ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಿ: ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ

Get real time updates directly on you device, subscribe now.

ಕೊಪ್ಪಳ: ಹಿಟ್ನಾಳ ಗ್ರಾಮದಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಸಭೆಕೊಪ್ಪಳ ಸೆಪ್ಟೆಂಬರ್ : ಸಾರ್ವಜನಿಕರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಸ್ಥಳದಲ್ಲೇ ಇತ್ಯರ್ಥಪಡಿಸುವಂತೆ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರಜಾಸೇವಾ ಇಲಾಖೆ, ಕೊಪ್ಪಳ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದ ಸಹಯೋಗದಲ್ಲಿ ತಾಲ್ಲೂಕಿನ ಹಿಟ್ನಾಳ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ ವಸತಿ ನಿಲಯದಲ್ಲಿ ಶನಿವಾರ (ಸೆ.‌ 19ರಂದು) ಹಮ್ಮಿಕೊಂಡಿದ್ದ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜನರು ಎದುರಿಸುತ್ತಿರುವ ಸಮಸ್ಯೆಗಳು ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ್ದಾಗಿದ್ದು, ಅವುಗಳನ್ನು ಆದ್ಯತೆಯ ಮೇರೆಗೆ ಬಗೆಹರಿಸುವುದು ಅಧಿಕಾರಿಗಳ ಮುಖ್ಯ ಜವಾಬ್ದಾರಿಯಾಗಿದೆ. ಈ ಪ್ರಜಾಸೇವಾ ವೇದಿಕೆಯು ಸಾರ್ವಜನಿಕರು ಮತ್ತು ಆಡಳಿತದ ನಡುವೆ ನೇರ ಸಂಪರ್ಕ ಕಲ್ಪಿಸುವ ಉತ್ತಮ ಅವಕಾಶವಾಗಿದೆ. ಗ್ರಾಮಸ್ಥರು ವೈಯಕ್ತಿಕವಾಗಿ ತಮ್ಮ ಸಮಸ್ಯೆ ಹಾಗೂ ಅಹವಾಲುಗಳನ್ನು ಮುಕ್ತವಾಗಿ ಸಲ್ಲಿಸಬೇಕು ಎಂದು ತಿಳಿಸಿದರು.
ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಸ್ಥಳೀಯವಾಗಿ ಇತ್ಯರ್ಥವಾಗುವ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಲಾಗುವುದು. ತಾಲೂಕು ಅಥವಾ ಜಿಲ್ಲಾ ಮಟ್ಟದಲ್ಲಿ ಪರಿಹರಿಸಬೇಕಾದ ದೀರ್ಘಕಾಲೀನ ಬೇಡಿಕೆಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ತ್ವರಿತವಾಗಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಹಿಟ್ನಾಳ ಹಾಗೂ ಸುತ್ತಮುತ್ತಲಿನ ಗ್ರಾಮದ ಸಾರ್ವಜನಿಕರು ತಮ್ಮ ಕುಂದು ಕೊರತೆಗಳ ಅಹವಾಲುಗಳನ್ನು ಇದೇ ವೇಳೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೊಪ್ಪಳ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಬಾಲಚಂದನ್, ತಹಶಿಲ್ದಾರರಾದ ಬಸವರಾಜ ತನ್ನಳ್ಳಿ, ತಾ.ಪಂ. ಇಓ ಗುಂಡಪ್ಪ ತುರಾದಿ ಸೇರಿದಂತೆ, ಜನಪ್ರತಿನಿಧಿಗಳು, ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಪಿಡಿಓ ಹಾಗೂ ಗ್ರಾ.ಪಂ ಸಿಬ್ಬಂದಿ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!