ತಾಂಡಾದ ಯಾವ ವಿದ್ಯಾರ್ಥಿಯೂ ಶಿಕ್ಷಣದಿಂದ ವಂಚಿತನಾಗಬಾರದು: ಸಚಿವ ತಂಗಡಗಿ

Get real time updates directly on you device, subscribe now.

*

ಕನಕಗಿರಿ, ಸೆ.26

ತಾಂಡಾದ ಯಾವ ವಿದ್ಯಾರ್ಥಿಯೂ ಶಿಕ್ಷಣದಿಂದ ವಂಚಿತವಾಗಬಾರದು.
ತಾಂಡಾದ ಜನರು ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವರೂ ಆದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದರು.

ಕನಕಗಿರಿ ವಿಧಾನಸಭಾ ಕ್ಷೇತ್ರದ ಅಡವಿಭಾವಿ ದೊಡ್ಡತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಶಾಲಾ ಕೊಠಡಿ ಹಾಗೂ ಮುಸಲಾಪುರದಲ್ಲಿ ಅಂಗನವಾಡಿ ಕೇಂದ್ರವನ್ನು ಮಂಗಳವಾರ ಉದ್ಘಾಟಿಸಿ ಸಚಿವರು ಮಾತನಾಡಿದರು.‌

ಶಿಕ್ಷಣ ಇಲ್ಲದಿದ್ದರೆ ಸಾಧನೆ ಮಾಡಲು ಆಗುವುದಿಲ್ಲ. ಹಾಗಾಗಿ ಶಿಕ್ಷಣ ಬಹಳ ಮುಖ್ಯ. ಹಾಗಾಗಿ ತಾಂಡಾದ ಜನರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ತಾಂಡಾದ ಅಭಿವೃದ್ಧಿಗೆ ನಾನು ಬದ್ಧನಾಗಿದ್ದು, ಮೂಲಸೌಲಭ್ಯ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

*ಮುಸಲಾಪುರ ಗ್ರಾ.ಪಂ ವ್ಯಾಪ್ತಿಯಲ್ಲಿ ಜನಸಂಪರ್ಕ ಸಭೆ*

ಇದಾದ ಬಳಿಕ ತಾಲೂಕಿನ ಮುಸಲಾಪುರ ಗ್ರಾ.ಪಂ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ ಜನಸಂಪರ್ಕ ಸಭೆಯಲ್ಲಿ ಸಚಿವರು ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿದರು. ಇಂಗಳದಾಳ, ರಾಂಪುರ, ಕನ್ನೇರುಮಡು ಹಾಗೂ ಬೊಮ್ಮಸಾಗರ ತಾಂಡಾದ ಜನತೆ ತಮ್ಮ ಗ್ರಾಮಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಸಚಿವರಿಗೆ ಮನವಿ ಸಲ್ಲಿಸಿದರು. ಇದಕ್ಕೆ ಸ್ಪಂದಿಸಿದ ಸಚಿವರು ಕೂಡಲೇ ಬಸ್ ವ್ಯವಸ್ಥೆ ಮಾಡುವಂತೆ ಸ್ಥಳದಲ್ಲಿದ್ದ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು. ಜೊತೆಗೆ ರಾಂಪುರ ಗ್ರಾಮದ ಕೆರೆ ಒತ್ತುವರಿ ಬಗ್ಗೆ ಗ್ರಾಮಸ್ಥರು ತಿಳಿಸಿದ ಹಿನ್ನೆಲೆ ಸಚಿವರು ಕೆರೆ ಸರ್ವೇ ಮಾಡಿಸಿ, ಕೆರೆ ಜಾಗವನ್ನು ಉಳಿಸುವ ಕೆಲಸ ಮಾಡಲಾಗುವುದು ಎಂದು ಇದೇ ವೇಳೆ ತಿಳಿಸಿದರು.

ಇನ್ನು ಗ್ರಾಮಗಳಲ್ಲಿ ಸಿಸಿ ರಸ್ತೆ ನಿರ್ಮಾಣ, ವಿದ್ಯುತ್ ಕಂಬ ಹಾಗೂ ಮೀಟರ್ ಗಳ ಅಳವಡಿಕೆ, ಕುಡಿಯುವ ನೀರಿನ ಘಟಕ ದುರಸ್ತಿ, ಅಗತ್ಯವಿರುವ ಕಡೆ ಚರಂಡಿ ನಿರ್ಮಾಣ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದೇ ವೇಳೆ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ವಿಶ್ವನಾಥ ಮುರಡಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ ಕಂದಕೂರ್, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ರಾಮಚಂದ್ರಪ್ಪ, ಪಿಡಿಓ ನಾಗೇಶ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

 

*ಕ್ಷೇತ್ರದ ಅಭಿವೃದ್ಧಿ ನನ್ನ ಗುರಿ*
ಕನಕಗಿರಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಬಗ್ಗೆ ತನ್ನದೇ ಆದ ಕನಸು ಕಂಡಿದ್ದೇನೆ. ಇಡೀ ಕನಕಗಿರಿಗೆ ಪೈಪ್ ಲೈನ್ ಅಳವಡಿಸಿ ಪ್ರತಿಯೊಂದು ಕೆರೆಗೆ ನೀರು ತುಂಬಿಸಲಾಗುವುದು. ಈ ಹಿಂದೆ ಶಾಸಕರಾಗಿದ್ದವರು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ‌. ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಬಾರದು. ನಿಮ್ಮ ಆಶೀರ್ವಾದದಿಂದ ಶಾಸಕನಾಗಿ ಮಂತ್ರಿಯಾಗಿದ್ದೇನೆ. ಕ್ಷೇತ್ರದ ಅಭಿವೃದ್ಧಿಯೇ ನನ್ನ ಗುರಿ ಎಂದು ಹೇಳಿದರು.

 

 

Get real time updates directly on you device, subscribe now.

Comments are closed.

error: Content is protected !!