ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಕನ್ನಡ ಸಪ್ತಾಹ: ಶ್ಲಾಘನೀಯ

Get real time updates directly on you device, subscribe now.

ಕನಕಗಿರಿ: ಇಂಗ್ಲಿಷ್ ಮಾಧ್ಯಮಗಳ ಶಾಲೆಗಳಲ್ಲಿ ಕನ್ನಡವನ್ನು ಕಡೆಗಣಿಸಲಾಗುತ್ತಿದೆ ಎಂಬ ಅಪವಾದಕ್ಕೆ ಅಖಂಡ ಗಂಗಾವತಿ ತಾಲ್ಲೂಕಿನ ಕೆಲ ಆಂಗ್ಲ ಮಾಧ್ಯಮ ಶಾಲೆಗಳು ಕನ್ನಡ ಪರ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಉತ್ತರ ನೀಡಿವೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕೋಶಾಧ್ಯಕ್ಷ ರಮೇಶ ಕುಲಕರ್ಣಿ ತಿಳಿಸಿದರು. ಇಲ್ಲಿನ ಎಕ್ಸೆಲ್ ಪಬ್ಲಿಕ್ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ನಡೆದ ಕನ್ನಡ ಸಪ್ತಾಹ ಕಾರ್ಯಕ್ರಮದ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದ್ದು. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಲು ಕನ್ನಡ ಮನಸ್ಸುಗಳ ಅವಶ್ಯಕತೆ ಇದೆ ಎಂದು ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಗಂಗಾವತಿ ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀನಿವಾಸ ಅಂಗಡಿ ಮಾತನಾಡಿ ಕನ್ನಡ ಭಾಷೆಯನ್ನು ನಿತ್ಯವೂ ಬಳಕೆ ಮಾಡುವ ಮೂಲಕ ವಿದ್ಯಾರ್ಥಿಗಳಲ್ಲಿ ಭಾಷಾಭಿಮಾನ ಬೆಳಸಬೇಕು, ಇಂದಿನ ಯುವಕರು ಅನ್ಯ ಭಾಷೆಗಳ ಪ್ರಭಾವಕ್ಕೆ ಒಳಗಾಗದೆ ಮಾತೃಭಾಷೆಯನ್ನು ಗೌರವಿಸಬೇಕೆಂದು ಹೇಳಿದರು.
ಕಸಾಪ ತಾಲ್ಲೂಕು ಘಟಕದ ಗೌರವ ಕಾರ್ಯದರ್ಶಿ ಕನಕರೆಡ್ಡಿ ಕೆರಿ ಮಾತನಾಡಿ ಕನ್ನಡ ಸಪ್ತಾಹ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಲ್ಲಿ ಅಡಗಿದ ಪ್ರತಿಭೆಯನ್ನು ಅನಾವರಣಗೊಳಿಸಿರುವುದು ಶ್ಲಾಘನೀಯವಾಗಿದೆ, ಸತತ ಎಂಟು ವರ್ಷಗಳಿಂದಲೂ ಕನ್ನಡ ಸಪ್ತಾಹ ಕಾರ್ಯಕ್ರಮ ಆಯೋಜಿಸಿರುವುದು ಶಾಲೆಯ ಕನ್ನಡ ಪ್ರೇಮವನ್ನು ಎತ್ತಿ ತೋರಿಸುತ್ತದೆ ಎಂದು ಗುಣಗಾನ ಮಾಡಿದರು.
ಮುಖ್ಯಶಿಕ್ಷಕಿ ಅರುಣಕುಮಾರ ವಸ್ತ್ರದ ಮಾತನಾಡಿ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಬೆಳಸಲು ಹಾಗೂ ಕನ್ನಡ ಭಾಷೆಯ ಬೆಳವಣಿಗೆಗಾಗಿ ಈ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ ಎಂದರು. ಪ್ರವಚನಕಾರ ಮಹಾಬಳೇಶ್ವರ ಆಕಳಕುಂಪಿ,
ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಮೆಹಬೂಬಹುಸೇನ, ಶಿಕ್ಷಕಿ ಹುಸೇನಬಾನು ಮಾತನಾಡಿದರು. ಶಿಕ್ಷಕರಾದ ಅನಿತಾ ಚಿತ್ರಗಾರ, ಪೂಜಾ ಮಡಿವಾಳರ, ಪಾರ್ವತಿ, ಗೌರಮ್ಮ, ಮೆರೂನ್ ಇದ್ದರು.
ಪ್ರಶಾಂತ ನಿರೂಪಿಸಿದರು. ಸಂಗೀತಾ ವಂದಿಸಿದರು. ಕನ್ನಡ ಸಪ್ತಾಹದ ನಿಮಿತ್ತ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Get real time updates directly on you device, subscribe now.

Comments are closed.

error: Content is protected !!
%d bloggers like this: