥಳೀಯ ಕಾರ್ಯಕರ್ತರ ಅಭಿಪ್ರಾಯ ಪಡೆಯಲಾಗುತ್ತಿದೆ. ಬ್ಲಾಕ್ ಮಟ್ಟದಲ್ಲಿ ವಿಶೇಷ ಅಭಿಯಾನ ನಡೆಸಿ ಕಾರ್ಯಕರ್ತರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದರು.

ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಮಹಾ ಅಧಿವೇಶನದ ನಿರ್ಣಯದಂತೆ ವಿವಿಧ ಕ್ಷೇತ್ರಗಳಿಗೆ ಭೇಟಿ ನೀಡಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠ ಸಂಘಟನೆಯಾಗಿ ರೂಪಿಸಲು ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಬೂತ್ ಮಟ್ಟದಿಂದ ಪಕ್ಷವನ್ನು ಸಂಘಟಿಸಿ ಬಲಪಡಿಸಲು ಎಲ್ಲರೂ ಶ್ರಮಿಸಬೇಕು. ಎಲ್ಲ ವರ್ಗದ ಜನರ ಕಲ್ಯಾಣ ಹಾಗೂ ಅಭಿವೃದ್ಧಿಯನ್ನು ಬಯಸುವ ಪಕ್ಷ ಕಾಂಗ್ರೆಸ್ ಆಗಿದ್ದು, ಸ್ವಾತಂತ್ರ್ಯ ಚಳವಳಿಯಲ್ಲಿಯೂ ಕಾಂಗ್ರೆಸ್ ತನ್ನದೇ ಆದ ಮಹತ್ವದ ಕೊಡುಗೆ ನೀಡಿದೆ ಎಂದು ತಿಳಿಸಿದರು.

‘ರಾಯರೆಡ್ಡಿ ಅಭಿವೃದ್ಧಿ ಕ್ರಾಂತಿ ಮಾಡಿದ್ದಾರೆ: ಕೆರಿಬಸಪ್ಪ ನಿಡಗುಂದಿ’

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆರಿಬಸಪ್ಪ ನಿಡಗುಂದಿ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶದ ಜನರ ಅಭಿವೃದ್ಧಿ ಹಾಗೂ ಉತ್ತಮ ಆಡಳಿತಕ್ಕಾಗಿ ಕಾಂಗ್ರೆಸ್ ಸರ್ಕಾರಗಳು ಶ್ರಮಿಸುತ್ತಿವೆ. ಇದರಿಂದ ಜನರು ನೆಮ್ಮದಿಯಿಂದ ಬದುಕುವ ವಾತಾವರಣ ನಿರ್ಮಾಣವಾಗಿದೆ ಎಂದರು.

ಯಲಬುರ್ಗಾ ಕ್ಷೇತ್ರದಲ್ಲಿ ಶಾಸಕ ಬಸವರಾಜ ರಾಯರೆಡ್ಡಿ ಅವರು ಅಭಿವೃದ್ಧಿಯ ಕ್ರಾಂತಿಯನ್ನೇ ಮಾಡಿದ್ದಾರೆ. ಕ್ಷೇತ್ರದ ಎಲ್ಲ ಭಾಗಗಳಲ್ಲೂ ವಿವಿಧ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲಾಗಿದೆ. ಇದನ್ನು ಸಹಿಸದ ವಿರೋಧ ಪಕ್ಷದ ನಾಯಕರು ಶಾಸಕರ ವಿರುದ್ಧ ಅಪಪ್ರಚಾರ ಮಾಡುತ್ತಿರುವುದು ಸರಿಯಲ್ಲ ಎಂದು ಆರೋಪಿಸಿದರು.

ರಾಯರೆಡ್ಡಿ ಅವರು ಮಾಡಿದಷ್ಟು ಅಭಿವೃದ್ಧಿಯನ್ನು ಯಾವೊಬ್ಬ ಶಾಸಕರೂ ಮಾಡಿಲ್ಲ. ಜನತೆಗೆ ಸುಳ್ಳು ಹೇಳುವುದನ್ನು ಬಿಟ್ಟು ತಾಲೂಕಿನ ಪ್ರತಿ ಹಳ್ಳಿಗೂ ತೆರಳಿ ಶಾಸಕರು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಕಣ್ತೆರೆದು ನೋಡಲಿ. ಆಗ ಯಾರು ಎಷ್ಟು ಅಭಿವೃದ್ಧಿ ಮಾಡಿದ್ದಾರೆ ಎಂಬುದು ಜನರಿಗೆ ತಿಳಿಯಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ ಪಾಟೀಲ್, ಕೆಪಿಸಿಸಿ ಸದಸ್ಯರಾದ ಸುಜಾತ, ಕೆ. ಶಾಂತಪ್ಪ, ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಯಂಕಣ್ಣ ಯರಾಶಿ, ತಾ.ಪಂ. ಮಾಜಿ ಅಧ್ಯಕ್ಷ ವೀರನಗೌಡ ಪೋಲಿಸ್ ಪಾಟೀಲ್, ಕುಕನೂರು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಹನುಮಂತಗೌಡ ಚೆಂಡೂರು, ಗಿರಿಜಾ ರೇವಣಪ್ಪ ಸಂಗಟಿ, ಶರಣಪ್ಪ ಗಾಂಜಿ, ಕೃಷ್ಣ ಇಟ್ಟಂಗಿ, ಸುಧೀರ್ ಕೊರ್ಲಳ್ಳಿ, ಜ್ಯೋತಿ ಗೊಂಡಬಾಳ, ಮಂಜುನಾಥ ಕಡೇಮನಿ, ಡಾ. ಶಿವನಗೌಡ ದಾನರೆಡ್ಡಿ, ಹಂಪಯ್ಯಸ್ವಾಮಿ ಹಿರೇಮಠ, ಮಹಾಂತೇಶ ಗಾಣಗೇರ್, ಅಶೋಕ್ ತೋಟದ, ಸಿಎಂ ಈಶ್ವರ ಅಟಮಾಳಗಿ, ಮಲ್ಲಿಕಾರ್ಜುನ ಜಕ್ಕಲಿ, ಲಿಂಗರಾಜ ಕಲ್ಗುಡಿ, ಸಾವಿತ್ರಿ ಗೊಲ್ಲರ, ಜಯಶ್ರೀ ಶರಣಪ್ಪ ಅರಕೇರಿ, ಫರೀದಾಬೇಗಂ, ಸಂಗಣ್ಣ ತೆಂಗಿನಕಾಯಿ, ಎಂ.ಎಫ್. ನಧಾಪ್, ಹುಲಗಪ್ಪ ಬಂಡಿವಡ್ಡರ, ಶರಣಪ್ಪ ಉಪ್ಪಾರ, ಗವಿಸಿದ್ದಪ್ಪ ಚೋಳಿನ್, ಖಾಜಾವಲಿ ಗಡಾದ, ಪರಶುರಾಮ ಸಂಗನಾಳ, ಪ್ರಕಾಶಗೌಡ ಮಾಲಿಪಾಟೀಲ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Get real time updates directly on you device, subscribe now.

Leave A Reply

Your email address will not be published.

error: Content is protected !!