ಮಹಾರಾಷ್ಟ್ರದ ಕನ್ನಡ ಶಾಲೆಗಳಿಗೆ ಶಿಕ್ಷಕರ ನೇಮಕವಾಗಲಿ-ಕರವೇ ಜಿಲ್ಲಾಧ್ಯಕ್ಷ ಬಿ.ಗಿರೀಶಾನಂದ ಆಗ್ರಹ.
| ಭಾಷಾ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಟಿಇಟಿ ವಿನಾಯಿತಿ ನೀಡಿ|| ಗಡಿನಾಡ ಕನ್ನಡ ಶಾಲೆಗಳ ತಾರತಮ್ಯ ನಿಲ್ಲಲಿ|||
ಕೊಪ್ಪಳ,ಡಿ.೨೨: ಕರ್ನಾಟಕ ಗಡಿ ಭಾಗದ ಸರ್ಕಾರಿ ಕನ್ನಡ ಶಾಲೆಗಳಿಗೆ ಮಹಾರಾಷ್ಟ್ರ ಸರ್ಕಾರವು ಹಲವು ವರ್ಷಗಳಿಂದ ಶಿಕ್ಷಕರನ್ನು ನೇಮಕ ಮಾಡದ ಕಾರಣ ಹಲವು ಶಾಲೆಗಳು ಬಾಗಿಲು ಮುಚ್ಚುವ ಸ್ಥಿತಿಗೆ ತಲುಪಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಬಿ.ಗಿರೀಶಾನಂದ ಜ್ಞಾನಸುಂದರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ನಡ ಶಾಲೆಗಳಲ್ಲಿ ಬಹುತೇಕ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಕನ್ನಡ ಭಾಷೆ ಹಾಗೂ ಮಾಧ್ಯಮದಲ್ಲಿ ಬೋಧಿಸುವ ಶಿಕ್ಷಕರ ಕೊರತೆಯ ಕಾರಣ ಮಕ್ಕಳು ಕನ್ನಡ ಶಾಲೆಗಳಿಂದ ವಿಮುಖವಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ ಅವರು ಸಾಂಗಲಿ ಮತ್ತು ಸೊಲ್ಲಾಪುರ ಜಿಲ್ಲೆಗಳ ಗಡಿ ಭಾಗಗಳಲ್ಲಿ ಶಿಕ್ಷಕರ ಸಮಸ್ಯೆ ತೀವ್ರವಾಗಿದೆ. ಮಹಾರಾಷ್ಟ್ರ ಸರ್ಕಾರ ೨೦೧೦ರಲ್ಲಿ ಕನ್ನಡ ಶಿಕ್ಷಕರನ್ನು ನೇಮಕ ಮಾಡಿತ್ತು. ಆ ನಂತರ ನೇಮಕಾತಿ ಪ್ರಕ್ರೀಯೆಗಳೇ ನಡೆದಿಲ್ಲ. ಆದರೆ, ಮರಾಠಿ ಶಿಕ್ಷಕರ ನೇಮಕ ಮಾಡಲಾಗುತ್ತಿದೆ. ಕನ್ನಡ ಶಾಲೆಗಳಿಗೆ ತಾರತಮ್ಯ ಮಾಡಲಾಗುತ್ತಿದೆ ಎಂದು ದೂರಿದರು. ಮಹಾರಾಷ್ಟ್ರದಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು (ಟಿಇಟಿ) ಮರಾಠಿ ಮಾದ್ಯಮದಲ್ಲಿಯೇ ಬರೆಯಬೇಕಿದೆ. ಹಾಗಾಗಿ, ಟಿಇಟಿ ಉತ್ತೀರ್ಣರಾದ ಕನ್ನಡಿಗರ ಸಂಖ್ಯೆ ಕಡಿಮೆ ಇದೆ. ಮಹಾರಾಷ್ಟ್ರ ಸರ್ಕಾರ ಭಾಷಾ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಟಿಇಟಿ ಕಡ್ಡಾಯ ಮಾಡಬಾರದು, ಕೂಡಲೇ ಕನ್ನಡ ಶಾಲೆಗಳಿಗೆ ಶಿಕ್ಷಕರನ್ನು ನೇಮಿಸುವಲ್ಲಿ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಂತ ಉಘ್ರವಾಗಿ ಬೀದಿಗಿಳಿದು ಪ್ರತಿಭಟಿಸಬೇಕಾಗುತ್ತದೆ ಎಂದು ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.
Comments are closed.