ಕರಡು ಮತದಾರರ ಪಟ್ಟಿ ಪ್ರಕಟಣೆ; ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಜಿಲ್ಲಾಧಿಕಾರಿಗಳ ಸಭೆ

Get real time updates directly on you device, subscribe now.

: ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ–2026ರ (ಎಸ್.ಐ.ಆರ್) ಕರಡು ಮತದಾರರ ಪಟ್ಟಿ ಪ್ರಕಟಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 09ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಮಾನ್ಯತೆ ಪಡೆದ ಮತ್ತು ನೋಂದಾಯಿತ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ನಡೆಯಿತು.
ಇದೇ ವೇಳೆ ಜಿಲ್ಲಾಧಿಕಾರಿಗಳು ಮಾತನಾಡಿ, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 01.10.2026ರ ಅರ್ಹತಾ ದಿನಾಂಕಕ್ಕೆ ಅನ್ವಯಿಸುವಂತೆ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ–2026ರ ಪ್ರಕ್ರಿಯೆ ಕೈಗೊಳ್ಳಲಾಗಿದ್ದು, ಕರಡು ಮತದಾರರ ಪಟ್ಟಿಯನ್ನು ದಿನಾಂಕ 24.08.2026 ರಂದು ಪ್ರಕಟಿಸಲಾಗಿದೆ. ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು 24.08.2026 ರಿಂದ 23.09.2026 ರವರೆಗೆ ಅವಕಾಶ ಕಲ್ಪಿಸಲಾಗಿದ್ದು, 27.10.2026 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ ಎಂದರು.
ಈಗಾಗಲೇ ಜಿಲ್ಲೆಯ ಎಲ್ಲಾ ಬಿಎಲ್‌ಒಗಳು ಮನೆ ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸಿದ್ದಾರೆ. ಜಿಲ್ಲೆಯ ಒಟ್ಟು 11,90,214 ಮತದಾರರ ಪೈಕಿ 10,41,388 (ಶೇ. 87.50) ಮತದಾರರ ವಿವರಗಳನ್ನು ಡಿಜಿಟಲೀಕರಣ ಮಾಡಲಾಗಿದೆ ಎಂದು ಹೇಳಿದರು.
*ಕರಡು ಪಟ್ಟಿಯ ಅಂಕಿ-ಅಂಶ:* ಪ್ರಕಟಿತ ಕರಡು ಮತದಾರರ ಪಟ್ಟಿಯಲ್ಲಿ 5,19,142 ಪುರುಷರು, 5,22,189 ಮಹಿಳೆಯರು ಹಾಗೂ 57 ಇತರೆ ಸೇರಿದಂತೆ ಒಟ್ಟು 10,41,388 ಮತದಾರರಿದ್ದಾರೆ. ಜಿಲ್ಲೆಯಲ್ಲಿ 1200ಕ್ಕೂ ಹೆಚ್ಚು ಮತದಾರರಿರುವ ಮತಗಟ್ಟೆಗಳ ರಾಷನಲೈಜೇಷನ್ ಪ್ರಕ್ರಿಯೆ ನಡೆಸಿ, ಜಿಲ್ಲೆಯಲ್ಲಿ ಹೊಸದಾಗಿ 37 ಮತಗಟ್ಟೆಗಳನ್ನು ಹೆಚ್ಚಿಸಲಾಗಿದ್ದು, ಇದರಿಂದಾಗಿ ಒಟ್ಟು ಮತಗಟ್ಟೆಗಳ ಸಂಖ್ಯೆ 1,315 ರಿಂದ 1,352ಕ್ಕೆ ಏರಿಕೆಯಾಗಿದೆ ಎಂದರು.
*ನೋಟಿಸ್ ಜಾರಿ ಮತ್ತು ವಿಚಾರಣೆ:* ಹಿಂದಿನ ಸಮಗ್ರ ಪರಿಷ್ಕರಣೆಯ ಮಾಹಿತಿಯನ್ನು ನೀಡದ ಹಾಗೂ ಮಾಹಿತಿ ತಾಳೆಯಾಗದ ಅಥವಾ ಲೋಪದೋಷಗಳು ಕಂಡುಬಂದಿರುವ 14,401 ಮತದಾರರಿಗೆ ನೋಟಿಸ್ ನೀಡಲಾಗುತ್ತಿದ್ದು, ದಾಖಲೆಗಳ ಪರಿಶೀಲನೆ ಹಾಗೂ ವಿಚಾರಣೆಗೆ ಹೆಚ್ಚುವರಿ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಅವರು ತಿಳಿಸಿದರು.
ಕರಡು ಮತದಾರರ ಪಟ್ಟಿಯನ್ನು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ, ಇಆರ್‌ಒ/ಎಇಆರ್‌ಒ ಕಚೇರಿಗಳು, ಮತಗಟ್ಟೆಗಳು ಹಾಗೂ ವೆಬ್‌ಸೈಟ್ https://koppal.nic.in/en/election/ ನಲ್ಲಿ ಪ್ರಚುರಪಡಿಸಲಾಗಿರುತ್ತದೆ. ಹೆಸರು ಸೇರ್ಪಡೆಗೆ ನಮೂನೆ-6, ಹೆಸರು ತೆಗೆದು ಹಾಕಲು ನಮೂನೆ-7 ಮತ್ತು ತಿದ್ದುಪಡಿ ಅಥವಾ ಸ್ಥಳಾಂತರಕ್ಕೆ ನಮೂನೆ-8ರ ಮೂಲಕ ಆನ್‌ಲೈನ್ ಅಥವಾ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಸಭೆಯಲ್ಲಿ ಜಿಲ್ಲಾ ಚುನಾವಣಾ ತಹಶೀಲ್ದಾರರಾದ ರವಿ ವಸ್ತ್ರದ್, ಜಿಲ್ಲೆಯ ಮಾನ್ಯತೆ ಪಡೆದ ಮತ್ತು ನೋಂದಾಯಿತ ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಕೃಷ್ಣ ಇಟ್ಟಂಗಿ, ಸೇರಿದಂತೆ ಮತ್ತಿತರರು ಹಾಗೂ ಜಿಲ್ಲಾ ಚುನಾವಣಾ ಶಾಖೆಯ ಇತರೆ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!