ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ: ಅಗತ್ಯ ಸಿದ್ಧತೆಗೆ ಅಪರ ಜಿಲ್ಲಾಧಿಕಾರಿಗಳ ಸೂಚನೆ
—
–
ಕೊಪ್ಪಳ : 2023ರ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳ ಕುರಿತಂತೆ ಜೂನ್ 06ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರು ಮಾತನಾಡಿ, ಪರೀಕ್ಷಾ ನಿಯಮ ಪಾಲನೆ ಜೊತೆಗೆ ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಪರೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಿ. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು ಹಾಗೂ ಅಗತ್ಯ ಮೂಲ ಸೌಲಭ್ಯಗಳ ವ್ಯವಸ್ಥೆ ಮಾಡಿಕೊಳ್ಳಿ. ಪರೀಕ್ಷೆಗೆ ತೆರಳಲು ಮಕ್ಕಳಿಗೆ ಅನುಕೂಲವಾಗುವಂತೆ ಕೆ.ಕೆ.ಆರ್.ಟಿ.ಸಿ.ಯಿಂದ ಅಗತ್ಯ ಸಾರಿಗೆ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳಾಗಲಿ, ಅವ್ಯವಹಾರಗಳಾಗಲಿ ನಡೆಯದಂತೆ ಪರೀಕ್ಷಾ ಕೇಂದ್ರದಿಂದ 200 ಮೀಟರ್ ವ್ಯಾಪ್ತಿಯಲ್ಲಿ “ಕಲಂ 144”ನ್ನು ಜಾರಿಗೊಳಿಸಲಾಗುವುದು.
ಸುಳ್ಳು ವದಂತಿ ಹಬ್ಬಿಸುವವರ ಹಾಗೂ ಕುಚೋದ್ಯ ಚಟುವಟಿಕೆಗಳೀಗೆ ಅವಕಾಶ ನೀಡುವವವರ ಬಗ್ಗೆ ನಿಗಾವಹಿಸಿ, ಕಾನೂನು ಕ್ರಮವಹಿಸುವಂತೆ ಪೋಲೀಸ್ ಇಲಾಖೆಯು ಸಹಕರಿಸಬೇಕು. ಪರೀಕ್ಷಾ ಕೊಠಡಿ ಮೇಲ್ವಿಚಾರಕರನ್ನು ಪ್ರೌಢ ಶಾಲಾ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕು. ಕೊರತೆ ಇದ್ದಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನಿಯೋಜಿಸಿಕೊಳ್ಳಬಹುದು. ಈ ಪಟ್ಟಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಕಡ್ಡಾಯವಾಗಿ ಅನುಮೋದನೆ ಪಡೆಯಬೇಕು. ಕೊಠಡಿ ಮೇಲ್ವಿಚಾರಕರು ಮೋಬೈಲ್ ದೂರವಾಣಿ ಬಳಸುವುದುನ್ನು ಪರೀಕ್ಷಾ ಸಮಯದಲ್ಲಿ ನಿಷೇಧಿಸಿದೆ ಎಂದರು.
ಪರೀಕ್ಷಾ ಕೊಠಡಿಯಲ್ಲಿ ವಿದ್ಯಾರ್ಥಿಗಳು ಕ್ಯಾಲುಕ್ಯುಲೇಟರ್ ಮತ್ತು ಮೊಬೈಲ್‌ಗಳನ್ನು ತರುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಪರೀಕ್ಷಾ ಸಮಯ ಮುಗಿಯುವವರೆಗೂ ವಿದ್ಯಾರ್ಥಿಗಳನ್ನು ಕೊಠಡಿಯಲ್ಲಿಯೇ ಉಳಿಸಿಕೊಳ್ಳುವುದು. ವಿಕಲಚೇತನ ವಿದ್ಯಾರ್ಥಿಗಳಿಗೆ ನೆಲ ಮಹಡಿಯಲ್ಲಿ ಸೂಕ್ತ ಆಸನದ ವ್ಯವಸ್ಥೆ ಮಾಡಲು ಮುಖ್ಯ ಅಧೀಕ್ಷಕರು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎಂ.ಎ ರೆಡ್ಡೇರ್ ಅವರು ಮಾತನಾಡಿ, ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ಜೂನ್ 12ರಿಂದ 19ರವರೆಗೆ ನಡೆಯಲಿದೆ. ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗೆ ಜಿಲ್ಲೆಯ ಒಟ್ಟು 2738 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 2049 ಪುನರಾವರ್ತಿತ ವಿದ್ಯಾರ್ಥಿಗಳು, 687 ಖಾಸಗಿ ಪುನರಾವರ್ತಿತ, 01 ಎನ್.ಎಸ್.ಆರ್ ಹಾಗೂ 01 ಎನ್.ಎಸ್.ಪಿ.ಆರ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗಾಗಿ ಒಟ್ಟು 11 ಪರೀಕ್ಷಾ ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬ ಮುಖ್ಯ ಅಧೀಕ್ಷಕರು ಹಾಗೂ ಪ್ರಶ್ನೆಪತ್ರಿಕೆ ಅಧೀಕ್ಷಕರನ್ನು ನೇಮಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಭಾರಿ ಉಪನಿರ್ದೇಶಕರಾದ ರಾಜಶೇಖರ ಪಾಟೀಲ ಸೇರಿದಂತೆ
ಮುಖ್ಯ ಅಧೀಕ್ಷಕರು, ಪ್ರಶ್ನೆ ಪತ್ರಿಕೆ ಅಭಿರಕ್ಷಕರು, ವಿಷಯ ಪರಿವೀಕ್ಷರು ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Comments are closed.